ಕನ್ನಡಪ್ರಭ ವಾರ್ತೆ ಮಂಡ್ಯ
ಇಲ್ಲಿನ ಚಾಮುಂಡೇಶ್ವರಿ ಬಡಾವಣೆಯಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ಬೆಳಗಿನಿಂದಲೇ ವಿಶೇಷ ಪೂಜಾ ಕಾರ್ಯಗಳು ನಡೆದವು. ಮಹಾನ್ಯಾಸ, ರುದ್ರಾಭಿಷೇಕ, ಪಂಚಾಮೃತಾಭಿಷೇಕ, ಕುಂಕುಮಾರ್ಚನೆ, ಏಕದಶ ಪುಷ್ಪಾರ್ಚನೆ ಸೇರಿದಂತೆ ವಿವಿಧ ಧಾರ್ಮಿಕ ವಿಧಿ- ವಿಧಾನಗಳನ್ನು ಪೂರೈಸಲಾಯಿತು.
ನಂತರ ದೇವಿಗೆ ವಿಶೇಷ ಅಲಂಕಾರ ಮಾಡಲಾಯಿತು. ಬಳಿಕ ಮಹಾಮಂಗಳಾರತಿ, ಭಕ್ತಾದಿಗಳಿಗೆ ಪ್ರಸಾದ ವಿತರಣೆ ನಡೆಯಿತು. ಸಹಸ್ರಾರು ಮಂದಿ ದೇವಳಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದು ಪುನೀತರಾದರು. ಇದೇ ವೇಳೆ ಉತ್ಸವ ಮೂರ್ತಿಯ ಉತ್ಸವವನ್ನೂ ನೆರವೇರಿಸಲಾಯಿತು.ನಗರದ ಚಿಕ್ಕೇಗೌಡನದೊಡ್ಡಿ ಬಡಾವಣೆಯಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲೂ ವಿಶೇಷ ಪೂಜಾ ಕಾರ್ಯಗಳು ನಡೆದವು. ಇಲ್ಲಿನ ಪೇಟೆಬೀದಿಯಲ್ಲಿರುವ ಮಾರುಕಟ್ಟೆ ಆವರಣದಲ್ಲಿನ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆದವು. ಭಕ್ತರು ದೇವಾಲಯಕ್ಕೆ ಆಗಮಿಸಿ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.
ಆಷಾಢ ಕೊನೆ ಶುಕ್ರವಾರದ ಅಂಗವಾಗಿಯೂ ದೇವಾಲಯದಲ್ಲಿ ವಿಶೇಷ ಪೂಜೆ ನಡೆಸಲು ಸಿದ್ಧತೆ ನಡೆಸಲಾಗಿದೆ. ಇಂದು ಮತ್ತು ನಾಳೆಯೂ ದೇವಾಲಯದಲ್ಲಿ ವಿವಿಧ ಧಾರ್ಮಿಕ ಪೂಜಾ ಕಾರ್ಯಗಳು ನಡೆಯುವುದರಿಂದ ದೇವಾಲಯಕ್ಕೆ ಹೆಚ್ಚಿನ ಭಕ್ತರು ಆಗಮಿಸಿ ತಮ್ಮ ಭಕ್ತಿಯನ್ನು ಸಲ್ಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ವತಿಯಿಂದಲೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಶ್ರೀ ಚಾಮುಂಡೇಶ್ವರಿ ವರ್ಧಂತಿ ಅಂಗವಾಗಿ ವಿವಿಧ ದೇವಾಲಯಗಳಲ್ಲಿ ಸಾಮೂಹಿಕ ಚಂಡಿಕಾ ಪೂಜೆ, ದುರ್ಗಾ ಪರಮೇಶ್ವರಿ ಪೂಜಾ ಕಾರ್ಯಗಳು ನಡೆದವು.