ಚಿತ್ರದುರ್ಗ: ರಾಜ್ಯದಲ್ಲಿ ತೀವ್ರ ಬರಗಾಲ ಪರಿಸ್ಥಿತಿ ಇದ್ದು ರೈತರು ಸಂಕಷ್ಟ ಪರಿಸ್ಥಿತಿಯಲ್ಲಿದ್ದಾರೆ. ಬೆಳೆ ನಷ್ಟ ಪರಿಹಾರ ನೀಡದೆ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಹೇಳಿದರು.
ಪಕ್ಷದ ಜಿಲ್ಲಾ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ರೈತರ ಹಿತ ಕಾಯುವ ಕೆಲಸ ಮಾಡಿತ್ತು. ಆದರೆ ಈಗ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಹಲವಾರು ಯೋಜನೆಗಳ ರದ್ದು ಮಾಡುವುದರ ಮೂಲಕ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ದೂರಿದರು.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ರೈತರಿಗೆ ಏನೇ ಕಷ್ಟ ಬಂದರೂ ತಕ್ಷಣವೇ ಪರಿಹಾರ ನೀಡುತ್ತಿದ್ದರು. ಕಾಂಗ್ರೆಸ್ ಸರ್ಕಾರ ಪರಿಹಾರ ನೀಡುವುದು ಇರಲಿ. ರೈತರ ಸಮಸ್ಯೆಗಳ ಬಗ್ಗೆ ಗಮನ ಹರಿಸುತ್ತಿಲ್ಲ. ರಾಜ್ಯದಲ್ಲಿ ಎಂದೂ ಕಾಣದಂತಹ ಬರಗಾಲ ಬಂದಿದೆ. ಎಲ್ಲೂ ಬರಗಾಲದ ಕಾಮಗಾರಿಗಳು ಪ್ರಾರಂಭವಾಗಿಲ್ಲ. ಚುನಾಯಿತ ಪ್ರತಿನಿಧಿಗಳಾಗಲಿ, ಉಸ್ತುವಾರಿ ಸಚಿವರುಗಳಾಗಲಿ ರೈತರ ಜಮೀನುಗಳಿಗೆ ಭೇಟಿ ನೀಡಿಲ್ಲ. ರೈತರ ಕಷ್ಟ ಸುಖಗಳನ್ನು ಆಲಿಸಿಲ್ಲ ಎಂದರು.
ರಾಜ್ಯ ಸರ್ಕಾರ ರೈತರ ಪರವಾಗಿ ನಿಲ್ಲದಿದ್ದರೆ ರಾಜ್ಯ ಬಿಜೆಪಿ ರೈತ ಮೋರ್ಚಾದವತಿಯಿಂದ ಮುಂದಿನ ದಿನಗಳಲ್ಲಿ ಹೋರಾಟ ಮಾಡಲಾಗುವುದು. ರಾಜ್ಯದ ಹಲವಾರು ಕಡೆಗಳಲ್ಲಿ ತಾವು ಪ್ರವಾಸ ಮಾಡಿ ರೈತರ ಸಮಸ್ಯೆಗಳ ಆಲಿಸಿದ್ದೇನೆ. ರೈತರು ನಮಗೆ ಯಾವುದೇ ರೀತಿಯ ಗ್ಯಾರಂಟಿಗಳು ಬೇಡ. ನೀರು ಮತ್ತು ಗುಣಮಟ್ಟದ ವಿದ್ಯುತ್ ನೀಡಲಿ ಎಂದು ಒತ್ತಾಯಿಸುತ್ತಿದ್ದಾರೆ. ಇದರ ಬಗ್ಗೆ ಸರ್ಕಾರ ಗಮನ ನೀಡಬೇಕಾಗಿದೆ ಎಂದರು.ಚಿತ್ರದುರ್ಗ ಜಿಲ್ಲೆಯಲ್ಲಿ ಬರಗಾಲದ ತೀವ್ರತೆ ಹೆಚ್ಚಾಗಿದ್ದು, ಇಲ್ಲೂ ಸಹ ಯಾವುದೇ ತೆರನಾದ ಅಭಿವೃದ್ಧಿ ಕಾಮಗಾರಿಗಳು ಪ್ರಾರಂಭವಾಗಿಲ್ಲ. ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು ಗಮನ ನೀಡಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಯಾವುದೇ ಜಮೀನುಗಳಿಗೆ ಭೇಟಿ ನೀಡಿಲ್ಲ. ಕೇಂದ್ರ ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರು. ನೀಡುತ್ತೇನೆ ಎಂದು ಹೇಳಿತ್ತು. ಅದರಂತೆ ಹಣ ನೀಡಲು ತಯಾರಿದೆ. ಅದಕ್ಕೆ ತಕ್ಕಂತೆ ನಿಯಮಗಳನ್ನು ರಾಜ್ಯ ಸರ್ಕಾರ ಪಾಲನೆ ಮಾಡಬೇಕಿದೆ ಎಂದರು.
ಭದ್ರಾ ಮೇಲ್ದಂಡೆ ಯೋಜನೆ ಕಾಲುವೆಗಳನ್ನು ನಿರ್ಮಾಣ ಮಾಡಿದ ಮೇಲೆ ಕೃಷಿ ಸಿಂಚಾಯಿನಿ ಯೋಜನೆಯಡಿ ರೈತರ ಹೊಲಗಳಿಗೆ ಹನಿ ನೀರಾವರಿ ಯೋಜನೆ ಅಳವಡಿಸಲು ಕೇಂದ್ರ ನೆರವು ನೀಡುತ್ತದೆ. ತನ್ನ ಪಾಲಿನ ಜವಾಬ್ದಾರಿ ನಿರ್ವಹಿಸದ ರಾಜ್ಯ ಸರ್ಕಾರ ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಬಾರದು ಎಂದು ನಡಹಳ್ಳಿ ಹೇಳಿದರು.ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಳೆಕಾಯಿ ರಾಮದಾಸ್, ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಕೆ.ಮಲ್ಲಿಕಾರ್ಜುನ್, ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಬುರುಡೆ ಕಟ್ಟೆ ರಾಜೇಶ್, ಚಿತ್ರದುರ್ಗ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಯಾದವ್, ಜಿಲ್ಲಾ ಬಿಜೆಪಿ ವಕ್ತಾರ ಬೇದ್ರೇ ನಾಗರಾಜು, ದಗ್ಗೆ ಶಿವಪ್ರಕಾಶ್, ಚಾಲುಕ್ಯ ನವೀನ್, ಶಾರದಮ್ಮ, ಶ್ಯಾಮಲ, ತಿಪ್ಪೇಸ್ವಾಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು.