ಕನ್ನಡಪ್ರಭ ವಾರ್ತೆ ಬೆಂಗಳೂರು
ಶೃಂಗೇರಿಯಲ್ಲಿ ದಕ್ಷಿಣಾಮ್ನಾಯ ಶಾರದಾ ಪೀಠದ ಅಧಿದೇವತೆ ಶಾರದಾಂಬೆಗೆ ಭಾನುವಾರ ಹಂಸವಾಹಿನಿಯ ಅಲಂಕಾರ ಮಾಡಲಾಗಿತ್ತು. ಹಂಸವಾಹಿನಿ ಅಲಂಕಾರದಲ್ಲಿ ಸೃಷ್ಠಿಕರ್ತ ಬ್ರಹ್ಮನ ಶಕ್ತಿ ಪಡೆದ ಬ್ರಾಹ್ಮಿಯಾಗಿ ಬ್ರಹ್ಮನ ವಾಹನ ಹಂಸವನ್ನೇರಿ ವಿಜೃಂಭಿಸಿಸುವ ಶಾರದೆಯ ಅಲಂಕಾರ ಭಕ್ತರ ಮನಸೂರೆಗೊಳ್ಳುವಂತಿತ್ತು.
ಐತಿಹಾಸಿಕ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವ 2026ಕ್ಕೆ ನಗರದ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಭಾನುವಾರ ಚಾಲನೆ ನೀಡಲಾಯಿತು. ಬೆಳಗ್ಗೆ ಗುರು ಪ್ರಾರ್ಥನೆ, ಪುಣ್ಯಾಹ ಹೋಮ, ನವಕಲಶಾಭಿಷೇಕ ನಡೆದು ದರ್ಬಾರು ಮಂಟಪದಲ್ಲಿ ಮಹಾಗಣಪತಿ, ಶಾರದಾ ಮಾತೆ, ಆದಿಶಕ್ತಿಯೊಂದಿಗೆ ಸ್ಕಂದ ಮಾತೆ, ಕಾತ್ಯಾಯಿನಿ, ಮಹಾಕಾಳಿ, ಮಹಾಗೌರಿ, ಸಿದ್ಧಿಧಾತ್ರಿ, ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟ, ಕೂಷ್ಮಾಂಡಿನಿ, ದೇವಿಯರ ವಿಗ್ರಹವನ್ನು ಪ್ರತಿಷ್ಠಾಪಿಸಲಾಯಿತು. ಮಂಗಳೂರು ದಸರಾದಲ್ಲಿ ಇದೇ ಮೊದಲ ಬಾರಿಗೆ ಮಹಿಳಾ ದಸರಾ ಆಯೋಜಿಸಲಾಗುತ್ತಿದೆ.ಐತಿಹಾಸಿಕ ಮಡಿಕೇರಿ ದಸರಾದ ಪ್ರಮುಖ ಆಕರ್ಷಣೆ ಕರಗ ಉತ್ಸವಕ್ಕೆ ನಗರದ ಮಹದೇವಪೇಟೆಯ ಪಂಪಿನ ಕೆರೆಯಲ್ಲಿ ಭಾನುವಾರ ನಗರದ ಶಕ್ತಿದೇವತೆಗಳ ಕರಗಗಳಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ದೊರೆಯಿತು. ನಗರದ ನಾಲ್ಕು ಶಕ್ತಿ ದೇವತೆಗಳಾದ ಕುಂದೂರು ಮೊಟ್ಟೆ ಚೌಟಿ ಮಾರಿಯಮ್ಮ, ಕಂಚಿ ಕಾಮಾಕ್ಷಿಯಮ್ಮ, ದಂಡಿನ ಮರಿಯಮ್ಮ ಹಾಗೂ ಕೋಟೆ ಮಾರಿಯಮ್ಮಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಮಡಿಕೇರಿ ದಸರಾಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಚಾಲನೆ ನೀಡಿದರು.
ದಾವಣಗೆರೆಯಲ್ಲಿ ಭಾನುವಾರ ಬೆಳಗ್ಗೆ ನಗರ ದೇವತೆ ದುರ್ಗಾಂಬಿಕಾ ದೇವಸ್ಥಾನ ಟ್ರಸ್ಟ್‌ನಿಂದ ನಗರ ದೇವತೆ ದುರ್ಗಾಂಬಿಕಾ ದೇವಸ್ಥಾನದಲ್ಲಿ ಆಯೋಜಿಸಿದ್ದ ನವರಾತ್ರಿ ಹಾಗೂ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಂಸದೆ ಡಾ। ಪ್ರಭಾ ಮಲ್ಲಿಕಾರ್ಜುನ್, ಶಾಸಕ ಸಮರ್ಥ ಶಾಮನೂರು ಸೇರಿದಂತೆ ಅವರ ಕುಟುಂಬದವರು ತಾಯಿ ದುರ್ಗಾ ಮಾತೆಗೆ ವಿಶೇಷ ಅಭಿಷೇಕ, ಪೂಜೆ ಸಲ್ಲಿಸಿ, ಸಾಂಪ್ರದಾಯಿಕವಾಗಿ ದೀಪ ಬೆಳಗುವ ಮೂಲಕ ನವರಾತ್ರಿ, ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು.