ಕೊಪ್ಪಳದಲ್ಲಿ ಶೀಘ್ರವೇ ಪ್ರತ್ಯೇಕ ಎಸ್‌ಟಿ ಜಿಲ್ಲಾ ಕಚೇರಿ ಸ್ಥಾಪನೆ: ಶಿವರಾಜ ತಂಗಡಗಿ

KannadaprabhaNewsNetwork |  
Published : Nov 23, 2026, 02:15 AM IST
ಕಾರಟಗಿ ಪಟ್ಟಣದಲ್ಲಿ ಭಾನುವಾರ ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ಪರಿಶಿಷ್ಟ ಪಂಗಡಗಳ ಸಮುದಾಯ ಭವನದ ಭೂಮಿಪೂಜೆ ಕಾರ್ಯಕ್ರಮ ನಡೆಯಿತು. | Kannada Prabha

ಸಾರಾಂಶ

ಕನಕಗಿರಿ ಮತ್ತು ಕಾರಟಗಿಯಲ್ಲಿ ಬೃಹತ್ ವಾಲ್ಮೀಕಿ ಸಮುದಾಯ ಭವನ ನಿರ್ಮಾಣಕ್ಕೆ ತಲಾ ₹2 ಕೋಟಿ ಅನುದಾನ ಮೀಸಲಿಡಲಾಗಿದೆ.

ಕಾರಟಗಿ: ಕೊಪ್ಪಳ ಜಿಲ್ಲೆಯಲ್ಲಿ ಪರಿಶಿಷ್ಟ ಪಂಗಡಗಳ (ಎಸ್‌ಟಿ) ಸಮುದಾಯದ ಅನುಕೂಲಕ್ಕಾಗಿ ಶೀಘ್ರದಲ್ಲೇ ಪ್ರತ್ಯೇಕ ಜಿಲ್ಲಾ ಕಚೇರಿ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್. ತಂಗಡಗಿ ಭರವಸೆ ನೀಡಿದರು.

ಪಟ್ಟಣದಲ್ಲಿ ಭಾನುವಾರ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಹಾಗೂ ಪರಿಶಿಷ್ಟ ಪಂಗಡಗಳ ಸಮುದಾಯ ಭವನದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತ್ಯೇಕ ಎಸ್‌ಟಿ ಜಿಲ್ಲಾ ಕಚೇರಿ ಸ್ಥಾಪನೆ ಕುರಿತು ಸಂಬಂಧಪಟ್ಟ ಇಲಾಖೆ ಸಚಿವರೊಂದಿಗೆ ಚರ್ಚಿಸಿದ್ದು, ಸಕಾರಾತ್ಮಕ ಭರವಸೆ ದೊರೆತಿದೆ ಎಂದರು.

₹7.79 ಕೋಟಿ ಅನುದಾನ: ಕನಕಗಿರಿ ಮತ್ತು ಕಾರಟಗಿಯಲ್ಲಿ ಬೃಹತ್ ವಾಲ್ಮೀಕಿ ಸಮುದಾಯ ಭವನ ನಿರ್ಮಾಣಕ್ಕೆ ತಲಾ ₹2 ಕೋಟಿ ಅನುದಾನ ಮೀಸಲಿಡಲಾಗಿದೆ. ಒಟ್ಟಾರೆ ಕ್ಷೇತ್ರದಲ್ಲಿ ಪರಿಶಿಷ್ಟ ಪಂಗಡಗಳ ಸಮುದಾಯ ಭವನಗಳ ನಿರ್ಮಾಣಕ್ಕೆ ₹7.79 ಕೋಟಿ ಅನುದಾನ ಒದಗಿಸಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಅನುದಾನದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು, ಅಗತ್ಯಬಿದ್ದರೆ ಪ್ರಗತಿಯ ಹಂತದಲ್ಲಿ ಹೆಚ್ಚುವರಿ ಅನುದಾನ ನೀಡಲಾಗುವುದು. ಅಲ್ಲದೆ, ಎಸ್‌ಟಿ ಸಮುದಾಯದ ದೇವಾಲಯ ನಿರ್ಮಾಣಕ್ಕೆ ವೈಯಕ್ತಿಕವಾಗಿ ₹10 ಲಕ್ಷ ದೇಣಿಗೆ ನೀಡುವುದಾಗಿ ಘೋಷಿಸಿದರು.

ಜಿಲ್ಲೆಯ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಏಷ್ಯಾದಲ್ಲೇ ಅತಿ ದೊಡ್ಡ ರೈಸ್ ಟೆಕ್ನಾಲಜಿ ಪಾರ್ಕ್, ಪ್ರಜಾಸೌಧ ಹಾಗೂ 100 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಕೆರೆ ತುಂಬಿಸುವ ಯೋಜನೆ ಜಾರಿಗೊಳಿಸುವ ಮೂಲಕ ನೀರಿನ ಬವಣೆ ನಿವಾರಿಸಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದರು.

ಶ್ರೀಮಂತ ಇತಿಹಾಸ: ಮಹರ್ಷಿ ವಾಲ್ಮೀಕಿ ಅವರು ರಾಮಾಯಣದ ಮೂಲಕ ಜಗತ್ತಿಗೆ ಆದರ್ಶ ಜೀವನದ ಸಂದೇಶ ಸಾರಿದ ಮಹಾನ್ ದಾರ್ಶನಿಕರು. ವಾಲ್ಮೀಕಿ ಸಮುದಾಯಕ್ಕೆ ಶೌರ್ಯ, ಸಾಹಸ, ಸ್ವಾಭಿಮಾನ ಹಾಗೂ ತ್ಯಾಗದ ಶ್ರೀಮಂತ ಇತಿಹಾಸವಿದೆ. ಕನ್ನಡ ನಾಡಿನ ಇತಿಹಾಸದಲ್ಲಿ ಅಚ್ಚಳಿಯದ ಛಾಪು ಮೂಡಿಸಿರುವ ಗಂಡುಗಲಿ ಕುಮಾರರಾಮ ಈ ಸಮುದಾಯದ ಹೆಮ್ಮೆಯ ಪ್ರತೀಕವಾಗಿದ್ದಾರೆ. ಕುಮಾರರಾಮರ ಶೌರ್ಯ, ಪರಾಕ್ರಮ ಹಾಗೂ ನಾಡಿನ ರಕ್ಷಣೆಗೆ ತೋರಿದ ಧೈರ್ಯ ಇಂದಿನ ಯುವಜನತೆಗೆ ಸ್ಫೂರ್ತಿಯಾಗಬೇಕು. ಮೈಸೂರು ದಸರಾ ಸೇರಿದಂತೆ ನಾಡಿನ ಐತಿಹಾಸಿಕ ಪರಂಪರೆ ಹಾಗೂ ವಿಜಯನಗರ ಸಾಮ್ರಾಜ್ಯದ ಗತವೈಭವವನ್ನು ಸ್ಮರಿಸುವಾಗ ಇಂತಹ ವೀರರ ಕೊಡುಗೆಯನ್ನು ಮರೆಯಲು ಸಾಧ್ಯವಿಲ್ಲ. ವಾಲ್ಮೀಕಿ ಸಮುದಾಯದ ಇತಿಹಾಸ ಇಡೀ ಕನ್ನಡ ನಾಡಿನ ಹೆಮ್ಮೆಯ ಇತಿಹಾಸವಾಗಿದೆ. ಸಮುದಾಯದ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದರು.

ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ರೆಡ್ಡಿ ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶರಣೇಗೌಡ ಮಾಲಿ ಪಾಟೀಲ್, ಪುರಸಭೆ ಅಧ್ಯಕ್ಷ ಮಂಜುನಾಥ ಮೇಗೂರು, ಕೊಪ್ಪಳ ವಾಲ್ಮೀಕಿ ಸಮಾಜದ ಅಧ್ಯಕ್ಷ ಕೆ.ಎನ್. ಪಾಟೀಲ್, ಬೂದುಗಿರಿಯಪ್ಪ, ಶಿವಾರೆಡ್ಡಿ ನಾಯಕ್, ಅಂಬಣ್ಣ ನಾಯಕ್, ಹನುಮೇಶ್ ನಾಯಕ್, ನಾಗರಾಜ್, ರಮೇಶ್ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬರದಲ್ಲಿ ಆಸರೆಯಾದ ಕಳಸಕೊಪ್ಪ ಕೆರೆ
ಬೆಳಗಾವಿಯಲ್ಲಿ ಮಟಕಾ ದಂಧೆ ಮೇಲೆ ಪೊಲೀಸರ ಸರಣಿ ದಾಳಿ