ಹುಬ್ಬಳ್ಳಿ:
ಜನರ ಬಗ್ಗೆ ಕರುಣೆಯಿಲ್ಲದ ಮುಖ್ಯಮಂತ್ರಿ ಯಾರಾದರೂ ಇದ್ದರೆ ಅದು ಸಿದ್ದರಾಮಯ್ಯ ಮಾತ್ರ. ಅವರು ಮಾಡಿದ್ದೇ ಆಟ, ಓಡಿದ್ದೇ ಓಟ ಎಂಬಂತಾಗಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದರು.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಜನಪರ ಯೋಜನೆ ಜಾರಿಗೊಳಿಸಬೇಕಾದರೆ ಪೂರ್ವಾಪರ ಯೋಚನೆ ಅಗತ್ಯ. ಆದರೆ, ಅದನ್ನು ಕಾಂಗ್ರೆಸ್ ಮಾಡದೇ ಗ್ಯಾರಂಟಿ ಜಾರಿಗೊಳಿಸಿದೆ. ಇದನ್ನು ನಂಬಿದ ಜನರು ವಿಧಾನಸಭೆ ಚುನಾವಣೆಯಲ್ಲಿ ಇವರನ್ನು ಗೆಲ್ಲಿಸಿದ್ದಾರೆ. ಆದರೆ, ಲೋಕಸಭಾ ಚುನಾವಣೆಯಲ್ಲಿ ಜನರು ನಿಮಗೆ ಪಾಠ ಕಲಿಸಿದ್ದಾರೆ. ಮುಖ್ಯಮಂತ್ರಿಗಳು ಈಗಲಾದರೂ ಎಚ್ಚೆತ್ತುಕೊಳ್ಳಬೇಕು ಎಂದರು.
ಇದರಲ್ಲಿ ಯಾವುದು ಸತ್ಯ:ಈಗಾಗಲೇ ಕಾಂಗ್ರೆಸ್ ಶಾಸಕರೇ ಗ್ಯಾರಂಟಿಗಳ ಬಗ್ಗೆ ಅಪಸ್ವರ ಎತ್ತಿದ್ದಾರೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಯಾವ ಯೋಜನೆಗಳಿಗೆ ಹಣಕಾಸಿನ ನೆರವು ಸಿಗುತ್ತಿಲ್ಲ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ₹ 3 ಕೋಟಿ ನಷ್ಟಕ್ಕೊಳಗಾಗಿದೆ ಎಂದು ತಿಳಿದುಬಂದಿದೆ. ಆದರೆ, ಸರ್ಕಾರ ಶಕ್ತಿ ಯೋಜನೆಯಿಂದ ಸಾರಿಗೆ ಸಂಸ್ಥೆಗಳಿಗೆ ಉತ್ತೇಜನ ನೀಡಲಾಗಿದೆ ಎನ್ನುತ್ತಾರೆ. ಇದರಲ್ಲಿ ಯಾವುದು ಸತ್ಯ? ಎಂಬುದನ್ನು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಲಿ ಎಂದರು. ನಾವು ಗ್ಯಾರಂಟಿಗಳ ವಿರೋಧಿಗಳಲ್ಲ. ಆದರೆ, ಸರ್ಕಾರ ಈ ಬಗ್ಗೆ ಗಮನ ಹರಿಸಬೇಕು. ಜತೆಗೆ ತೈಲಬೆಲೆ ಇಳಿಕೆ ಮಾಡಿ ಜನರಿಗೆ ಅನುಕೂಲ ಮಾಡಬೇಕು. ಇಲ್ಲವಾದಲ್ಲಿ ನಮ್ಮ ಹೋರಾಟ ನಿರಂತರವಾಗಿರಲಿದೆ ಎಂದು ಎಚ್ಚರಿಸಿದರು.
ಮನೆಯೊಂದು ಮೂರು ಬಾಗಿಲು:ಒಂದು ವರ್ಷದಿಂದ ಕಾಂಗ್ರೆಸ್ ಸರ್ಕಾರವನ್ನು ಹೇಗೆ ನಡೆಸಿದೆ ಎಂಬುದನ್ನು ಜನರು ನೋಡಿದ್ದಾರೆ. ಕಾಂಗ್ರೆಸ್‌ನಲ್ಲಿ ಆಂತರಿಕ ಕಚ್ಚಾಟಗಳು ನಿರಂತರವಾಗಿ ನಡೆಯುತ್ತಿವೆ. ಡಿ.ಕೆ. ಶಿವಕುಮಾರ , ಸಿದ್ದರಾಮಯ್ಯ ಹಾಗೂ ಜಿ. ಪರಮೇಶ್ವರ ಸೇರಿ ಮನೆಯೊಂದು ಮೂರು ಬಾಗಿಲು ಎಂಬಂತಾಗಿದೆ. ಅವರದ್ದೆ ಪಕ್ಷದಲ್ಲಿ ಅವರದ್ದೇ ಶಾಸಕರು ಪಕ್ಷದ ವಿರುದ್ಧ ಮಾತನಾಡುವುದನ್ನು ನೋಡುತ್ತಿದ್ದೇವೆ. ಇದು ಮುಂದಿನ ದಿನಗಳಲ್ಲಿ ದೊಡ್ಡ ತಿರುವು ತೆಗೆದುಕೊಂಡರೂ ಅಚ್ಚರಿ ಪಡಬೇಕಿಲ್ಲ ಎಂದ ಅವರು, ನಾವು ಆಪರೇಷನ್ ಕಮಲ ಮಾಡುವ ಅಗತ್ಯವಿಲ್ಲ, ತನ್ನಷ್ಟಕ್ಕೆ ತಾನೇ ಕಾಂಗ್ರೆಸ್ ಸರ್ಕಾರ ಬಿದ್ದು ಹೋಗಲಿದೆ ಎಂದರು.