ಕನ್ನಡಪ್ರಭ ವಾರ್ತೆ ಮಂಗಳೂರು/ಮಡಿಕೇರಿ
ರಾಜ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿ ಹಾಗೂ ಅಲ್ಪಸಂಖ್ಯಾತ ಓಲೈಕೆ ನೀತಿ ವಿರೋಧಿಸಿ ಪ್ರತಿಪಕ್ಷ ಬಿಜೆಪಿ ನಡೆಸುತ್ತಿರುವ ‘ಜನಾಕ್ರೋಶ ಯಾತ್ರೆ’ 3ನೇ ದಿನಕ್ಕೆ ಕಾಲಿಟ್ಟಿದ್ದು, ಬುಧವಾರ ಮಡಿಕೇರಿ ಹಾಗೂ ಮಂಗಳೂರುಗಳಲ್ಲಿ ಜನಾಕ್ರೋಶ ಯಾತ್ರೆಯ ಸಮಾವೇಶ ನಡೆಯಿತು. ಬೆಳಗ್ಗೆ ಮಡಿಕೇರಿಯಲ್ಲಿ ಚೌಡೇಶ್ವರಿ ದೇವಾಲಯದಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಿ, ನಗರದ ಹಳೆ ಖಾಸಗಿ ಬಸ್ ನಿಲ್ದಾಣದಲ್ಲಿ ಸಮಾವೇಶ ನಡೆಸಲಾಯಿತು. ಬಳಿಕ, ಮಧ್ಯಾಹ್ನ ಮಂಗಳೂರಿನಲ್ಲಿ ಬಿಜೆಪಿ ಕಚೇರಿಯಿಂದ ನಗರದ ಅಂಬೇಡ್ಕರ್ ವೃತ್ತದವರೆಗೆ ಮೆರವಣಿಗೆ ನಡೆಯಿತು. ಬಳಿಕ, ಅಂಬೇಡ್ಕರ್ ವೃತ್ತದಲ್ಲಿ 83 ವರ್ಷ ವಯಸ್ಸಿನ ಬಿಜೆಪಿ ಹಿರಿಯ ಕಾರ್ಯಕರ್ತೆ ವತ್ಸಲಾ ಕಾಮತ್ ಅವರು ಬಿಜೆಪಿ ಧ್ವಜವನ್ನು ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಹಸ್ತಾಂತರಿಸುವ ಮೂಲಕ ಸಮಾವೇಶಕ್ಕೆ ಚಾಲನೆ ನೀಡಿದರು.
ಸಮಾವೇಶದಲ್ಲಿ ಮಾತನಾಡಿದ ವಿಜಯೇಂದ್ರ, ಸಿದ್ದರಾಮಯ್ಯ ಅವರ ಆಡಳಿತ ನೋಡಿದರೆ ಅವರು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ಕಾಂಗ್ರೆಸ್ ಮುಖ್ಯಮಂತ್ರಿಯೋ ಎಂಬ ಅನುಮಾನ ಬರುತ್ತಿದೆ ಎಂದು ಕಿಡಿ ಕಾರಿದರು.ರಾಜ್ಯ ಪ್ರವಾಸಕ್ಕೆ ತೆರಳಿದರೆ ತಮ್ಮ ಸಿಎಂ ಕುರ್ಚಿಯನ್ನು ಡಿಕೆಶಿ ಕಸಿದು ಬಿಡುವ ಭೀತಿಯಲ್ಲಿ ಸಿದ್ದರಾಮಯ್ಯ ಇದ್ದಾರೆ. ಇನ್ನೊಂದೆಡೆ, ರಾಜ್ಯ ಪ್ರವಾಸ ನಡೆಸಿದರೆ ಜನತೆ ತಲೆ ಬಗ್ಗಿಸಿ ಎಲ್ಲಿ ಬಡಿಗೆಯಲ್ಲಿ ಹೊಡೆಯುತ್ತಾರೋ ಎಂಬ ಆತಂಕ ಸಿದ್ದರಾಮಯ್ಯ ಅವರನ್ನು ಕಾಡಿದಂತಿದೆ ಎಂದು ಲೇವಡಿ ಮಾಡಿದರು.
ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಮೇಲೆ 50ಕ್ಕೂ ಅಧಿಕ ವಸ್ತುಗಳ ಬೆಲೆ ಏರಿಕೆ ಅಗಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರ ಕೇಂದ್ರದ ಜೊತೆ ಸಂಘರ್ಷದ ಹಾದಿ ತುಳಿಯುತ್ತಿದೆ. ಕಾಂಗ್ರೆಸ್ ಪಾಲಿಗೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಎಟಿಎಂನಂತಾಗಿದೆ. ಭ್ರಷ್ಟಾಚಾರದಲ್ಲಿ ಕರ್ನಾಟಕ ನಂಬರ್ ಒನ್ ಆಗಿದೆ ಎಂದು ಟೀಕಿಸಿದರು.ದೇಶದ್ರೋಹಿಗೆ ಗುಂಡಿಕ್ಕುತ್ತಿದ್ದೆವು:
ವಿಪಕ್ಷ ನಾಯಕ ಆರ್. ಅಶೋಕ್, ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಶ್ರೀರಾಮುಲು ಮತ್ತಿತರರು ಯಾತ್ರೆಯಲ್ಲಿ ಪಾಲ್ಗೊಂಡಿದ್ದರು.