ಕನ್ನಡಪ್ರಭ ವಾರ್ತೆ ಹಾಸನ
ಪದವಿ ಕಾಲೇಜುಗಳ ಉಪನ್ಯಾಸಕರ ಸಮಸ್ಯೆಗಳನ್ನು ಬಗೆಹರಿಸಲು ಒತ್ತಾಯಿಸಿ ಮಹಿಳಾ ಕಾಲೇಜಿನ ವಿದ್ಯಾರ್ಥಿಗಳು ಎಸ್.ಎಫ್.ಐ. ಜಿಲ್ಲಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು.ನಗರದ ಶ್ರೀ ಗಂಧದ ಕೋಠಿ ಆವರಣದಿಂದ ಹೊರಟ ಪ್ರತಿಭಟನಕಾರರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆ ಮುಂದೆ ಬಿ.ಎಂ ರಸ್ತೆ ಬಳಿ ಪ್ರತಿಭಟಿಸಿದರು. ಇದೇ ವೇಳೆ ಎಸ್.ಎಫ್.ಐ. ಜಿಲ್ಲಾ ಕಾರ್ಯದರ್ಶಿ ರಮೇಶ್ ಮಾತನಾಡುತ್ತಾ, ರಾಜ್ಯದಲ್ಲಿ ಶೈಕ್ಷಣಿಕ ವರ್ಷ ಪ್ರಾರಂಭವಾಗಿ ೨ ತಿಂಗಳು ಕಳೆದಿದೆ. ರಾಜ್ಯದಲ್ಲಿರುವ ಬಹುತೇಕ ಸರ್ಕಾರಿ ಪದವಿ ಕಾಲೇಜುಗಲ್ಲಿ ೭೦% ಕ್ಕಿಂತ ಹೆಚ್ಚು ಅತಿಥಿ ಉಪನ್ಯಾಸಕರು ಸರ್ಕಾರಿ ಕಾಲೇಜುಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಆದರೆ ಕಾಲೇಜುಗಳು ಪ್ರಾರಂಭವಾಗಿ ೨ ತಿಂಗಳು ಕಳೆದರೂ ಅತಿಥಿ ಉಪನ್ಯಾಸಕರ ನೇಮಕಾತಿಯಾಗಿಲ್ಲ ಎಂದರು.
ರಾಜ್ಯ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸುಮಾರು ೧೦,೦೦೦ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಹೆಚ್ಚುವರಿ ಬೋಧನಾ ಕಾರ್ಯಭಾರಕ್ಕೆ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಯುಜಿಸಿ ಮತ್ತು ನಾನ್ ಯುಜಿಸಿ ಎಂಬ ಗೊಂದಲದಿಂದಾಗಿ ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆ ಸ್ಥಗಿತಗೊಂಡಿದೆ ಎಂದು ದೂರಿದರು. ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಹಿನ್ನಡೆಯಾಗಿದೆ ಹಾಗೂ ವಿದ್ಯಾರ್ಥಿಗಳ ಬದುಕು ಅತಂತ್ರ ಸ್ಥಿತಿಯಂತಾಗಿದೆ. ಹೆಚ್ಚಾಗಿ ಸರ್ಕಾರಿ ಕಾಲೇಜುಗಳಲ್ಲಿ, ಬಡವ, ರೈತ, ಕಾರ್ಮಿಕ, ದಲಿತ, ಹಿಂದುಳಿದ ವಿದ್ಯಾರ್ಥಿಗಳು ಹೆಚ್ಚು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದ್ದರಿಂದ ಮಾನ್ಯ ಮುಖ್ಯಮಂತ್ರಿಗಳು ತುರ್ತಾಗಿ ಕಾಲೇಜು ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡುವ ಮೂಲಕ ಮಧ್ಯಪ್ರವೇಶಿಸಿ ಆತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆಯಲ್ಲಿ ಯಾವುದೇ ತಾರತಮ್ಯ ಮಾಡದೇ ಸೇವಾ ಹಿರಿತನದ ಆಧಾರದ ಮೇಲೆ ನೇಮಕ ಮಾಡಬೇಕೆಂದು ಹಾಗೂ ಅತಿಥಿ ಉಪನ್ಯಾಸಕರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವಲ್ಲಿ ಆಯೋಗ ರಚಿಸಬೇಕು ಮತ್ತು ತುರ್ತಾಗಿ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಬೇಕೆಂದು ಆಗ್ರಹಿಸಿದರು. ಮುಂದಿನ ದಿನಗಳಲ್ಲಿ ಸರ್ಕಾರ ಸಮಸ್ಯೆಗಳನ್ನು ಬಗೆಹರಿಸದೆ ಇದ್ದಲ್ಲಿ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.ಪ್ರತಿಭಟನೆಯಲ್ಲಿ ಡಿ.ವೈ.ಎಫ್.ಐ. ಮುಖಂಡ ಎಂ.ಜಿ. ಪೃಥ್ವಿ, ಕಾರ್ಯದರ್ಶಿ ವಿವೇಕ್, ಛಾಯ, ವಿಕ್ಕಿ, ರಂಗ ಅಫ್ತಾಬ್, ಇತರರು ಉಪಸ್ಥಿತರಿದ್ದರು.