ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಎಚ್.ಡಿ.ಕುಮಾರಸ್ವಾಮಿಯವರು ನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮನವಿ ಸಲ್ಲಿಸಿದ ಪದಾಧಿಕಾರಿಗಳು, ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಸಭೆಯಲ್ಲಿ ದೇಶದ 12 ಕೈಗಾರಿಕಾ ಸ್ಮಾರ್ಟ್ ಸಿಟಿ ಸ್ಥಾಪಿಸಲು ಅನುಮೋದನೆ ನೀಡಿದ್ದು, ಶಿವಮೊಗ್ಗ ನಗರವನ್ನು ಯೋಜನೆ ವ್ಯಾಪ್ತಿಯಲ್ಲಿ ಕೈಗಾರಿಕಾ ಸ್ಮಾರ್ಟ್ ಸಿಟಿ ಸ್ಥಾಪಿಸಲು ಆಯ್ಕೆ ಮಾಡಲು ಮುಂದಾಗಬೇಕು ಎಂದು ಸಂಘದ ಪದಾಧಿಕಾರಿಗಳು ಮನವಿ ಮಾಡಿದರು.
ಶಿವಮೊಗ್ಗ ಜಿಲ್ಲೆಯು ಪ್ರವಾಸೋದ್ಯಮ, ಆಹಾರ ಉತ್ಪನ್ನ ಕ್ಷೇತ್ರ ಹಾಗೂ ಕೈಗಾರಿಕಾ ಕ್ಷೇತ್ರದಲ್ಲಿ ಹೆಚ್ಚಿನ ಅವಕಾಶಗಳಿದ್ದು, ಈಗಾಗಲೇ ಕೈಗಾರಿಕಾ ಕ್ಷೇತ್ರದಲ್ಲಿ ಮಹತ್ತರ ಕೊಡುಗೆಗಳನ್ನು ನೀಡುತ್ತಿದೆ. ಕರ್ನಾಟಕ ರಾಜ್ಯದಿಂದ ಶಿವಮೊಗ್ಗ ಆಯ್ಕೆ ಮಾಡುವುದು ಅತ್ಯಂತ ಸೂಕ್ತವಾಗಿದೆ ಎಂದು ತಿಳಿಸಿದರು.ಶಿವಮೊಗ್ಗ ಮಹಾನಗರಕ್ಕೆ ಹೊಂದಿಕೊಂಡಿರುವ ದೇವಕಾತಿಕೊಪ್ಪದಲ್ಲಿ ಕೈಗಾರಿಕೆಗೆ ಅವಶ್ಯವಿರುವ ಸೌಕರ್ಯ ಹಾಗೂ ಅನುಮತಿಯನ್ನು ಒದಗಿಸಬೇಕು. ಸಿದ್ಲಿಪುರ ಸೇರಿ ಕೈಗಾರಿಕೆಗೆ ಇರುವ ಅವಕಾಶ ಜಾಗಗಳಲ್ಲಿ ಹೊಸ ಹೊಸ ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯ ಕ್ರಮ ವಹಿಸಬೇಕು ಎಂದು ಈ ಸಂದರ್ಭದಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಸಂಘದ ಅಧ್ಯಕ್ಷ ಎನ್.ಗೋಪಿನಾಥ್, ಉಪಾಧ್ಯಕ್ಷ ಬಿ.ಗೋಪಿನಾಥ್, ಕಾರ್ಯದರ್ಶಿ ವಸಂತ ಹೋಬಳಿದಾರ್, ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್, ಹರ್ಷ ಕಾಮತ್, ಪ್ರದೀಪ್ ವಿ. ಎಲಿ, ವಿಶ್ವೇಶ್ವರಯ್ಯ, ರಾಮಾಜೋಯೀಸ್ ಇತರರಿದ್ದರು.