ಸಮರ್ಪಕ ಬಸ್ ಸೌಕರ್ಯ ಇಲ್ಲದ ಕಾರಣ ನಿಗದಿತ ಸಮಯಕ್ಕೆ ತರಗತಿಗೆ ಹಾಜರಾಗದೆ ಸಮಸ್ಯೆ ಎದುರಿಸುವಂತಾಗಿದೆ.
ಯಲಬುರ್ಗಾ: ತಾಲೂಕಿನ ಎಲ್ಲ ಹಳ್ಳಿಗಳಿಗೆ ಸಮರ್ಪಕ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಕಾಲೇಜು ವಿದ್ಯಾರ್ಥಿಗಳ ಸಹಯೋಗದಲ್ಲಿ ಎಸ್‌ಎಫ್ಐ ಜಿಲ್ಲಾ ಘಟಕದಿಂದ ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಸಾರಿಗೆ ಘಟಕ ವ್ಯವಸ್ಥಾಪಕ ಕುಂಟೆಪ್ಪ ಆಲೂರಗೆ ಗುರುವಾರ ಮನವಿ ಸಲ್ಲಿಸಲಾಯಿತು.
ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಶಿವಕುಮಾರ್ ಈಚನಾಳ, ಪ್ರಧಾನ ಕಾರ್ಯದರ್ಶಿ ಬಾಲಾಜಿ ಚಳ್ಳಾರಿ ಮಾತನಾಡಿ, ತಾಲೂಕಿನ ಗ್ರಾಮೀಣ ಭಾಗದ ನಾನಾ ಹಳ್ಳಿಗಳ ಸಾವಿರಾರು ವಿದ್ಯಾರ್ಥಿಗಳು ನಿತ್ಯ ಪಟ್ಟಣಕ್ಕೆ ಶಾಲಾ ಕಾಲೇಜಿಗೆ ತೆರಳುತ್ತಿದ್ದು, ಸಮರ್ಪಕ ಬಸ್ ಸೌಕರ್ಯ ಇಲ್ಲದ ಕಾರಣ ನಿಗದಿತ ಸಮಯಕ್ಕೆ ತರಗತಿಗೆ ಹಾಜರಾಗದೆ ಸಮಸ್ಯೆ ಎದುರಿಸುವಂತಾಗಿದೆ. ಅಲ್ಲದೆ ಅನೇಕ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಸಂಬಂಧಿಸಿದ ಜನಪ್ರತಿನಿಧಿಗಳು, ಅಧಿಕಾರಿಗಳು ವಿದ್ಯಾರ್ಥಿಗಳ ತೊಂದರೆ ಅರ್ಥವಾಗುತ್ತಿಲ್ಲ. ಹೀಗಾಗಿ ತರಗತಿ ಬಹಿಷ್ಕಾರಿಸಿ ಬೀದಿಗಿಳಿದು ಹೋರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಎಚ್ಚೆತ್ತು ತಾಲೂಕಿನ ಎಲ್ಲ ಹಳ್ಳಿಗಳಿಗೆ ಸರಿಯಾದ ಸಮಯಕ್ಕೆ ಸಮರ್ಪಕ ಬಸ್ ಸೌಲಭ್ಯ ಒದಗಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ರಸ್ತೆ ತಡೆದು ಉಗ್ರ ಹೋರಾಟ ಮಾಡಲಾಗುವುದೆಂದು ಆಗ್ರಹಿಸಿದರು.
ಈ ಸಂದರ್ಭ ಎಸ್‌ಎಫ್ಐ ಮುಖಂಡ ರಾಮೂರ್ತಿ, ಯಮನೂರ ಮುಜಾವರ, ಶರೀಫ್ ಎಂ.ಪಿ., ಕಿಟ್ಟಪ್ಪ, ಬಸವರಾಜ, ಅನು ಆಗೋಲಿ, ಅಶ್ವಿನಿ, ಅಮೃತ, ರಾಮು ಪಟೇಲ್, ನವೀನ್ ಸೇರಿದಂತೆ ನೂರಾರು ಮತ್ತು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.