ಖಾಲಿ ಹುದ್ದೆಗಳ ತಕ್ಷಣವೇ ಭರ್ತಿಗೆ ಆಗ್ರಹಿಸಿ ಸಹಿ ಸಂಗ್ರಹ ಅಭಿಯಾನ

KannadaprabhaNewsNetwork |  
Published : Nov 08, 2025, 02:15 AM IST
ಖಾಲಿ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಬೇಕು ಮತ್ತು ಹೊಸ ಉದ್ಯೋಗಗಳನ್ನು ಸೃಷ್ಟಿಸಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ಯುವಜನ ಒಕ್ಕೂಟದಿಂದ ಬಳ್ಳಾರಿಯಲ್ಲಿ ಸಹಿ ಸಂಗ್ರಹ ಅಭಿಯಾನ ಜರುಗಿತು. | Kannada Prabha

ಸಾರಾಂಶ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಬೇಕು.

ಬಳ್ಳಾರಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಬೇಕು. ಹೊಸ ಉದ್ಯೋಗಗಳನ್ನು ಸೃಷ್ಟಿಸಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ಯುವಜನ ಒಕ್ಕೂಟದಿಂದ ನಗರದಲ್ಲಿ ಸಹಿ ಸಂಗ್ರಹ ಅಭಿಯಾನ ಜರುಗಿತು.

ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಹಿರಿಯ ವಕೀಲ ಹಾಗೂ ಕಾರ್ಮಿಕ ಮುಖಂಡ ಆರ್‌.ಸೋಮಶೇಖರಗೌಡ, ಉದ್ಯೋಗ ಸಮಸ್ಯೆಯಿಂದ ಯುವ ಸಮುದಾಯ ಎದುರಿಸುತ್ತಿರುವ ನಾನಾ ಸಂಕಷ್ಟಗಳ ಕುರಿತು ವಿವರಿಸಿದರು.

ದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆ ಭಯಾನಕ ರೂಪವನ್ನು ಪಡೆದುಕೊಂಡಿದೆ. ಕೇಂದ್ರ ಸರ್ಕಾರದ 78 ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿ 9.78 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ ಮತ್ತು ಬಹುತೇಕ ಎಲ್ಲ ರಾಜ್ಯಗಳಲ್ಲಿ ಇದೇ ಪರಿಸ್ಥಿತಿಯಿದೆ. 2014ರಲ್ಲಿ ವಾರ್ಷಿಕ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿದ ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿಯತ್ತ ಗಮನ ನೀಡಲಿಲ್ಲ. ದೇಶದ ಪ್ರತಿಯೊಬ್ಬರಿಗೂ ಅವರವರ ಶಕ್ತಿ ಮತ್ತು ಸಾಮರ್ಥ್ಯಕ್ಕೆ ಅನುಗುಣವಾಗಿ ಉದ್ಯೋಗ ಒದಗಿಸಬೇಕಿರುವುದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕರ್ತವ್ಯವಾಗಿದೆ. ಆದರೆ, ಎರಡು ಸರ್ಕಾರಗಳು ಯುವ ಸಮುದಾಯದ ಬಗ್ಗೆ ಯಾವ ಕಾಳಜಿಯನ್ನು ತೆಗೆದುಕೊಳ್ಳದೇ ನಿರ್ಲಕ್ಷ್ಯ ವಹಿಸಿವೆ. ಇದರಿಂದಾಗಿಯೇ ಯುವಕರು ಮಾದಕ ವ್ಯಸನಗಳು, ಅಪರಾಧ ಪ್ರವೃತ್ತಿಗಳು ತೊಡಗಿಸಿಕೊಳ್ಳುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.

ಎಐಡಿವೈಒ ಸಂಘಟನೆಯ ಜಿಲ್ಲಾಧ್ಯಕ್ಷ ಎ.ಪಂಪಾಪತಿ ಕೋಳೂರು ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಬೇಕು.

ಎಲ್ಲಾ ನೇಮಕಾತಿಗಳ ವಯೋಮಿತಿಯಲ್ಲಿ ಕನಿಷ್ಠ 5 ವರ್ಷಗಳ ಸಡಿಲಿಕೆ ನೀಡಬೇಕು. ಎಲ್ಲ ರೀತಿಯ ನೇಮಕಾತಿ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ ಇರಬೇಕು. ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಬೇಕು. ಕೆಪಿಎಸ್‌ಸಿಯಲ್ಲಿನ ಅಕ್ರಮ ತಡೆಗಟ್ಟಲು ರಾಜ್ಯ ಸರ್ಕಾರ ಹೋಟಾ ಸಮಿತಿ ಶಿಫಾರಸ್ಸುಗಳನ್ನು ಜಾರಿಗೊಳಿಸಬೇಕು. ಗುತ್ತಿಗೆ ವ್ಯವಸ್ಥೆಯನ್ನು ರದ್ದುಗೊಳಿಸಬೇಕು ಮತ್ತು ಎಲ್ಲ ಹುದ್ದೆಗಳಿಗೂ ಕಾಯಂ ನೇಮಕಾತಿ ಮಾಡಬೇಕು. ದೇಶಾದ್ಯಂತ ಗಿಗ್ ಕಾರ್ಮಿಕರಿಗೆ ಕಾರ್ಮಿಕರೆಂದು ಪರಿಗಣಿಸಿ ಮತ್ತು ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಯನ್ನು ಖಚಿತಪಡಿಸಬೇಕು ಎಂದು ಒತ್ತಾಯಿಸಿದರು.

ಉದ್ಯೋಗಾವಕಾಶ ದೊರೆಯುವವರೆಗೆ ಗೌರವಾನ್ವಿತ ಜೀವನ ನಡೆಸಲು ಸೂಕ್ತವಾದ ನಿರುದ್ಯೋಗ ಭತ್ಯೆ ನೀಡಬೇಕು.

ಸರ್ಕಾರಿ ಸಂಸ್ಥೆಗಳ ಖಾಸಗೀಕರಣ ನೀತಿಯನ್ನು ರದ್ದುಗೊಳಿಸಬೇಕು ಹಾಗೂ ನೇಮಕಾತಿಗಳಲ್ಲಿ ದುಬಾರಿ ಪರೀಕ್ಷಾ ಶುಲ್ಕ ಕೈಬಿಡಬೇಕು ಮತ್ತು ಪರೀಕ್ಷಾರ್ಥಿಗಳಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು ಎಂದು ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಜಗದೀಶ್ ನೇಮಕಲ್ ಆಗ್ರಹಿಸಿದರು. ಸದಸ್ಯರಾದ ಸಿದ್ದು, ಪ್ರಮೋದ್ ಮತ್ತು ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಅಭಿಯಾನದಲ್ಲಿ ಭಾಗವಹಿಸಿದ್ದರು.

PREV

Recommended Stories

ಬ್ರಾಹ್ಮಣ ಸಮುದಾಯಕ್ಕೆ ಸೌಲಭ್ಯ ನೀಡಲು ಬದ್ಧ : ಸಚಿವ ದಿನೇಶ್‌ ಗುಂಡೂರಾವ್‌
ಬೆಂಗಳೂರು ನಗರದ 6 ಆರ್‌ಟಿಒ ಕಚೇರಿ ಮೇಲೆ ದಾಳಿ: ಹಲವು ಅಕ್ರಮ ಪತ್ತೆ