ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ತೀವ್ರ ಬರ: ಪರಿಹಾರ ಕ್ರಮಕ್ಕೆ ಸಚಿವ ಬಿ.ಎಸ್.ಸುರೇಶ ಸೂಚನೆ

KannadaprabhaNewsNetwork |  
Published : Aug 06, 2026, 01:15 AM IST
            ಸಿಕೆಬಿ-2 ಸಚಿವ ಬಿ.ಎಸ್.ಸುರೇಶ ,ಶಾಸಕ ಪ್ರದೀಪ್ ಈಶ್ವರ್, ಜಿಲ್ಲಾಧಿಕಾರಿ ಮತ್ತು ಅಧಿಕಾರಿಗಳೊಂದಿಗೆ ತಾಲೂಕಿನ ಮಂಡಿಕಲ್ ಗ್ರಾಮದ ಹೊಲಗಳಿಗೆ ಭೇಟಿ ನೀಡಿ ಮಳೆಯ ಕೊರತೆಯಿಂದ ಒಣಗಿ ಹೋಗಿರುವ ಬೆಳೆಗಳನ್ನು ಪರಿಶೀಲಿಸಿದರು | Kannada Prabha

ಸಾರಾಂಶ

ಭಾರತ್ ಜೋಡೋ ಯುವಕರ ಸಂಘಗಳ ರಚನೆಗೆ ಆದ್ಯತೆ ನೀಡುವಂತೆ ಸೂಚಿಸಿದ ಸಚಿವರು, ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಒಂದು ಸಂಘ ಸ್ಥಾಪಿಸಿ ಸರ್ಕಾರದಿಂದ ತಲಾ ₹10 ಲಕ್ಷ ಅನುದಾನ ನೀಡಲಾಗುವುದು. ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಜನಸ್ನೇಹಿ ಆಡಳಿತ ನೀಡಬೇಕು. ವಿಶೇಷವಾಗಿ ರೈತರನ್ನು ಯಾವುದೇ ಕಾರಣಕ್ಕೂ ಸತಾಯಿಸದೆ ಅವರ ಕೆಲಸಗಳನ್ನು ನಿಯಮಾನುಸಾರ ನಿರ್ವಹಿಸಿಕೊಡಬೇಕು ಎಂದೂ ತಾಕೀತು ಮಾಡಿದರು.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಜಿಲ್ಲೆಯ ಎಂಟೂ ತಾಲೂಕುಗಳಲ್ಲಿ ತೀವ್ರ ಬರ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆ ಜನರು ಹಾಗೂ ಜಾನುವಾರುಗಳಿಗೆ ಯಾವುದೇ ತೊಂದರೆ ಆಗದಂತೆ ಸಮರೋಪಾದಿಯಲ್ಲಿ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಸಾರಿಗೆ ಸಚಿವ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್.ಸುರೇಶ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇಲ್ಲಿನ ಜಿಲ್ಲಾ ಪಂಚಾಯತ್ ಸರ್. ಎಂ. ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಪ್ರಕೃತಿ ವಿಕೋಪ ಮತ್ತು ಬರ ಪರಿಸ್ಥಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಬಾಗೇಪಲ್ಲಿ, ಗುಡಿಬಂಡೆ, ಚಿಕ್ಕಬಳ್ಳಾಪುರ, ಗೌರಿಬಿದನೂರು, ಶಿಡ್ಲಘಟ್ಟ ಸೇರಿ ಎಲ್ಲ ತಾಲೂಕುಗಳಲ್ಲೂ ಮಳೆ ಕೊರತೆಯಿಂದ ಗಂಭೀರ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಕಳೆದ ಮಾರ್ಚ್‌ನಿಂದ ಈವರೆಗೆ ಸುಮಾರು 86 ಮಿಲಿಮೀಟರ್ ಮಳೆಯಾಗಬೇಕಿದ್ದರೂ ಕೇವಲ ಶೇ. 4.5ರಷ್ಟು ಮಾತ್ರ ಮಳೆಯಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಈ ಹಿನ್ನೆಲೆ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಪೂರೈಕೆಗೆ ಮೊದಲ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಇದುವರೆಗೆ ಸುಮಾರು 1.25 ಲಕ್ಷ ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಂಡಿದ್ದಾರೆ. ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಅಗತ್ಯವಿರುವ ಪ್ರದೇಶಗಳಲ್ಲಿ ಖಾಸಗಿ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಲು ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ ಎಂದು ತಿಳಿಸಿದರು.

ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಕುಡಿಯುವ ನೀರಿನ ವ್ಯವಸ್ಥೆಗಾಗಿ ತಲಾ ₹1 ಕೋಟಿ ಮೀಸಲಿಡಲಾಗಿದೆ. ಈ ಅನುದಾನವನ್ನು ತ್ವರಿತವಾಗಿ ಬಳಸಿಕೊಂಡು ಜನರ ಸಮಸ್ಯೆಗಳನ್ನು ಪರಿಹರಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಕುಡಿಯುವ ನೀರಿನ ಯೋಜನೆಗಳಿಗೆ ಯಾವುದೇ ರೀತಿಯ ಅನುದಾನದ ಕೊರತೆ ಉಂಟಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಬರದ ಪರಿಣಾಮ ಕೃಷಿ ಚಟುವಟಿಕೆಗಳ ಮೇಲೂ ತೀವ್ರ ಪರಿಣಾಮ ಬೀರಿದೆ. ಸಾಮಾನ್ಯವಾಗಿ ಈ ವೇಳೆಗೆ ಜಿಲ್ಲೆಯಲ್ಲಿ ಸುಮಾರು 1.26 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಕಾರ್ಯ ಪೂರ್ಣಗೊಳ್ಳಬೇಕಾಗಿತ್ತು. ಆದರೆ ಮಳೆಯ ಅಭಾವದಿಂದ ಕೇವಲ 5,650 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆ ನಡೆದಿದೆ ಎಂದು ಸಚಿವರು ಮಾಹಿತಿ ನೀಡಿದರು.

ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಮಳೆ ಕೊರತೆ ಪ್ರದೇಶಗಳೆಂದು ಪರಿಗಣಿಸಲಾಗಿದ್ದು, ಈ ಕುರಿತು ಸಮಗ್ರ ವರದಿ ಸಲ್ಲಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ ಬಳಿಕ ಬರಪೀಡಿತ ಪ್ರದೇಶಗಳೆಂದು ಘೋಷಿಸುವ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ರೈತರ ಹಿತದೃಷ್ಟಿಯಿಂದ ಪಂಪ್‌ಸೆಟ್‌ಗಳಿಗೆ ಹಗಲಿನಲ್ಲಿ ನಾಲ್ಕು ಗಂಟೆ ಹಾಗೂ ರಾತ್ರಿ ಮೂರು ಗಂಟೆ ವಿದ್ಯುತ್ ಪೂರೈಸುವಂತೆ ಸಂಬಂಧಪಟ್ಟ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದರು.

ಭಾರತ್ ಜೋಡೋ ಯುವಕರ ಸಂಘಗಳ ರಚನೆಗೆ ಆದ್ಯತೆ ನೀಡುವಂತೆ ಸೂಚಿಸಿದ ಸಚಿವರು, ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಒಂದು ಸಂಘ ಸ್ಥಾಪಿಸಿ ಸರ್ಕಾರದಿಂದ ತಲಾ ₹10 ಲಕ್ಷ ಅನುದಾನ ನೀಡಲಾಗುವುದು. ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಜನಸ್ನೇಹಿ ಆಡಳಿತ ನೀಡಬೇಕು. ವಿಶೇಷವಾಗಿ ರೈತರನ್ನು ಯಾವುದೇ ಕಾರಣಕ್ಕೂ ಸತಾಯಿಸದೆ ಅವರ ಕೆಲಸಗಳನ್ನು ನಿಯಮಾನುಸಾರ ನಿರ್ವಹಿಸಿಕೊಡಬೇಕು ಎಂದೂ ತಾಕೀತು ಮಾಡಿದರು.

ರಾಜ್ಯ ಬೀಜ ನಿಗಮದ ಅಧ್ಯಕ್ಷ ಎಂ.ಆಂಜಿನಪ್ಪ, ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎನ್.ಸಂಪಂಗಿ, ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ಅಧ್ಯಕ್ಷ ಡಾ. ಬಿ.ಸಿ. ಮುದ್ದು ಗಂಗಾಧರ್, ಶಾಸಕರಾದ ಪ್ರದೀಪ್ ಈಶ್ವರ್, ಎಸ್.ಎನ್.ಸುಬ್ಬಾರೆಡ್ಡಿ, ಬಿ.ಎನ್. ರವಿಕುಮಾರ್, ಕೆ. ಎಚ್. ಪುಟ್ಟಸ್ವಾಮಿಗೌಡ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎನ್. ಕೇಶವರೆಡ್ಡಿ, ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎನ್. ರಮೇಶ್, ಜಿಲ್ಲಾಧಿಕಾರಿ ಜಿ.ಪ್ರಭು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವೈ.ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಗಿರೀಶ್, ಅಪರ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್, ಉಪವಿಭಾಗಾಧಿಕಾರಿ ಡಿ.ಎಚ್.ಅಶ್ವಿನ್, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದಾಂಪತ್ಯದಲ್ಲಿ ವಿಶ್ವಾಸ ವಿಟ್ಟಲ್ಲಿ ಆನಂದ ಪ್ರಾಪ್ತಿ
ತುಂತುರು ನೀರ ಹಾಡಿನ ನಡುವೆ ಹೂ ಮಳೆ