ಕಾರವಾರ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕಾರವಾರ ವ್ಯಾಪ್ತಿಯಲ್ಲಿ ಇದುವರೆಗೆ 1.30 ಕೋಟಿಗೂ ಅಧಿಕ ಫಲಾನುಭವಿಗಳು ಶಕ್ತಿ ಯೋಜನೆಯ ಸದುಪಯೋಗ ಪಡೆದುಕೊಂಡಿದ್ದು, ಇದರ ಟಿಕೆಟ್ ಮೌಲ್ಯ ₹41.81 ಕೋಟಿ ಆಗಿದೆ ಎಂದು ಕಾರವಾರ ತಾಲೂಕು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಸಮಿತಿ ಅಧ್ಯಕ್ಷ ರಾಜೇಂದ್ರ ಎಚ್. ರಾಣೆ ಹೇಳಿದರು.
ಕಾರವಾರ ಬಸ್ ನಿಲ್ದಾಣದಲ್ಲಿ, ರಾಜ್ಯದಲ್ಲಿ ಶಕ್ತಿ ಯೋಜನೆಯಡಿ ಇಲ್ಲಿಯವರೆಗೆ 500 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿರುವ ಕುರಿತ ಸೋಮವಾರ ಆಚರಿಸಿದ ಸಂಭ್ರಮದ ಕಾರ್ಯಕ್ರಮದಲ್ಲಿ ಸಾರಿಗೆ ಬಸ್‌ಗೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರವು ಚುನಾವಣಾ ಸಂದರ್ಭದಲ್ಲಿ ಘೋಷಣೆ ಮಾಡಿದ ಪಂಚ ಗ್ಯಾರಂಟಿ ಯೋಜನೆಗಳನ್ನು ರಾಜ್ಯದಲ್ಲಿ ಯಶಸ್ವಿಯಾಗಿ ಅನುಷ್ಠಾನ ಮಾಡಿ ಕಾರ್ಯರೂಪಕ್ಕೆ ತರುವ ಮೂಲಕ ನುಡಿದಂತೆ ನಡೆದಿದೆ. ಐದು ಗ್ಯಾರಂಟಿ ಯೋಜನೆಗಳ ಪೈಕಿ ಶಕ್ತಿ ಯೋಜನೆಯನ್ನು ಜೂ. 2023ರಿಂದ ಜಾರಿಗೊಳಿಸಿದೆ. ರಾಜ್ಯದಲ್ಲಿ ಶಕ್ತಿ ಯೋಜನೆಯ ಫಲಾನುಭವಿ ಪ್ರಯಾಣಿಕರ ಸಂಖ್ಯೆ ಈಗ 500 ಕೋಟಿ ಗಡಿ ದಾಟಿದ್ದು, ರಾಜ್ಯದ ಎಲ್ಲ ಮಹಿಳಾ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಂಡಿದ್ದಾರೆ ಎಂದರು.ರಾಜ್ಯ ಸರ್ಕಾರ ಪ್ರಪಂಚದಲ್ಲೇ ಪ್ರಥಮ ಬಾರಿಗೆ ರಾಜ್ಯದಲ್ಲಿ ಇಂತಹ ಯೋಜನೆಯನ್ನು ಜಾರಿಗೆ ತಂದಿದ್ದು, ಶಕ್ತಿ ಯೋಜನೆಯ ಯಶಸ್ಸಿನಂತೆ ಅನ್ಯಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ, ಯುವನಿಧಿ ಯೋಜನೆ ಕೂಡ ಯಶಸ್ವಿಯಾಗಿದೆ ಎಂದರು.
ಶಕ್ತಿ ಯೋಜನೆ ಯಶಸ್ಸಿಗೆ ಪ್ರಮುಖ ಕಾರಣಕರ್ತರಾದ ವಾಹನ ಚಾಲಕರು ಮತ್ತು ನಿರ್ವಾಹಕರನ್ನು ಸನ್ಮಾನಿಸಲಾಯಿತು. ಸಾರ್ವಜನಿಕರಿಗೆ ಹಾಗೂ ಪ್ರಯಾಣಿಕರಿಗೆ ಸಿಹಿ ಹಂಚಿ, ಸರ್ಕಾರ ಮತ್ತು ಸಾರಿಗೆ ಇಲಾಖೆಗೆ ಧನ್ಯವಾದ ಅರ್ಪಿಸಲಾಯಿತು.ವಾ.ಕ.ರ.ಸಾ. ಸಂಸ್ಥೆಯ ಕಾರವಾರ ಘಟಕದ ವ್ಯವಸ್ಥಾಪಕಿ ಸೌಮ್ಯಾ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ವೀರನಗೌಡ ಪಿ. ಏಣಗೌಡರ ಮತ್ತಿತರರು ಇದ್ದರು.