ಹಿರೇಕೆರೂರು: ಸರ್ಕಾರದ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುವುದರ ಜತೆಗೆ ಸೌಲಭ್ಯಗಳಿಂದ ವಂಚಿತರಾಗಿರುವವರ ಸಮಸ್ಯೆಗಳನ್ನು ಗುರುತಿಸಿ ಪರಿಹರಿಸುವ ನಿಟ್ಟಿನಲ್ಲಿ ಪ್ರಜಾಸೇವಾ ಆಂದೋಲನ ಮಹತ್ವದ ವೇದಿಕೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಹೇಳಿದರು.
ತಾಲೂಕಿನ ವಿವಿಧ ಇಲಾಖೆಗಳ ಸೇವೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಸ್ವೀಕರಿಸಿರುವ ಸಮಸ್ಯೆಗಳನ್ನು ಪರಿಶೀಲಿಸಿ, ಸಾಧ್ಯವಾದಷ್ಟು ಶೀಘ್ರವಾಗಿ ಪರಿಹಾರ ನೀಡಲು ಸೂಚಿಸಲಾಗಿದೆ. ತಾಲೂಕು ಆಡಳಿತಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಸ್ಥಳೀಯ ಹಂತದಲ್ಲಿಯೇ ಬಗೆಹರಿಸಲಾಗುವುದು. ಜಿಲ್ಲಾಡಳಿತದ ವ್ಯಾಪ್ತಿಗೆ ಬರುವ ವಿಷಯಗಳನ್ನು ಜಿಲ್ಲಾಧಿಕಾರಿಗಳು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ರಾಜ್ಯ ಸರ್ಕಾರದ ಹಂತದಲ್ಲಿ ಪರಿಹರಿಸಬೇಕಾದ ಸಮಸ್ಯೆಗಳ ಕುರಿತು ಸರ್ಕಾರಕ್ಕೆ ಮಾಹಿತಿ ನೀಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಬರ ಘೋಷಣೆ ಕುರಿತು ಪರಿಶೀಲನೆ: ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಗೆ ಸಂಬಂಧಿಸಿದಂತೆ ರೈತ ಸಂಘಟನೆಗಳ ಮುಖಂಡರು ಬರ ಘೋಷಣೆ ಮಾಡುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದ್ದಾರೆ. ಈ ಕುರಿತು ನಡೆದ ಸಚಿವ ಸಂಪುಟ ಸಭೆಯಲ್ಲಿ ಕಂದಾಯ ಸಚಿವರೊಂದಿಗೆ ವಿವರವಾಗಿ ಚರ್ಚಿಸಲಾಗಿದೆ. ಈಗಾಗಲೇ ಏಳು ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದ್ದು, ಇನ್ನೊಂದು ತಾಲೂಕಿನ ಕುರಿತು ಕೇಂದ್ರ ಸರ್ಕಾರದ ಮಾನದಂಡಗಳ ಆಧಾರದ ಮೇಲೆ ಪರಿಶೀಲನೆ ನಡೆಯುತ್ತಿದೆ ಎಂದು ತಿಳಿಸಿದರು.ಸೆ. 21, 22 ಮತ್ತು 23ರಂದು ನಡೆಯಲಿರುವ ವಿಧಾನಸಭೆ ಅಧಿವೇಶನದಲ್ಲಿ ರೈತರ ಹಾಗೂ ಸಾರ್ವಜನಿಕರ ಸಮಸ್ಯೆಗಳ ಕುರಿತು ಚರ್ಚಿಸಿ, ಅಗತ್ಯ ಪರಿಹಾರ ಕ್ರಮ ಕೈಗೊಳ್ಳಲು ಪ್ರಯತ್ನಿಸಲಾಗುವುದು ಎಂದರು.
ಜಿಲ್ಲಾಧಿಕಾರಿಗಳು, ಶಾಸಕರು ಹಾಗೂ ಸಂಬಂಧಿಸಿದ ಅಧಿಕಾರಿಗಳು ಮುಂದಿನ ಕೆಡಿಪಿ ಸಭೆಯಲ್ಲಿಯೂ ಅರ್ಜಿಗಳ ವಿಲೇವಾರಿ ಹಾಗೂ ಸಾರ್ವಜನಿಕರ ಸಮಸ್ಯೆಗಳ ಕುರಿತು ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ ಎಂದರು.
ಈ ಹಿಂದೆ ಜನಸ್ಪಂದನ ಸೇರಿದಂತೆ ವಿವಿಧ ಹೆಸರಿನಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸುವ ಕಾರ್ಯಕ್ರಮಗಳು ನಡೆದಿದ್ದರೂ, ಅವುಗಳ ಮನವಿಗಳು ವ್ಯವಸ್ಥಿತವಾಗಿ ದಾಖಲಾಗದೆ ಉಳಿಯುತ್ತಿದ್ದವು. ಆದರೆ ಪ್ರಜಾಸೇವಾ ಆಂದೋಲನವನ್ನು ವ್ಯವಸ್ಥಿತವಾಗಿ ದಾಖಲಿಸಿ, ಜನರ ಸಮಸ್ಯೆಗಳನ್ನು ಬೆಂಗಳೂರಿನವರೆಗೆ ತಲುಪಿಸಿ ಪರಿಹಾರ ಕಲ್ಪಿಸುವ ಉದ್ದೇಶದಿಂದ ರೂಪಿಸಲಾಗಿದೆ ಎಂದರು.
ಯುವಜನರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಭಾರತ್ ಜೋಡೋ ಯುವಕ ಸಂಘಗಳ ರಚನೆಗೂ ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರತಿಯೊಂದು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕನಿಷ್ಠ 100 ಸದಸ್ಯರನ್ನು ಹೊಂದಿರುವ ಯುವಕ ಸಂಘಗಳನ್ನು ರಚಿಸಿ, ರಾಜ್ಯದಾದ್ಯಂತ ಯುವಜನರನ್ನು ಸಂಘಟಿಸಿ ಸಮಾಜ ನಿರ್ಮಾಣ ಹಾಗೂ ಬಲವರ್ಧನೆಯಲ್ಲಿ ಅವರ ಪಾತ್ರವನ್ನು ಹೆಚ್ಚಿಸುವ ಉದ್ದೇಶ ಹೊಂದಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ, ಸಿಇಒ ದಲ್ಜಿತ್ ಕುಮಾರ್, ಎಸ್ಪಿ ಯಶೋದಾ ವಂಟಗೋಡಿ, ಜಿಪಂ ಉಪ ಕಾರ್ಯದರ್ಶಿ ಡಾ. ಪುನೀತ್, ಉಪವಿಭಾಗಾಧಿಕಾರಿ ಕಲ್ಯಾಣಿ ಕಾಂಬಳೆ, ತಹಸೀಲ್ದಾರ್ ಎಂ. ರೇಣುಕಾ, ತಹಸೀಲ್ದಾರ್- ಎಸ್.ಆರ್. ಸಿದ್ಧನಗೌಡ್ರ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಬುರಡೀಕಟ್ಟಿ, ನಾರಾಯಣಪ್ಪ ಗೌರಕ್ಕನವರ, ಜಿಲ್ಲಾ ಉಪಾಧ್ಯಕ್ಷ ರಮೇಶ ಮಡಿವಾಳರ, ಸಂಜೀವಕುಮಾರ ನೀರಲಗಿ, ಎಂ.ಎಂ. ಮೈದೂರ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.