ಕನ್ನಡಪ್ರಭ ವಾರ್ತೆ ದಾವಣಗೆರೆ
ನಗರದ ಡಾ.ಸದ್ಯೋಜಾತ ಶಿವಾಚಾರ್ಯ ಸ್ವಾಮಿಗಳ ಹಿರೇಮಠದಲ್ಲಿ ಶನಿವಾರ 73ನೇ ಅಖಿಲ ಭಾರತ ಸಹಕಾರ ಸಪ್ತಾಹ–2026 ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ರೈತರು ದೇಶದ ಆರ್ಥಿಕತೆಯ ಬೆನ್ನೆಲುಬಾಗಿದ್ದು, ಕೃಷಿ ಕ್ಷೇತ್ರ ಸಂಕಷ್ಟಕ್ಕೆ ಸಿಲುಕಿದ ಸಂದರ್ಭದಲ್ಲಿ ರೈತರ ನೆರವಿಗೆ ನಿಲ್ಲುವುದು ಸರ್ಕಾರ ಹಾಗೂ ಸಹಕಾರ ಸಂಸ್ಥೆಗಳ ಪ್ರಮುಖ ಜವಾಬ್ದಾರಿ ಎಂದರು.
ಪ್ರಸ್ತುತ ಪರಿಸ್ಥಿತಿಯಲ್ಲಿ ಸಾಲ ವಸೂಲಾತಿಗೆ ಕಠಿಣ ಕ್ರಮ ಅನುಸರಿಸುವ ಬದಲು ರೈತರ ಸಮಸ್ಯೆ ಅರಿತು, ಸಹಾನುಭೂತಿಯಿಂದ ಸ್ಪಂದಿಸಬೇಕು. ಈ ಬಗ್ಗೆ ಸರ್ಕಾರದ ಗಮನ ಸೆಳೆಯಲಾಗುವುದು. ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ಮೂಲಕ ರಾಜ್ಯಕ್ಕೆ ದೊರೆಯುತ್ತಿದ್ದ ಆರ್ಥಿಕ ನೆರವು ಶೇ.58 ಕಡಿತಗೊಂಡಿರುವುದರಿಂದ ಸಹಕಾರ ಬ್ಯಾಂಕ್‌ಗಳ ಸಾಲ ವಿತರಣೆಗೆ ತೊಂದರೆಯಾಗುತ್ತಿದೆ ಎಂದು ಅವರು ಹೇಳಿದರು.ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಸಮಸ್ಯೆ ಗಂಭೀರತೆ ವಿವರಿಸಲಾಗಿದೆ. ರೈತರಿಗೆ ಸಕಾಲದಲ್ಲಿ ಸಾಲ ಸೌಲಭ್ಯ ಒದಗಿಸಲು ಅಗತ್ಯ ಅನುದಾನ ಬಿಡುಗಡೆಗೆ ಒತ್ತಾಯಿಸಲಾಗಿದೆ. ದೇಶದ ಆರ್ಥಿಕ ಪ್ರಗತಿ ಹಾಗೂ ತೆರಿಗೆ ಸಂಗ್ರಹಣೆಯಲ್ಲಿ ಕರ್ನಾಟಕ ಮಹತ್ವದ ಕೊಡುಗೆ ನೀಡುತ್ತಿದೆ. ಆದರೂ, ರಾಜ್ಯಕ್ಕೆ ನ್ಯಾಯಯುತ ಅನುದಾನ ಸಿಗುತ್ತಿಲ್ಲ. ರಾಜ್ಯದ ಹಕ್ಕಿನ ಅನುದಾನ ಪಡೆಯಲು ಮಾಜಿ ಸಿಎಂ ಸಿದ್ದರಾಮಯ್ಯ, ಸಿಎಂ ಡಿ.ಕೆ. ಶಿವಕುಮಾರ, ಸಂಸದರೊಂದಿಗೆ ಚರ್ಚಿಸಿ ಕೇಂದ್ರದ ಗಮನ ಸೆಳೆಯಲಾಗಿದೆ. ರಾಜ್ಯಕ್ಕೆ ಬರಬೇಕಾದ ಅನುದಾನ ಬಿಡುಗಡೆಗೆ ನಿರಂತರ ಪ್ರಯತ್ನ ನಡೆಸಿದ್ದೇವೆ ಎಂದು ಅವರು ತಿಳಿಸಿದರು.
- - -
ರೈತರ ಕೃಷಿ ಚಟುವಟಿಕೆಗಳಿಗೆ ಸಮರ್ಪಕ ನೀರಾವರಿ ಸೌಲಭ್ಯ ಕಲ್ಪಿಸುವುದು ಅತ್ಯಗತ್ಯ. ಹರಿಹರ ತಾಲೂಕನ ಭೈರನಪಾದ ಏತ ನೀರಾವರಿ ಯೋಜನೆಗೆ ಅಗತ್ಯ ಸುಮಾರು 200 ಕೋ ಟಿ ರು. ಅನುದಾನ ನೀಡುವಂತೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ನೇತೃತ್ವದಲ್ಲಿ ಸಿಎಂ ಡಿ.ಕೆ.ಶಿವಕುಮಾರರನ್ನು ಭೇಟಿ ಮಾಡಿ, ಮನವಿ ಸಲ್ಲಿಸಲಾಗಿದೆ. ಯೋಜನೆ ಅನುಷ್ಠಾನಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ.
- - -