ಚಿತ್ರದುರ್ಗ: ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಸಚಿವ ಶಿವರಾಜ್ ತಂಗಡಗಿ ಅವರ ನೇತೃತ್ವದಲ್ಲಿ ಭೋವಿ ಜನಾಂಗದ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿತು. ಸಮಾಜದ ಮುಖಂಡರು ಮಾತನಾಡಿ, ಸಾಮಾಜಿಕ ಶ್ರೇಯೊಭಿವೃದ್ಧಿಗೆ ಭೋವಿ ಅಭಿವೃದ್ಧಿ ನಿಗಮ ಸ್ಥಾಪನೆಯಾಗಿದ್ದು, ಹೆಚ್ಚಿನ ಅನುದಾನ ಒದಗಿಸಬೇಕು. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಮುದಾಯಕ್ಕೆ ಪ್ರಾತಿನಿಧ್ಯ, ವಿಧಾನಪರಿಷತ್ ಸದಸ್ಯ ಸ್ಥಾನ ದೊರಕಬೇಕು ಎಂದು ಬೇಡಿಕೆ ಇಟ್ಟರು. ಭೋವಿ ಸಮಾಜದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕುರಿತು ಪಕ್ಷದ ವರಿಷ್ಠರೊಂದಿಗೆ ಗಂಭೀರವಾಗಿ ಚರ್ಚೆ ಮಾಡಲಾಗುವುದು. ಚುನಾವಣೆ ಸಮೀಪಿಸುವಾಗ ಟಿಕೆಟ್ ಹಂಚಿಕೆ ವೇಳೆ ವಸ್ತುಸ್ಥಿತಿ ವಿವರಿಸಲಾಗುವುದು ಎಂದು ಭರವಸೆ ನೀಡಿದರು. ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಮಾಜಿ ಸಚಿವ ವೆಂಕಟರಮಣಪ್ಪ, ಶಾಸಕ ವೆಂಕಟೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸಮಾಜದ ಮುಖಂಡ ಹಾಗೂ ಚಿತ್ರದುರ್ಗ ಲೋಕಸಭೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ನೇರಲಗುಂಟೆ ರಾಮಪ್ಪ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ---------------- 28 ಸಿಟಿಡಿ6 ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸಮಾಜದ ಸಮಸ್ಯೆ ಬಗ್ಗೆ ಚರ್ಚಿಸಿದರು.