ಹಾವೇರಿ: ಡೊನೇಷನ್ ಹಾವಳಿ ವಿರೋಧಿಸಿ, ಶುಲ್ಕ ನಿಯಂತ್ರಣ ಕಾಯ್ದೆ ಸಮರ್ಪಕ ಜಾರಿಗಾಗಿ ಡೆರಾ ಕಮಿಟಿ ಸಭೆಯನ್ನು ಕರೆಯಲು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಹಾವೇರಿ ಜಿಲ್ಲಾ ಸಮಿತಿ ಪದಾಧಿಕಾರಿಗಳು ಶುಕ್ರವಾರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಅವರಿಗೆ ಮನವಿ ಸಲ್ಲಿಸಿದರು.
ಬಹುತೇಕ ಖಾಸಗಿ ಶಾಲೆಗಳಲ್ಲಿ ಲಕ್ಷಾಂತರ ರುಪಾಯಿಗಳ ವರೆಗೂ ಹಣ ವಸೂಲಿ ಮಾಡುವ ಮೂಲಕ ಹಗಲು ದರೋಡೆ ಮಾಡುತ್ತಿವೆ. ಸರ್ಕಾರದ ನಿಯಮಗಳ ಪ್ರಕಾರ ಸರ್ಕಾರ ನಿಗದಿಪಡಿಸಿದಂತೆ ಅನುದಾನಿತ ಶಿಕ್ಷಣ ಸಂಸ್ಥೆಗಳು ಹಾಗೂ ಅನುದಾನರಹಿತ ಶಿಕ್ಷಣ ಸಂಸ್ಥೆಗಳು ಅಭಿವೃದ್ಧಿ ಶುಲ್ಕ (ಡೆವಲಪ್ ಮೆಂಟ್ ಫೀ) ನ್ನು ಸಂಗ್ರಹಿಸಲು ಅವಕಾಶವಿದೆ. ಈ ಹಣವನ್ನು ಒತ್ತಾಯದ ಮೂಲಕ ಸಂಗ್ರಹಿಸುವಂತಿಲ್ಲ. ಇದಕ್ಕೂ ಹೆಚ್ಚು ಸಂಗ್ರಹಿಸುವುದು, ತರಗತಿಗೆ ಪ್ರವೇಶ ಪರೀಕ್ಷೆಗಳನ್ನು ನಡೆಸುವುದು ಕಾನೂನಿನ ಪ್ರಕಾರ ಅಪರಾಧ ಎಂದರು.
ಡೊನೆಷನ್ ನಿಯಂತ್ರಣಕ್ಕೆ ಜಿಲ್ಲಾ ಶಿಕ್ಷಣ ರೆಗ್ಯುಲೆಟಿಂಗ್ ಪ್ರಾಧಿಕಾರ (ಡೊನೇಷನ್ ವಿರೋಧಿ ಸಮಿತಿ)ವನ್ನು ತಕ್ಷಣ ರಚಿಸಬೇಕು. ವಂತಿಗೆ ವಸೂಲಿ ಮಾಡುತ್ತಿರುವ ಶಿಕ್ಷಣ ಸಂಸ್ಥೆಗಳ ಮೇಲೆ ಕ್ರಮಕೈಗೊಳ್ಳಬೇಕು. ಜಿಲ್ಲಾ ಮತ್ತು ತಾಲೂಕ ಮಟ್ಟದಲ್ಲಿ ಜಿಲ್ಲಾಧಿಕಾರಿ ಮತ್ತು ತಹಸೀಲ್ದಾರ್ ನೇತೃತ್ವದಲ್ಲಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು ಮತ್ತು ಶಿಕ್ಷಣ ಇಲಾಖೆಯ ಮುಖ್ಯಸ್ಥರು, ಪಾಲಕರು, ವಿದ್ಯಾರ್ಥಿ ಸಂಘಟನೆಯ ಪ್ರತಿನಿಧಿಗಳ ಜಂಟಿ ಸಭೆ ಕರೆಯಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ನಿಯಂತ್ರಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿರುವ ಕೇಂದ್ರೀಯ ಶಾಸನ ಜಾರಿಗೆ ತರಬೇಕು. ಸರ್ಕಾರ ನಿಗದಿಗೊಳಿಸಿರುವ ಪ್ರವೇಶ ಶುಲ್ಕದ ವಿವರವನ್ನು ಮಾಧ್ಯಮಗಳ ಮೂಲಕ ಮತ್ತು ಬಿತ್ತಿ ಪತ್ರ, ಕರಪತ್ರಗಳ ಮೂಲಕ ಪ್ರಚಾರ ಮಾಡಬೇಕು. ಶಿಕ್ಷಣ ಸಂಸ್ಥೆಗಳು ಪ್ರತಿ ತಿಂಗಳಿಗೊಮ್ಮೆ ಪಾಲಕರ ಸಭೆ ಕರೆದು ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸುವಂತೆ ನಿರ್ದೇಶಿಸಬೇಕು. ಜಿಲ್ಲಾಧಿಕಾರಿ ಡೊನೆಷನ್ ನಿಯಂತ್ರಣಕ್ಕೆ ಜಿಲ್ಲಾ ಶಿಕ್ಷಣ ರೆಗ್ಯುಲೆಟಿಂಗ್ ಪ್ರಾಧಿಕಾರ ರಚನೆ ಕುರಿತು 15 ದಿನಗಳ ಒಳಗಾಗಿ ಪಾಲಕರು, ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು, ಶಿಕ್ಷಣ ಇಲಾಖೆಯ ಮುಖ್ಯಸ್ಥರು, ವಿದ್ಯಾರ್ಥಿ ಸಂಘಟನೆಯ ಪ್ರತಿನಿಧಿಗಳ ಜಂಟಿಸಭೆ ಕರೆಯಬೇಕು. ಕ್ಷೇತ್ರ ಶಿಕ್ಷಣಾಧಿಕಾರಿಗಳು ನಿಗದಿಪಡಿಸಿದ ಶುಲ್ಕದ ವಿವರಗಳನ್ನು ಶಾಲಾ- ಕಾಲೇಜುಗಳ ಮುಂದೆ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರದರ್ಶಿಸಬೇಕು. ನಿಯಮ ಮೀರಿ ಡೊನೇಷನ್ ಪಡೆದ ಖಾಸಗಿ ಶಿಕ್ಷಣ ಸಂಸ್ಥೆಗೆ ಶಿಕ್ಷಣ ಹಕ್ಕು ಕಾಯ್ದೆಯ ಪ್ರಕಾರ ದಂಡ ಮತ್ತು ಶಿಕ್ಷೆಗೊಳಪಡಿಸಬೇಕು ಎಂದು ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್., ಮುಖಂಡರಾದ ಅರುಣ್ ನಗವತ್, ಕೃಷ್ಣ ನಾಯ್ಕ್, ಸಂಗೀತಾ ಮೊಟ್ಟಳ್ಳಿ, ಶಂಭು ಸವದತ್ತಿ, ಪರಶುರಾಮ ಎಸ್. ಉಪಸ್ಥಿತರಿದ್ದರು.