ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳಿ: ಮಹಾಂತೇಶ ಎಸ್. ದರಗದ

KannadaprabhaNewsNetwork |  
Published : Jun 14, 2026, 02:30 AM IST
ಪೂರ್ವಭಾವಿ ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕೊಪ್ಪಳ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ ಎಸ್. ದರಗದ ಮಾತನಾಡಿದರು. | Kannada Prabha

ಸಾರಾಂಶ

ಸಾರ್ವಜನಿಕರು, ಅಧಿಕಾರಿಗಳು ರಾಷ್ಟ್ರೀಯ ಲೋಕ್ ಅದಾಲತ್ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ ಎಸ್. ದರಗದ ಹೇಳಿದ್ದಾರೆ.

ಕೊಪ್ಪಳ: ರಾಜ್ಯಾದ್ಯಂತ ಜುಲೈ ೧೧ರಂದು ನಡೆಯುವ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ತಮ್ಮ- ತಮ್ಮ ಇಲಾಖೆಯಿಂದ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ರಾಷ್ಟ್ರೀಯ ಲೋಕ್ ಅದಾಲತ್ ಉತ್ತಮ ಅವಕಾಶವಾಗಿದೆ. ಸಾರ್ವಜನಿಕರು, ಅಧಿಕಾರಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ ಎಸ್. ದರಗದ ಹೇಳಿದ್ದಾರೆ.

ನಗರದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ಜುಲೈ ೧೧ರಂದು ನಡೆಯುವ ರಾಷ್ಟ್ರೀಯ ಲೋಕ್ ಅದಾಲತ್‌ನ ಅಂಗವಾಗಿ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಕರೆದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಹಳಷ್ಟು ಜನರಿಗೆ ಕಾನೂನಿನ ಅರಿವೇ ಇಲ್ಲ. ಈ ಕುರಿತು ನಾವೆಲ್ಲರೂ ಜನರಿಗೆ ಮಾಹಿತಿ ನೀಡುವ ಕೆಲಸ ಮಾಡಬೇಕು. ರಾಷ್ಟ್ರೀಯ ಲೋಕ ಅದಾಲತ್ ನಡೆಯುತ್ತಿರುವ ಕುರಿತು ಹೆಚ್ಚಿನ ಪ್ರಚಾರ ನೀಡಿ. ನಗರಸಭೆ ವಾಹನಗಳಲ್ಲಿ ಮತ್ತು ಬಸ್ ನಿಲ್ದಾಣಗಳಲ್ಲಿ ಹಾಗೂ ಪತ್ರಿಕೆಗಳಲ್ಲಿ ಈ ಕುರಿತು ಹೆಚ್ಚು ಪ್ರಚಾರ ಆಗಬೇಕು. ರಾಜಿ ಸಂಧಾನದ ಮೂಲಕ ಪ್ರಕರಣಗಳು ಇತ್ಯರ್ಥವಾದರೆ ಜನರ ಸಮಯ ಮತ್ತು ಅವರ ಸಂಬಂಧಗಳು ಉಳಿಯುತ್ತವೆ. ಈ ಸಲ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಪಡಿಸುವ ಗುರಿ ಇದ್ದು, ಇದಕ್ಕೆ ತಮ್ಮೆಲ್ಲರ ಸಹಕಾರ ಬೇಕಾಗುತ್ತದೆ ಎಂದು ಹೇಳಿದರು.

ಸಿವಿಲ್ ದಾವೆಗಳು, ಭೂ-ಸ್ವಾಧೀನ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಹಾಗೂ ರಾಜಿ ಆಗಲು ಅರ್ಹವಿರುವ ಕ್ರಿಮಿನಲ್ ಕಂಪೌಂಡೆಬಲ್ ಪ್ರಕರಣಗಳು ಸೇರಿದಂತೆ ಹಲವಾರು ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. ರಾಜಿ ಸಂಧಾನದಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರೆ ಪ್ರಕರಣ ಇಬ್ಬರಿಗೂ ಒಪ್ಪಿಗೆಯಾಗುವಂತೆ ಕೊನೆಗೊಂಡು ನ್ಯಾಯಾಲಯಕ್ಕೆ ತುಂಬಿದ ಶುಲ್ಕವನ್ನು ಸಂಪೂರ್ಣವಾಗಿ ವಾಪಸ್ ನೀಡಲಾಗುವುದು. ಆದ್ದರಿಂದ ಜುಲೈ ೧೧ರಂದು ರಾಜ್ಯಾದ್ಯಂತ ನಡೆಯುವ ರಾಷ್ಟ್ರೀಯ ಲೋಕ್ ಅದಾಲತ್‌ನ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಹೇಳಿದರು.

ಮಾದಕ ವ್ಯಸನ ತಡೆಗಟ್ಟುವ ಕುರಿತು ಕಾರ್ಯಾಗಾರ

ಇದೇ ಸಂದರ್ಭ ಮಾದಕ ವ್ಯಸನ ತಡೆಗಟ್ಟುವ ಕುರಿತು ಎಲ್ಲ ಇಲಾಖೆಗಳ ಸಹಯೋಗದಲ್ಲಿ ಕಾರ್ಯಾಗಾರವನ್ನು ಹಮ್ಮಿಕೊಳ್ಳುವ ಕುರಿತು ಚರ್ಚಿಸಲಾಯಿತು.

ಈ ಕುರಿತು ಮಾತನಾಡಿದ ನ್ಯಾ. ಮಹಾಂತೇಶ ದರಗದ ಅವರು, ಅಭಿವೃದ್ಧಿ ಹೊಂದಿದ ನಗರ ಪ್ರದೇಶ ಹಾಗೂ ಅಭಿವೃದ್ಧಿ ಹೊಂದುತ್ತಿರುವ ನಗರ, ಪಟ್ಟಣಗಳಲ್ಲಿ ಸದ್ದಿಲ್ಲದೆ ಮಾದಕ ವ್ಯಸನದ ಜಾಲ ಹರಡುತ್ತಿದೆ. ಚಾಕೋಲೇಟ್, ತಂಪು ಪಾನೀಯ ಮುಂತಾದ ಹಲವಾರು ರೂಪಗಳಲ್ಲಿ ಮಕ್ಕಳು, ಯುವಕರಿಗೆ ತಿಳಿಯದಂತೆ ಮಾದಕ ವಸ್ತುಗಳನ್ನು ಪೂರೈಸಲಾಗುತ್ತಿದೆ. ಇದು ಒಂದು ರೀತಿಯಲ್ಲಿ ನಿಶಬ್ಧ ದೇಶದ್ರೋಹಿ ಕೃತ್ಯವಾಗಿದೆ. ಇದರಿಂದ ನಮ್ಮ ಮಕ್ಕಳನ್ನು ರಕ್ಷಿಸಬೇಕಿದೆ. ಇಂತಹ ಜಾಲಗಳಿಗೆ ಬಲಿಯಾಗದಂತೆ ಸೂಕ್ತ ತಿಳಿವಳಿಕೆ ನೀಡುವ ಅಗತ್ಯವಿದೆ. ಶಾಲಾ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳ ಮೂಲಕ ಮಕ್ಕಳನ್ನು ಎಚ್ಚರಿಸಬೇಕಿದೆ. ಸ್ವಸ್ಥ ಸಮಾಜದ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿ ಎಂದು ಅವರು ಹೇಳಿದರು.

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹೇಮಂತ್ ಕುಮಾರ್, ಡಿಡಿಪಿಯು ಜಗದೀಶ, ವೈದ್ಯಾಧಿಕಾರಿ ಡಾ. ಪ್ರಕಾಶ, ಜಿಲ್ಲಾ ಕಾರಾಗೃಹ ಅಧಿಕಾರಿ ಅಮರೇಶ ಪೂಜಾರಿ, ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಬಿ. ಹಿರೇಗೌಡರ ಸೇರಿದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳು ಅತಂತ್ರ
ಸಂವಿಧಾನದಿಂದ ಬಾಲ ಕಾರ್ಮಿಕ ಪದ್ಧತಿ ದೂರವಿಡಲು ಸಾಧ್ಯ