ನ.14ರಂದು ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತಕ್ಕೆ ಹಲವು ಕಾರ್ಯಕ್ರಮ ಆಯೋಜನೆ

KannadaprabhaNewsNetwork |  
Published : Jul 4, 2025 11:49 PM IST
4ಸಿಎಚ್‌ಎನ್‌58ಚಾಮರಾಜನಗರದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ತಹಶೀಲ್ದಾರ್ ಗಿರಿಜಾ ಅವರೊಂದಿಗೆ ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸುವ ಸಂಬಂಧ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯನ್ನು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್ ಅವರು ನಡೆಸಿದರು. | Kannada Prabha

ಸಾರಾಂಶ

ಚಾಮರಾಜನಗರದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ತಹಸೀಲ್ದಾರ್‌ ಗಿರಿಜಾ ಅವರೊಂದಿಗೆ ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸುವ ಸಂಬಂಧ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್ ನಡೆಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸುವ ಉದ್ದೇಶದಿಂದ ಪರಿಣಾಮಕಾರಿಯಾಗಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದ್ದು, ಚಾಮರಾಜನಗರ ತಾಲೂಕಿನಲ್ಲಿಯೂ ಕಾರ್ಯಕ್ರಮ ಆಯೋಜನೆಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್ ಸೂಚಿಸಿದರು.

ನಗರದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ತಹಸೀಲ್ದಾರ್ ಗಿರಿಜಾ ಅವರೊಂದಿಗೆ ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸುವ ಸಂಬಂಧ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಮಕ್ಕಳ ಹಕ್ಕುಗಳು, ರಕ್ಷಣೆ ಕುರಿತು ಹಲವಾರು ಕಾಯ್ದೆ ಸುತ್ತೋಲೆಗಳು ಇವೆ. ಇದರ ಅನುಷ್ಠಾನದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಜಿಲ್ಲೆಯಲ್ಲಿ ಬಾಲ್ಯ ವಿವಾಹವನ್ನು ಸಂಪೂರ್ಣ ತಡೆಗಟ್ಟಿ ನ.14ರಂದು ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿ ಘೋಷಿಸಲು ಈಗಾಗಲೇ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರಲಾಗುತ್ತಿದೆ ಎಂದರು.

ಜಿಲ್ಲಾ ಕೇಂದ್ರದಲ್ಲಿ ಇತ್ತೀಚೆಗೆ ಬೃಹತ್ ವಾಕಥಾನ್ ಮೂಲಕ ಅರಿವು ಮೂಡಿಸುವ ಕಾರ್ಯವಾಗಿದೆ. ತಾಲೂಕಿನ ವಿವಿಧೆಡೆ ಮತ್ತಷ್ಟು ಜಾಗೃತಿ ಕಾರ್ಯಕ್ರಮಗಳನ್ನು ವಿವಿಧ ಇಲಾಖೆಗಳು ಸಮನ್ವಯ ಸಹಕಾರದೊಂದಿಗೆ ಏರ್ಪಡಿಸಬೇಕು. ಬಾಲ್ಯ ವಿವಾಹದಿಂದ ಅಗುವ ದುಷ್ಪರಿಣಾಮಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕು. ಈ ಮಹತ್ತರ ಉದ್ದೇಶ ಇಟ್ಟುಕೊಂಡು ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ, ಶಿಕ್ಷಣ ಇಲಾಖೆ, ಇನ್ನಿತರ ಇಲಾಖೆಗಳು ಪ್ರತ್ಯೇಕವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಈ ತಿಂಗಳಿನಿಂದಲೇ ಹಮ್ಮಿಕೊಳ್ಳಬೇಕು. ಬಾಲ್ಯವಿವಾಹ ತಡೆ ಕುರಿತ ಸಂದೇಶ ರವಾನೆ ಮಾಡಬೇಕು. ಪರಿಣಾಮಕಾರಿಯಾಗಿ ಜನರಿಗೆ ಮಕ್ಕಳ ಹಕ್ಕುಗಳ ರಕ್ಷಣೆ ಕುರಿತು ತಿಳಿವಳಿಕೆ ಮೂಡಿಸಬೇಕು ಎಂದರು.ತಹಸೀಲ್ದಾರ ಗಿರಿಜಾ ಮಾತನಾಡಿ, ತಾಲೂಕು ಮಟ್ಟದಲ್ಲಿ ಇಲಾಖೆಗಳು ಆಯೋಜಿಸುವ ಅರಿವು ಕಾರ್ಯಕ್ರಮಗಳಿಗೆ ಎಲ್ಲಾ ಬಗೆಯ ಸಹಕಾರ ನೀಡಲಾಗುವುದು. ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತವನ್ನಾಗಿಸಲು ತಾಲೂಕು ಆಡಳಿತದಿಂದ ಪರಿಣಾಮಕಾರಿಯಾಗಿ ಕಾರ್ಯಕ್ರಮ ರೂಪಿಸಿ ಯಶಸ್ವಿಯಾಗಿ ಅನುಷ್ಠಾನ ಮಾಡಲಾಗುವುದು ಎಂದರು.

ಜಿಪಂ ಸಹಾಯಕ ಕಾರ್ಯದರ್ಶಿ ಹಾಗೂ ಚಾಮರಾಜನಗರ ತಾಪಂ ಪ್ರಭಾರ ಕಾರ್ಯದರ್ಶಿ ಶ್ರೀಕಂಠರಾಜೇ ಅರಸ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುಳಾ, ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಶೆಟ್ಟಿ, ತಾಲೂಕುಮಟ್ಟದ ಸಮಾಜ ಕಲ್ಯಾಣ ಅಧಿಕಾರಿ ನಂಜುಂಡೇಗೌಡ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಲಿಂಗರಾಜು, ಶಿಶು ಅಭಿವೃದ್ದಿ ಯೋಜನಾಧಿಕಾರಿ ನಾಗೇಶ್, ಜಯಶೀಲ, ಇತರೆ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

PREV