ವ್ಯಸನಮುಕ್ತ ಸಮಾಜಕ್ಕೆ ಶಿವಯೋಗಿ ಸ್ವಾಮೀಜಿ ಕೊಡುಗೆ ಅಪಾರ

KannadaprabhaNewsNetwork |  
Published : Aug 03, 2026, 01:15 AM IST
2ಕೆಆರ್ ಎಂಎನ್ 1.ಜೆಪಿಜಿರಾಮನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶ್ರೀ ಮ.ನಿ.ಪ್ರ. ಡಾ. ಮಹಾಂತ ಶಿವಯೋಗಿ ಸ್ವಾಮೀಜಿ ಜಯಂತಿ ಅಂಗವಾಗಿ ಆಯೋಜಿಸಲಾಗಿದ್ದ ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಅತಿಥಿಗಳು  ಉದ್ಘಾಟಿಸಿದರು. | Kannada Prabha

ಸಾರಾಂಶ

ರಾಮನಗರ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಡಾ.ಮಹಾಂತ ಶಿವಯೋಗಿ ಸ್ವಾಮೀಜಿ ಮಹತ್ವದ ಕೊಡುಗೆ ನೀಡಿದ್ದು, ನಾಗರೀಕರು ಯಾವುದೇ ರೀತಿಯ ದುಶ್ಚಟಗಳು ಮತ್ತು ವ್ಯಸನಗಳಿಗೆ ದಾಸರಾಗಬಾರದೆಂದು ಜಾಗೃತಿ ಮೂಡಿಸುವ ಕಾರ್ಯದಲ್ಲಿ ನಿರಂತರ ತೊಡಗಿಸಿಕೊಂಡಿದ್ದರು ಎಂದು ಅಪರ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ ಬಣ್ಣಿಸಿದರು

ರಾಮನಗರ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಡಾ.ಮಹಾಂತ ಶಿವಯೋಗಿ ಸ್ವಾಮೀಜಿ ಮಹತ್ವದ ಕೊಡುಗೆ ನೀಡಿದ್ದು, ನಾಗರೀಕರು ಯಾವುದೇ ರೀತಿಯ ದುಶ್ಚಟಗಳು ಮತ್ತು ವ್ಯಸನಗಳಿಗೆ ದಾಸರಾಗಬಾರದೆಂದು ಜಾಗೃತಿ ಮೂಡಿಸುವ ಕಾರ್ಯದಲ್ಲಿ ನಿರಂತರ ತೊಡಗಿಸಿಕೊಂಡಿದ್ದರು ಎಂದು ಅಪರ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ ಬಣ್ಣಿಸಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಪಂ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ರಾಮನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಸಂಯುಕ್ತಾಶ್ರಯದಲ್ಲಿ ಶ್ರೀ ಮ.ನಿ.ಪ್ರ. ಡಾ. ಮಹಾಂತ ಶಿವಯೋಗಿ ಸ್ವಾಮೀಜಿ ಜಯಂತಿ ಅಂಗವಾಗಿ ಆಯೋಜಿಸಿದ್ದ ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿವಿಧ ಮಠಗಳ ಸ್ವಾಮೀಜಿಗಳು ಪೂಜೆ, ಪುನಸ್ಕಾರ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಸಮಾಜದ ಆಧ್ಯಾತ್ಮಿಕ ಬೆಳವಣಿಗೆಗೆ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ, ಡಾ.ಮಹಾಂತ ಶಿವಯೋಗಿ ಸ್ವಾಮೀಜಿಯವರು ವ್ಯಸನಮುಕ್ತ ಸಮಾಜ ನಿರ್ಮಾಣದ ಗುರಿ ಹೊಂದಿದ್ದರು. ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಪರಿಣಾಮಕಾರಿಯಾಗಿ ನಡೆಸಿದ ಮಹಾಂತ ಶಿವಯೋಗಿ ಸ್ವಾಮೀಜಿಗಳು ಸಮಾಜದಲ್ಲಿನ ದುಶ್ಚಟಗಳನ್ನು ತ್ಯಜಿಸುವಂತೆ ಪ್ರೇರೇಪಿಸಲು ಶ್ರೀಗಳು ಜೋಳಿಗೆಯನ್ನೇ ಒಡ್ಡಿ, ಅದರಲ್ಲಿ ಅಮಲು ಪದಾರ್ಥಗಳನ್ನು ಹಾಕಿಸಿಕೊಂಡು ಮತ್ತೆಂದೂ ದುಶ್ಚಟಗಳಿಗೆ ಬಲಿಯಾಗದಂತೆ ನಾಗರೀಕರಲ್ಲಿ ಮನವಿ ಮಾಡುತ್ತಿದ್ದರು ಎಂದು ಹೇಳಿದರು.

ಇತ್ತೀಚಿನ ದಿನಗಳಲ್ಲಿ ವಿವಿಧ ರೀತಿಯ ಮಾದಕ ಪದಾರ್ಥಗಳು ಲಭ್ಯವಾಗುತ್ತಿದ್ದು, ಅವು ಆರೋಗ್ಯದ ಜೊತೆಗೆ ವ್ಯಕ್ತಿಯ ಭವಿಷ್ಯವನ್ನೂ ಹಾಳುಮಾಡುತ್ತಿದ್ದು, ಅವುಗಳಿಂದ ದೂರವಿರಬೇಕು. ರಾಜ್ಯ ಸರ್ಕಾರ ಇದೀಗ ವಿವಿಧ ಇಲಾಖೆಗಳ ಸುಮಾರು 72 ಸಾವಿರಕ್ಕೂ ಹೆಚ್ಚಿನ ಹುದ್ದೆಗಳ ಭರ್ತಿಗೆ ಕ್ರಮವಹಿಸಿದೆ. ಆ ನೇಮಕಾತಿಗಳಿಗೆ ನಡೆಯುವ ವಿವಿಧ ರೀತಿಯ ಸ್ಪರ್ಧಾತ್ಮಕ ಪರೀಕ್ಷೆಗಳು ಸೇರಿದಂತೆ ಐಎಎಸ್, ಕೆಎಎಸ್ ಪರೀಕ್ಷೆಗಳಿಗೆ ಶ್ರಮವಹಿಸಿ ಓದುವ ಮೂಲಕ ನೇಮಕಾತಿ ಹೊಂದಿ ಉತ್ತಮ ಜೀವನ ನಡೆಸುವಂತೆ ತಿಳಿಸಿದರು.

ವಿದ್ಯಾರ್ಥಿಗಳು ಧೂಮಪಾನ, ಮದ್ಯಪಾನ ಸೇರಿದಂತೆ ಇತರೆ ರೀತಿಯ ಮಾದಕ ವ್ಯಸನಗಳ ದುಷ್ಪರಿಣಾಮಗಳ ಬಗ್ಗೆ ತಿಳಿದುಕೊಂಡು ಅವುಗಳಿಂದ ದೂರವಿದ್ದು ಆರೋಗ್ಯಕರ ಜೀವನ ನಡೆಸಿ, ತಮ್ಮ ತಂದೆ-ತಾಯಿಯ ಆಸೆಗಳನ್ನು ಈಡೇರಿಸಬೇಕೆಂದು. ವ್ಯಸನ ಮುಕ್ತ ಜೀವನವನ್ನು ದಿನಾಚರಣೆಯಂದು ಮಾತ್ರವಲ್ಲದೆ ಪ್ರತಿದಿನದ ಜೀವನದಲ್ಲೂ ಅಳವಡಿಸಿಕೊಳ್ಳಬೇಕು ಎಂದು ಚಂದ್ರಯ್ಯ ಹೇಳಿದರು.

ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಶೇಖರ್ ಮಾತನಾಡಿ, ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಉತ್ತಮ ಅಭ್ಯಾಸಗಳನ್ನು ಬೆಳೆಸಿಕೊಳ್ಳುವುದು ಅಗತ್ಯವಾಗಿದೆ. ಇತ್ತೀಚಿನ ದಿನಗಳಲ್ಲಿ ಮೊಬೈಲ್‌ನ ಅತಿಯಾದ ಬಳಕೆ ಅಮೂಲ್ಯ ಸಮಯವನ್ನು ವ್ಯರ್ಥ ಮಾಡುತ್ತಿದೆ. ವಿದ್ಯಾರ್ಥಿಗಳು ತಮ್ಮ ಸಮಯವನ್ನು ಶಿಕ್ಷಣ, ಕ್ರೀಡೆ ಹಾಗೂ ಉತ್ತಮ ಚಟುವಟಿಕೆಗಳಿಗೆ ಮೀಸಲಿಡಬೇಕು ಎಂದರು.

ಮಕ್ಕಳಿಗೆ ಉತ್ತಮ ಸಂಸ್ಕಾರ ಮತ್ತು ಸಮಾಜಕ್ಕೆ ಕೊಡುಗೆ ನೀಡುವ ಮನೋಭಾವವನ್ನು ಬೆಳೆಸಬೇಕು. ವಿದ್ಯಾರ್ಥಿಗಳು ಪ್ರತಿದಿನ ಪತ್ರಿಕೆಗಳನ್ನು ಓದಿ ಪ್ರಚಲಿತ ವಿದ್ಯಾಮಾನಗಳ ಬಗ್ಗೆ ಹೆಚ್ಚಾಗಿ ತಿಳಿದುಕೊಳ್ಳಬೇಕು, ಮದ್ಯಪಾನ ಹಾಗೂ ಇತರ ಮಾದಕ ವ್ಯಸನಗಳ ಗೀಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ನಶೆಯ ಪರಿಣಾಮ ಕುಟುಂಬಗಳನ್ನೇ ಅಧಃಪತನಕ್ಕೆ ತಳ್ಳುತ್ತವೆ, ನಶೆಯಲ್ಲಿರುವ ವ್ಯಕ್ತಿಗಳಿಗೆ ತಂದೆ, ತಾಯಿ, ಮಕ್ಕಳು ಎಂಬ ಅರಿವೇ ಇಲ್ಲದ ಸ್ಥಿತಿ ಉಂಟಾಗಿ ಅನೇಕ ಅಪರಾಧಗಳು ಮತ್ತು ಸಾವುಗಳು ಸಂಭವಿಸುತ್ತಿವೆ ಆದ್ದರಿಂದ ಎಲ್ಲಾ ರೀತಿಯ ದುಶ್ಚಟಗಳಿಂದ ದೂರವಿರಬೇಕು ಎಂದು ಕರೆ ನೀಡಿದರು.

ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಅನುಕೂಲವಾಗಲು ಸರ್ಕಾರ ವಿವಿಧ ರೀತಿಯ ಸೌಲಭ್ಯಗಳನ್ನು ಒದಗಿಸಿದ್ದು ಉಚಿತ ಬಸ್ ವ್ಯವಸ್ಥೆಯಂತಹ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಕೆಟ್ಟ ಸ್ನೇಹದಿಂದ ಅನೇಕ ಯುವಕರು ದುಶ್ಚಟಗಳಿಗೆ ಬಲಿಯಾಗುತ್ತಾರೆ. ಅಂತಹವರಿಂದ ದೂರವಿದ್ದು, ಉತ್ತಮ ಸ್ನೇಹಿತರನ್ನು ಆಯ್ಕೆ ಮಾಡಿಕೊಳ್ಳುವಂತೆ ಅವರು ಸಲಹೆ ನೀಡಿದರು.

ಡಾ. ಬಿ.ಆರ್. ಅಂಬೇಡ್ಕರ್ ದೇಶಕ್ಕೆ ಶ್ರೇಷ್ಠ ಸಂವಿಧಾನವನ್ನು ನೀಡಿದ್ದು, ಅದರಲ್ಲಿರುವ ಹಕ್ಕುಗಳು ಮತ್ತು ಅವಕಾಶಗಳನ್ನು ಪ್ರತಿಯೊಬ್ಬರೂ ಸದ್ಬಳಕೆ ಮಾಡಿಕೊಳ್ಳಬೇಕು. ಭಗತ್ ಸಿಂಗ್ ಹಾಗೂ ಸ್ವಾಮಿ ವಿವೇಕಾನಂದರಂತಹ ಮಹನೀಯರು ಯಾವುದೇ ದುಶ್ಚಟಗಳಿಗೆ ಒಳಗಾಗದೆ ದೇಶಸೇವೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಜೀವನ ಮುಡಿಪಾಗಿಟ್ಟಿದ್ದರು. ಅವರ ಆದರ್ಶಗಳನ್ನು ಯುವಜನತೆ ಅನುಸರಿಸಬೇಕು ಎಂದು ಶೇಖರ್ ತಿಳಿಸಿದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಹಾಗೂ ಮಾನಸಿಕ ಆರೋಗ್ಯಾಧಿಕಾರಿ ಡಾ. ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾನಸಿಕ ಆರೋಗ್ಯ ವಿಭಾಗದ ಮನೋವೈದ್ಯಕೀಯ ಸಾಮಾಜಿಕ ಕಾರ್ಯಕರ್ತೆ ಪದ್ಮರೇಖಾ ಮಾತನಾಡಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಸಾವಿತ್ರಮ್ಮ ಅಧ್ಯಕ್ಷತೆ ವಹಿಸಿದ್ದರು. ವ್ಯಸನ ಮುಕ್ತ ದಿನಾಚರಣೆ ಅಂಗವಾಗಿ ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾಗಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಿಸಲಾಯಿತು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರವಿರಾಜ್ , ಸಹಾಯಕ ನಿರ್ದೇಶಕಿ ಜೆ.ಹೇಮಾವತಿ, ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಶಿವಲಿಂಗೇ ಗೌಡ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.

2ಕೆಆರ್ ಎಂಎನ್ 1

ರಾಮನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶ್ರೀ ಮ.ನಿ.ಪ್ರ. ಡಾ.ಮಹಾಂತ ಶಿವಯೋಗಿ ಸ್ವಾಮೀಜಿ ಜಯಂತಿ ಅಂಗವಾಗಿ ಆಯೋಜಿಸಲಾಗಿದ್ದ ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಅತಿಥಿಗಳು ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಗ್ಗಿದ ಪುಷ್ಯ ಮಳೆ ಅಬ್ಬರ: ನಿಲ್ಲದ ಭದ್ರೆಯ ರೌದ್ರಾವತಾರ
ರಾಜಕೀಯ ಕ್ಷೇತ್ರದಲ್ಲೂ 2ಎ‌ ಮೀಸಲಾತಿ ನೀಡಿ