ಸಿದ್ದಗಂಗೆಯಲ್ಲಿ ಶಿವಕುಮಾರ ಶ್ರೀಗಳ ಜಯಂತಿ

KannadaprabhaNewsNetwork |  
Published : Apr 02, 2025, 01:01 AM IST
ಶ್ರೀಗಳ 118 ನೇ ಹುಟ್ಟು ಹಬ್ಬ ಅಂಗವಾಗಿ ಶಿ ಹೆಸರಿನಿಂದ 118 ಮಕ್ಕಳಿಗೆ ನಾಮಕರಣ ನೆರವೇರಿಸಲಾಯಿತು | Kannada Prabha

ಸಾರಾಂಶ

ಸಿದ್ದಗಂಗಾ ಮಠದ ಶಿವೈಕ್ಯ ಡಾ. ಶಿವಕುಮಾರ ಸ್ವಾಮೀಜಿಯವರ 118 ನೇ ಜನ್ಮ ಜಯಂತಿ ಹಾಗೂ ಗುರುವಂದನಾ ಮಹೋತ್ಸವ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಶ್ರೀಗಳ ಜಯಂತಿಗೆ ವಿವಿಧ ಮಠಾಧೀಶರು, ಹರಗುರುಚರಮೂರ್ತಿಗಳು, ಗಣ್ಯಾತಿ ಗಣ್ಯರು ಹಾಗೂ ಸಹಸ್ರಾರು ಭಕ್ತಗಣ ಸಾಕ್ಷಿಯಾದರು.

ಕನ್ನಡಪ್ರಭ ವಾರ್ತೆ, ತುಮಕೂರು

ಸಿದ್ದಗಂಗಾ ಮಠದ ಶಿವೈಕ್ಯ ಡಾ. ಶಿವಕುಮಾರ ಸ್ವಾಮೀಜಿಯವರ 118 ನೇ ಜನ್ಮ ಜಯಂತಿ ಹಾಗೂ ಗುರುವಂದನಾ ಮಹೋತ್ಸವ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಶ್ರೀಗಳ ಜಯಂತಿಗೆ ವಿವಿಧ ಮಠಾಧೀಶರು, ಹರಗುರುಚರಮೂರ್ತಿಗಳು, ಗಣ್ಯಾತಿ ಗಣ್ಯರು ಹಾಗೂ ಸಹಸ್ರಾರು ಭಕ್ತಗಣ ಸಾಕ್ಷಿಯಾದರು.

ಬೆಳಿಗ್ಗೆಯಿಂದಲೇ ಶ್ರೀಮಠಕ್ಕೆ ಭಕ್ತರು, ಗಣ್ಯರ ದಂಡು ಹರಿದು ಬರುತ್ತಿದ್ದು, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ, ಸಹಕಾರ ಸಚಿವ ಕೆ.ಎನ್. ರಾಜಣ್ಣ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾಜಿ ಸಂಸದ ಜಿ.ಎಸ್. ಬಸವರಾಜು, ಶಾಸಕರಾದ ಬಿ. ಸುರೇಶ್‌ಗೌಡ, ಜ್ಯೋತಿಗಣೇಶ್, ಶ್ರೀನಿವಾಸಯ್ಯ ಸೇರಿದಂತೆ ವಿವಿಧ ಮಠಾಧೀಶರುಗಳು ಶ್ರೀಗಳ ಗದ್ದುಗೆ ದರ್ಶನ ಪಡೆದು ಭಕ್ತಿ ಸಮರ್ಪಿಸಿದರು.ಶ್ರೀಗಳ ಗದ್ದುಗೆಗೆ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಯವರ ನೇತೃತ್ವದಲ್ಲಿ ರುದ್ರಾಭಿಷೇಕ, 108 ಅಷ್ಟೋತ್ತರ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯ, ಮಹಾಮಂಗಳಾರತಿ ನೆರವೇರಿಸಲಾಯಿತು.ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಯವರು ಐಕ್ಯರಾಗಿರುವ ಶಿವಯೋಗಿ ಮಂದಿರದ ಗದ್ದುಗೆಯಲ್ಲಿ ಮುಂಜಾನೆಯಿಂದಲೇ ಧಾರ್ಮಿಕ ವಿಧಿ ವಿಧಾನಗಳು, ಅಭಿಷೇಕ, ಅಷ್ಟೋತ್ತರ, ಮಹಾಮಂಗಳಾರತಿ, ಭಜನಾ ಮಂತ್ರ ಘೋಷಗಳು ಮೊಳಗಿದವು.ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಯವರು ಎಂದಿನಂತೆ ನಸುಕಿನಲ್ಲೇ ಇಷ್ಟಲಿಂಗ ಪೂಜೆ ನೆರವೇರಿಸಿ ಪರಮಪೂಜ್ಯರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸುವ ಮೂಲಕ ಆಶೀರ್ವಾದ ಪಡೆದರು. ಮೈಸೂರಿನ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರು ವಿವಿಧ ಬಗೆಯ ಹಣ್ಣುಗಳು, ಪುಷ್ಪಗಳಿಂದ ಅಲಂಕರಿಸಿದ್ದ ಗದ್ದುಗೆಗೆ ಪುಷ್ಪ ನಮನ ಸಲ್ಲಿಸಿ ಭಕ್ತಿ ಸಮರ್ಪಿಸಿದರು. ಗದ್ದುಗೆ ಮಂದಿರದ ಮುಂಭಾಗದಿಂದ ಆರಂಭವಾದ ಶ್ರೀಗಳ ಕಂಚಿನ ಪುತ್ಥಳಿ ಹೊತ್ತ ರುದ್ರಾಕ್ಷಿ ಮಂಟಪದ ಮೆರವಣಿಗೆಗೆ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಚಾಲನೆ ನೀಡಿದರು. ಮೆರವಣಿಗೆಯುದ್ಧಕ್ಕೂ ನಂದಿಧ್ವಜ ಕುಣಿತ, ಕರಡಿ ವಾದ್ಯ, ಡೋಲು ಕುಣಿತ ಸೇರಿದಂತೆ ವಿವಿಧ ಜಾನಪದ ಕಲಾ ತಂಡಗಳ ಪ್ರದರ್ಶನ ನೋಡುಗರ ಗಮನ ಸೆಳೆದವು.ಶ್ರೀಮಠದ ಆವರಣದಲ್ಲಿ ಮೆರವಣಿಗೆಯುದ್ದಕ್ಕೂ ಪೂರ್ಣಕುಂಭ ಕಳಸ ಹೊತ್ತ ಸುಮಂಗಲಿಯರು, ಹರಗುರುಚರಮೂರ್ತಿಗಳು, ಭಕ್ತಾದಿಗಳು ಹೆಜ್ಜೆ ಹಾಕಿದ್ದು ವಿಶೇಷವಾಗಿತ್ತು. ಈ ಉಚಿತ ನಾಮಕರಣ ಮಹೋತ್ಸವದಲ್ಲಿ ಪಾಲ್ಗೊಂಡಿದ್ದವರಿಗೆ ಹೊಸ ತೊಟ್ಟಿಲು, ತೊಟ್ಟಿಲ ಹಾಸಿಗೆ, ತೊಟ್ಟಿಲ ದಿಂಬು ಹಾಗೂ ಶ್ರೀಗಳ ಭಾವಚಿತ್ರವನ್ನು ಉಚಿತವಾಗಿ ನೀಡಲಾಯಿತು.

ರಾಜ್ಯದ ವಿವಿಧೆಡೆಗಳಿಂದ ಶ್ರೀಮಠಕ್ಕೆ ಆಗಮಿಸಿದ್ದ ಲಕ್ಷಾಂತರ ಮಂದಿ ಭಕ್ತಾದಿಗಳಿಗೆ ವಸ್ತುಪ್ರದರ್ಶನ ಆವರಣ, ಪ್ರಾರ್ಥನಾ ಮಂದಿರ, ಹಳೆಯ ಮತ್ತು ಹೊಸ ಪ್ರಸಾದ ನಿಲಯ, ಸಾದರ ಕೊಪ್ಪಲು ಸೇರಿದಂತೆ 5 ಕಡೆ ದಾಸೋಹ ವ್ಯವಸ್ಥೆ ಮಾಡಲಾಗಿತ್ತು. ಶ್ರೀಗಳ 118ನೇ ಜಯಂತಿಯನ್ನು ಕಣ್ತುಂಬಿಕೊಳ್ಳಲು ಶ್ರೀಕ್ಷೇತ್ರಕ್ಕೆ ಆಗಮಿಸಿದ್ದ ಭಕ್ತಗಣ ಸರದಿಯ ಸಾಲಿನಲ್ಲಿ ನಿಂತು ಗದ್ದುಗೆ ದರ್ಶನ ಪಡೆದು, ಸಿದ್ದಪಡಿಸಿದ್ದ ಬಗೆಬಗೆಯ ಖಾದ್ಯಗಳ ಪ್ರಸಾದ ಸವಿದು ಪುನೀತರಾದರು.ಸಿದ್ದಗಂಗಾ ಕ್ಷೇತ್ರದಲ್ಲಿಂದು ನಡೆದ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಯವರ 118ನೇ ಜಯಂತಿ ಮತ್ತು ಗುರುವಂದನಾ ಸಮಾರಂಭಕ್ಕೆ ಕೇಂದ್ರ ರಕ್ಷಣಾ ಸಚಿವರು ಆಗಮಿಸಿದ್ದ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ ಮಾಡಲಾಗಿತ್ತು.118 ಮಕ್ಕಳಿಗೆ ನಾಮಕರಣ: ಡಾ. ಶಿವಕುಮಾರ ಮಹಾಸ್ವಾಮೀಜಿ ಅನ್ನದಾನ ಸೇವಾ ಟ್ರಸ್ಟ್ ವತಿಯಿಂದ ನಡೆದಾಡುವ ದೇವರು, ತ್ರಿವಿಧ ದಾಸೋಹಮೂರ್ತಿ, ಪದ್ಮಭೂಷಣ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ 118ನೇ ಜಯಂತ್ಯುತ್ಸವದ ಅಂಗವಾಗಿ 118 ಮಕ್ಕಳಿಗೆ "ಶಿ " ಅಕ್ಷರದಿಂದ ಪ್ರಾರಂಭವಾಗುವ ಹೆಸರುಗಳನ್ನು ನಾಮಕರಣ ಮಾಡಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''