ಕನ್ನಡಪ್ರಭ ವಾರ್ತೆ ಹಾಸನ
ಹಿರಿಯ ನಾಗರಿಕರು ಸಮಾಜದ ಅವಿಭಾಜ್ಯ ಅಂಗವಿದ್ದಂತೆ. ಕೊನೆಯ ಉಸಿರು ಇರುವವರೆಗೂ ಕ್ರಿಯಾಶೀಲತೆಯನ್ನು ಅಳವಡಿಸಿಕೊಂಡರೆ ಜೀವನ ಗೌರವಯುತವಾಗುತ್ತದೆ ಎಂದು ಹಾಸನ ಜಿಲ್ಲೆಯ ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಹೇಳಿದರು.ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಜಿಲ್ಲೆಯ ಹಿರಿಯ ನಾಗರಿಕರ ಸ್ವಯಂಸೇವಾ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಶನಿವಾರ ನಡೆದ “ಹಿರಿಯ ನಾಗರಿಕರ ದಿನಾಚರಣೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಯಸ್ಸು ಕೇವಲ ಒಂದು ಸಂಖ್ಯೆ ಮಾತ್ರ. ಹಿರಿಯರು ನಮ್ಮ ಕೈಯಿಂದ ಇನ್ನು ಏನು ಸಾಧ್ಯ ಎಂಬ ನಿರುತ್ಸಾಹದ ಭಾವನೆ ಬೆಳೆಸಿಕೊಳ್ಳದೆ, ಉತ್ಸಾಹಭರಿತ ಜೀವನ ರೂಪಿಸಿಕೊಂಡು ಯುವ ಪೀಳಿಗೆಗೆ ಮಾದರಿಯಾಗಬೇಕು. ವಯಸ್ಸಾದಂತೆ ದೇಹದಲ್ಲಿ ಉಂಟಾಗುವ ಸಮಸ್ಯೆಗಳನ್ನು ಕಡೆಗಣಿಸದೆ ಆರೋಗ್ಯ ಕಾಪಾಡಿಕೊಳ್ಳಬೇಕು. ಕೆಟ್ಟ ಹವ್ಯಾಸಗಳನ್ನು ಬಿಟ್ಟು ಪ್ರತಿನಿತ್ಯ ಸಕ್ರಿಯವಾಗಿರುವ ಅಭ್ಯಾಸ ಬೆಳೆಸಿಕೊಳ್ಳಿ ಎಂದು ಸಲಹೆ ನೀಡಿದರು.
ಹಿರಿಯರು ಮರದ ಬೇರಿನಂತವರು. ಬೇರೆಷ್ಟು ಗಟ್ಟಿಯಾಗುತ್ತದೋ ಕುಟುಂಬವೂ ಅಷ್ಟೇ ದೃಢವಾಗಿರುತ್ತದೆ. ಅವರ ಅನುಭವ ಕುಟುಂಬ ಹಾಗೂ ಸಮಾಜದ ಶಕ್ತಿ. ಹಿರಿಯರ ಕಲ್ಯಾಣಕ್ಕಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಎಲ್ಲರೂ ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು. ಹಿರಿಯ ನಾಗರಿಕರಿಗೆ ಯಾವುದೇ ಸಮಸ್ಯೆ ಎದುರಾದಲ್ಲಿ ಸಹಾಯವಾಣಿ ೧೪೫೬೭ ಸಂಖ್ಯೆಗೆ ಕರೆಮಾಡಿದರೆ ಇಲಾಖೆಯ ಅಧಿಕಾರಿಗಳು ತಕ್ಷಣ ಸ್ಪಂದಿಸುವರು ಎಂದು ಡಿಸಿ ತಿಳಿಸಿದರು.ಕಾರ್ಯಕ್ರಮದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಹಿರಿಯ ನಾಗರಿಕರಿಗೆ ಗೌರವ ಸನ್ಮಾನ ಸಲ್ಲಿಸಲಾಯಿತು. ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಪೂರ್ವಭಾವಿಯಾಗಿ ನಡೆದ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿಗಳನ್ನು ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಾಕ್ಷಾಯಿಣಿ, ಅಂಗವಿಕಲರ ಕಲ್ಯಾಣಾಧಿಕಾರಿ ಅನುಪಮ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಾಬು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಧರಣಿ ಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಮೀನಾಕ್ಷಮ್ಮ ಹಾಗೂ ಅನೇಕ ಅಧಿಕಾರಿಗಳು, ಹಿರಿಯ ನಾಗರಿಕರು ಉಪಸ್ಥಿತರಿದ್ದರು.