ಕನ್ನಡಪ್ರಭ ವಾರ್ತೆ ತುಮಕೂರು
ಶ್ರೀಕ್ಷೇತ್ರ ಸಿದ್ಧಗಂಗೆಯ ಆರಾಧ್ಯದೈವ ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ರಥೋತ್ಸವಕ್ಕೆ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರು ಸೋಮವಾರ ಮಧ್ಯಾಹ್ನ ೧೨ಕ್ಕೆ ಸರಿಯಾಗಿ ಶುಭ ಅಭಿಜಿನ್ ಲಗ್ನದಲ್ಲಿ ರಥದ ಗಾಲಿಗೆ ತೆಂಗಿನಕಾಯಿ ಒಡೆದು ಹಾಗೂ ಶ್ರೀಸ್ವಾಮಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ವಿಧ್ಯು ಕ್ತ ಚಾಲನೆ ನೀಡಿದರು.
ರಥೋತ್ಸವದಲ್ಲಿ ಶ್ರೀಕ್ಷೇತ್ರದ ಕಿರಿಯ ಶ್ರೀಗಳಾದ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ, ಶಾಸಕ ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ., ಉಪವಿಭಾಗಾಧಿಕಾರಿ ನಹೀದಾ ಜಮ್ ಜಮ್, ಪಾಲಿಕೆ ಆಯುಕ್ತೆ ಶುಭ, ವಿವಿಧ ಮಠಾಧೀಶರು ಸೇರಿದಂತೆ ಅನೇಕ ಗಣ್ಯರು, ಸಹಸ್ರಾರು ಭಕ್ತಾದಿಗಳು ಪಾಲ್ಗೊಂಡು ರಥವನ್ನು ಮುಂದಕ್ಕೆ ಎಳೆದು ಭಕ್ತಿ ಸಮರ್ಪಿಸಿದರು.ಇದಕ್ಕೂ ಮುನ್ನ ರಥಕ್ಕೆ ಗಣಪತಿ ಪೂಜೆ, ಸ್ವಸ್ತಿ ಪುಣ್ಯಾಃ, ಕಳಸಗಳ ಆರಾಧನೆ, ರಥಾಂಗ ಪೂಜೆ ಸೇರಿದಂತೆ ವಿವಿಧ ಪೂಜೆ ಸಲ್ಲಿಸಿ ಶ್ರೀಕ್ಷೇತ್ರದ ಆರಾಧ್ಯ ದೈವ ಸಿದ್ಧಲಿಂಗೇಶ್ವರಸ್ವಾಮಿಯನ್ನು ರಥಕ್ಕೆ ಕೂರಿಸಿ ರಾಜೋಪಚಾರ ಮತ್ತು ಅಷ್ಟೋತ್ತರ ಪೂಜೆ ನೆರವೇರಿಸಲಾಯಿತು. ರಥದ ಮುಂಭಾಗದಲ್ಲಿ ಜಯಾದಿ ಹೋಮ, ಗಣ ಹೋಮ, ಮೃತ್ಯುಂಜಯ ಹೋಮ ಸಹ ಮಾಡಲಾಯಿತು.
ರಥ ಸಾಗಿದ ದಾರಿಯುದ್ದಕ್ಕೂ ನಂದಿಧ್ವಜ, ಕರಡಿ ಮಜಲು, ನಾಗಸ್ವರ, ವೀರಗಾಸೆ, ಪಟಕುಣಿತ, ಡೋಲು ಕುಣಿತ ಸೇರಿದಂತೆ ವಿವಿಧ ಜಾನಪದ ಕಲಾ ತಂಡಗಳ ಪ್ರದರ್ಶನ ನೆರೆದಿದ್ದ ಭಕ್ತ ಸಮೂಹವನ್ನು ಆಕರ್ಷಿಸಿದವು.
ಶಿವರಾತ್ರಿ ಪ್ರಯುಕ್ತ ಜಾಗರಣೆಗಾಗಿ ನಾಡಿನಾದ್ಯಂತ ಸಹಸ್ರಾರು ಭಕ್ತಾದಿಗಳು ಭಾನುವಾರ ರಾತ್ರಿಯೇ ಶ್ರೀಮಠಕ್ಕೆ ಆಗಮಿಸಿದ್ದು ಸೋಮವಾರ ನಡೆದ ರಥೋತ್ಸವದಲ್ಲಿ ಪಾಲ್ಗೊಂಡು ಪುನೀತರಾದರು.
ರಥೋತ್ಸವದ ಪ್ರಯುಕ್ತ ಭಕ್ತಾದಿಗಳಿಗೆ ಹಲವು ಸಂಘ ಸಂಸ್ಥೆಗಳಿಂದ ಪಾನಕ, ಮಜ್ಜಿಗೆ, ಹೆಸರು ಬೇಳೆ ವಿತರಿಸಲಾಯಿತು. ರಥೋತ್ಸವದಲ್ಲಿ ನಾಡಿನ ವಿವಿಧೆಡೆಯಿಂದ ಪಾಲ್ಗೊಂಡಿದ್ದ ಸಹಸ್ರಾರು ಮಂದಿ ಭಕ್ತಾದಿಗಳಿಗೆ ವಿಶೇಷ ಪ್ರಸಾದ, ದಾಸೋಹ ವ್ಯವಸ್ಥೆ ಮಾಡಲಾಗಿತ್ತು.