ಕಾರವಾರ: ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಲು ರಾಜ್ಯದಲ್ಲಿನ ಡೀಸೆಲ್, ಪೆಟ್ರೋಲ್ ಮೇಲೆ ವಿಧಿಸುತ್ತಿರುವ ಸುಂಕದಲ್ಲಿನ ಸ್ವಲ್ಪ ಮೊತ್ತವನ್ನು ಅಸಂಘಟಿತ ಕಾರ್ಮಿಕರ ಮಂಡಳಿಗೆ ನೀಡುವಂತೆ ಮುಖ್ಯಮಂತ್ರಿ ಬಳಿ ಮನವಿ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು.
ಅಸಂಘಟಿತ ವಲಯದ ಕಾರ್ಮಿಕರು ಆರ್ಥಿಕ ಮತ್ತು ಸಾಮಾಜಿಕವಾಗಿ ದುರ್ಬಲರಾಗಿದ್ದು, ಇವರಿಗೆ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಮೂಲಕ ಸಾಮಾಜಿಕ ಭದ್ರತಾ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಈ ಮಂಡಳಿಗೆ ಹೆಚ್ಚಿನ ಆರ್ಥಿಕ ನೆರವು ಒದಗಿಸುವ ಉದ್ದೇಶದಿಂದ ರಾಜ್ಯದಲ್ಲಿನ ಡೀಸೆಲ್, ಪೆಟ್ರೋಲ್ ಮೇಲೆ ವಿಧಿಸುತ್ತಿರುವ ಸುಂಕದಲ್ಲಿನ ನಿರ್ದಿಷ್ಟ ಮೊತ್ತವನ್ನು ವರ್ಗಾಯಿಸುವ ಕುರಿತು ಮುಖ್ಯಮಂತ್ರಿಯಲ್ಲಿ ವಿನಂತಿ ಮಾಡಿಕೊಂಡು, ಈ ವರ್ಗದ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ಗರಿಷ್ಠ ನೆರವು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ದೇಶದಲ್ಲೇ ಪ್ರಥಮ ಬಾರಿಗೆ ಇ- ಕಾಮರ್ಸ್ ವಲಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರಿಗಾಗಿ ಗಿಗ್ ಕಾರ್ಮಿಕರ ವಿಮಾ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಸಿನಿಮಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿರುವ ಕಾರ್ಮಿಕರ ಸುಂಕ ಅಧಿನಿಯಮ, ಕರ್ನಾಟಕ ಪ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರ ಅಧಿನಿಯಮ ಮತ್ತು ಕರ್ನಾಟಕ ಗೃಹ ಕಾರ್ಮಿಕರ ಅಧಿನಿಯಮ ರೂಪಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದರು.ರಾಜ್ಯದಲ್ಲಿ ಕಾರ್ಮಿಕರ ಮಕ್ಕಳಿಗಾಗಿ 6 ರಿಂದ 12 ತರಗತಿಯವರಿಗೆ ಉಚಿತ ಶಿಕ್ಷಣ ನಿಡುವ ಶಾಲೆಗಳನ್ನು ತೆರೆಯಲಾಗುತ್ತಿದೆ. ಪ್ರತೀ ಜಿಲ್ಲೆಗೊಂದು ಈ ಶಾಲೆಗಳನ್ನು ತೆರೆಯುವ ಬಗ್ಗೆ ಮುಖ್ಯಮಂತ್ರಿ ಬಳಿ ಚರ್ಚಿಸುವುದಾಗಿ ಸಚಿವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಕೇರಳದ ಮಂಜೇಶ್ವರ ಶಾಸಕ ಅಶ್ರಫ್, ನಗರಸಭೆ ಅಧ್ಯಕ್ಷ ರವಿರಾಜ್ ಅಂಕೋಲೆಕರ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ನಾಯ್ಕ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜೇಂದ್ರ ರಾಣೆ, ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ, ಜಿಪಂ ಸಿಇಒ ಡಾ.ದಿಲೀಷ್ ಶಶಿ, ಎಸ್ಪಿ ದೀಪನ್, ಧಾರವಾಡ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತ ಸಚಿನ್ ವೈ ಹಳೇಮನಿ, ಅಸಂಘಟಿತ ಕಾರ್ಮಿಕ ಮಂಡಳಿಯ ಸಹಾಯಕ ಕಾರ್ಮಿಕ ಆಯುಕ್ತೆ ಮೀನಾ ಪಾಟೀಲ್, ಬೆಳಗಾವಿ ವಿಭಾಗದ ಉಪ ಕಾರ್ಮಿಕ ಆಯುಕ್ತ ನಾಗೇಶ್, ಜಿಲ್ಲಾ ಕಾರ್ಮಿಕ ಅಧಿಕಾರಿ ಲಲಿತಾ ಸಾತೇನಹಳ್ಳಿ ಇದ್ದರು.