ಹುಬ್ಬಳ್ಳಿ: ಛತ್ರಪತಿ ಶಿವಾಜಿ ಮಹಾರಾಜರ ಜೀವನ ಚರಿತ್ರೆ ಪುಸ್ತಕಕ್ಕೆ ಮಾತ್ರ ಸೀಮಿತವಾಗಬಾರದು. ಮುಂದಿನ ಪೀಳಿಗೆಯು ಶಿವಾಜಿಯವರ ಬಗ್ಗೆ ತಿಳಿದುಕೊಳ್ಳುವಂತಾಗಬೇಕು ಎಂದು ಹುಬ್ಬಳ್ಳಿ ಶಹರ ತಹಸೀಲ್ದಾರ್ ಕಲಗೌಡ ಪಾಟೀಲ ಹೇಳಿದರು.
ಶಿವಾಜಿ ಆದರ್ಶಗಳು, ಅವರು ಮಾಡಿದ ಕಾರ್ಯಗಳು, ಅವರು ದೇಶಕ್ಕೆ ನೀಡಿದ ಕೊಡುಗೆಯ ಬಗ್ಗೆ ನಾವು ತಿಳಿದುಕೊಳ್ಳಬೇಕು. ಅವರ ಒಳ್ಳೆಯ ಸಂದೇಶಗಳನ್ನು ನಮ್ಮ ಜೀವನದಲ್ಲೂ ಅಳವಡಿಸಿಕೊಳ್ಳಬೇಕು ಎಂದರು.
ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರ್ ಪ್ರಕಾಶ ಹೊಳೆಪ್ಪಗೋಳ ಮಾತನಾಡಿ, ರಾಷ್ಟ್ರದ ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಶಿವಾಜಿಯವರ ಶ್ರಮ ಅವಿಸ್ಮರಣೀಯವಾದುದಾಗಿದೆ. ಇಂತಹ ಮಹಾನ್ ವ್ಯಕ್ತಿಯು ಯಾವುದೇ ಒಂದು ಜನಾಂಗಕ್ಕೆ ಮಾತ್ರ ಸೀಮಿತಗೊಳ್ಳಬಾರದು ಎಂದರು.ಇದೇ ಸಂದರ್ಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಿವಿಧ ಸಮಾಜದ ಮುಖಂಡರಾದ ಸುನೀಲ ದಳವಿ, ಶಿವುಕುಮಾರ ಶಿಂಧೆ, ನಾರಾಯಣ ವೈದ್ಯ, ಗುರುನಾಥ ಉಳ್ಳಿಕಾಶಿ, ಅರುಣ ಶಿರ್ಕೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಇತರರು ಉಪಸ್ಥಿತರಿದ್ದರು. ಮಲ್ಲಿಕಾರ್ಜುನ ನಿಟ್ಟೂರ ನಿರೂಪಿಸಿದರು.