ಹಳ್ಳಿಮಾಳ ಸೊಸೈಟಿಯಿಂದ ಮಹತ್ವದ ಕೊಡುಗೆ: ಅಜಿತ್

KannadaprabhaNewsNetwork |  
Published : Nov 21, 2026, 01:15 AM IST
20ಕೆಆರ್ ಎಂಎನ್ 4.ಜೆಪಿಜಿರಾಮನಗರ ತಾಲೂಕಿನ ಹಳ್ಳಿಮಾಳ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಸಹಕಾರ ಸಂಘದಲ್ಲಿ ಆರೋಗ್ಯ ತಪಾಸಣೆ ಶಿಬಿರ, ಜಾಗೃತಿ ಕಾರ್ಯಕ್ರಮವನ್ನು ಸಂಘದ ಅಧ್ಯಕ್ಷ ರವಿ ಉದ್ಘಾಟಿಸಿದರು. | Kannada Prabha

ಸಾರಾಂಶ

ಆರೋಗ್ಯ ತಪಾಸಣಾ ಶಿಬಿರಗಳು ಕೇವಲ ಕಾಯಿಲೆಗಳನ್ನು ಪತ್ತೆಹಚ್ಚುವ ಕಾರ್ಯಕ್ರಮಗಳಲ್ಲ. ಬದಲಾಗಿ ಜನರಲ್ಲಿ ಆರೋಗ್ಯದ ಅರಿವು ಮೂಡಿಸುವ ಹಾಗೂ ಆರೋಗ್ಯವಂತ ಸಮಾಜ ನಿರ್ಮಿಸುವ ಮಹತ್ವದ ಸಾಮಾಜಿಕ ಕಾರ್ಯಗಳಾಗಿವೆ. ಇಂತಹ ಶಿಬಿರಗಳನ್ನು ಆಯೋಜಿಸುವ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಆರೋಗ್ಯ ಸೇವೆ ತಲುಪಿಸಲು ಸಾಧ್ಯ. ರೋಗ ಬಂದ ನಂತರ ಚಿಕಿತ್ಸೆ ಪಡೆಯುವುದಕ್ಕಿಂತ ರೋಗ ಬರುವ ಮುನ್ನವೇ ಮುನ್ನೆಚ್ಚರಿಕೆ ವಹಿಸುವುದು ಅತ್ಯಂತ ಮುಖ್ಯ ಎಂದು ರವಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ರಾಮನಗರ

ರೈತರು ಹಾಗೂ ಗ್ರಾಮೀಣ ಜನರ ಆರ್ಥಿಕ ಅಭಿವೃದ್ಧಿಯ ಜೊತೆಗೆ ಅವರ ಆರೋಗ್ಯ ಮತ್ತು ಕಲ್ಯಾಣಕ್ಕೂ ಹಳ್ಳಿಮಾಳ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ ಆದ್ಯತೆ ನೀಡುವ ಮೂಲಕ ಸಮಾಜಕ್ಕೆ ಮಹತ್ವದ ಕೊಡುಗೆ ನೀಡುತ್ತಿದೆ ಎಂದು ಸಹಕಾರ ಇಲಾಖೆಯ ಡಿ.ಆರ್. ಅಜಿತ್ ಹೇಳಿದರು.

ತಾಲೂಕಿನ ಹಳ್ಳಿಮಾಳ ಗ್ರಾಮದಲ್ಲಿ ಹಳ್ಳಿಮಾಳ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘವು ಆಯುಷ್ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡಿದರು.

ಸೊಸೈಟಿಯು ರೈತರಿಗೆ ಬೆಳೆ ಸಾಲ, ಚಿನ್ನಾಭರಣ ಹಾಗೂ ಸ್ತ್ರೀ ಶಕ್ತಿ ಸಾಲವನ್ನು ಸಮರ್ಪಕವಾಗಿ ವಿತರಣೆ ಮಾಡುತ್ತಿದ್ದೇವೆ. ಇಷ್ಟೆಕ್ಕೆ ಸೀಮಿತವಾಗದೆ ಗ್ರಾಮೀಣ ಜನರ ಆರೋಗ್ಯ, ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೂ ಸಹಕಾರ ಕೊಡುಗೆ ನೀಡುತ್ತಿದೆ. ಈ ಮೂಲಕ ಜಿಲ್ಲೆಯ ಅತ್ಯುತ್ತಮ ಗ್ರಾಮೀಣ ಸಹಕಾರ ಸಂಘ ಎಂಬ ಹೆಗ್ಗಳಿಕೆಗೆ ಹಳ್ಳಿಮಾಳ ಸೊಸೈಟಿ ಪಾತ್ರವಾಗಿದೆ ಎಂದರು.

ಇಂದಿನ ಬದಲಾಗುತ್ತಿರುವ ಜೀವನಶೈಲಿ ಹಾಗೂ ಆಹಾರ ಪದ್ಧತಿಯಿಂದಾಗಿ ಹಲವಾರು ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ. ಇಂತಹ ಸಂದರ್ಭದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸುವುದರಿಂದ ಬಡವರು, ಮಧ್ಯಮ ವರ್ಗದವರು ಹಾಗೂ ಗ್ರಾಮೀಣ ಭಾಗದ ಜನರಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಮಧುಮೇಹ, ರಕ್ತದೊತ್ತಡ, ರಕ್ತಹೀನತೆ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲಿಯೇ ಗುರುತಿಸಿ ಸೂಕ್ತ ವೈದ್ಯಕೀಯ ಸಲಹೆ ಪಡೆಯಲು ಅವಕಾಶ ದೊರೆಯುತ್ತದೆ ಎಂದು ಅಜಿತ್ ಹೇಳಿದರು.

ಹಳ್ಳಿಮಾಳ ಸೊಸೈಟಿ ಅಧ್ಯಕ್ಷ ಸಿ. ರವಿ ಮಾತನಾಡಿ, ಸೊಸೈಟಿಯು ರೈತರಿಗೆ ವಿವಿಧ ಸಾಲ ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ ಅವರ ಸಮಗ್ರ ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳುತ್ತಿದೆ. ಸಂಘವು ₹21 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ತಿಳಿಸಿದರು.

ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆಗಳು ಹಾಗೂ ಸರ್ಕಾರದಿಂದ ರೈತರಿಗೆ ದೊರೆಯುವ ವಿವಿಧ ಸೌಲಭ್ಯಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ರೈತರು ಮತ್ತು ಸರ್ಕಾರದ ನಡುವಿನ ಕೊಂಡಿಯಾಗಿ ಕಾರ್ಯನಿರ್ವಹಿಸುವ ಮೂಲಕ ಅರ್ಹ ರೈತರಿಗೆ ಸೌಲಭ್ಯಗಳನ್ನು ತಲುಪಿಸಲು ಸೊಸೈಟಿ ಪ್ರಯತ್ನಿಸುತ್ತಿದೆ ಎಂದು ಹೇಳಿದರು.

ಆರೋಗ್ಯ ತಪಾಸಣಾ ಶಿಬಿರಗಳು ಕೇವಲ ಕಾಯಿಲೆಗಳನ್ನು ಪತ್ತೆಹಚ್ಚುವ ಕಾರ್ಯಕ್ರಮಗಳಲ್ಲ. ಬದಲಾಗಿ ಜನರಲ್ಲಿ ಆರೋಗ್ಯದ ಅರಿವು ಮೂಡಿಸುವ ಹಾಗೂ ಆರೋಗ್ಯವಂತ ಸಮಾಜ ನಿರ್ಮಿಸುವ ಮಹತ್ವದ ಸಾಮಾಜಿಕ ಕಾರ್ಯಗಳಾಗಿವೆ. ಇಂತಹ ಶಿಬಿರಗಳನ್ನು ಆಯೋಜಿಸುವ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಆರೋಗ್ಯ ಸೇವೆ ತಲುಪಿಸಲು ಸಾಧ್ಯ. ರೋಗ ಬಂದ ನಂತರ ಚಿಕಿತ್ಸೆ ಪಡೆಯುವುದಕ್ಕಿಂತ ರೋಗ ಬರುವ ಮುನ್ನವೇ ಮುನ್ನೆಚ್ಚರಿಕೆ ವಹಿಸುವುದು ಅತ್ಯಂತ ಮುಖ್ಯ ಎಂದು ರವಿ ತಿಳಿಸಿದರು.

ಆಯುಷ್ ಇಲಾಖೆಯ ವೈದ್ಯರಾದ ಡಾ. ಶಹಾಬುದ್ದೀನ್ ಮಾತನಾಡಿದರು. ಸಂಘದ ಮಾಜಿ ಅಧ್ಯಕ್ಷ ಸುರೇಶ್, ಉಪಾಧ್ಯಕ್ಷ ನಾಗಯ್ಯ, ನಿರ್ದೇಶಕರಾದ ಸಂದೀಪ್ ಗೌಡ, ಶಿವಣ್ಣ, ಸಂಘದ ಮುಖ್ಯ ಕಾರ್ಯನಿರ್ವಾಹಕ ಪ್ರಕಾಶ್, ಮುಖಂಡರಾದ ಚಂದ್ರೇಗೌಡ, ಲಿಂಗರಾಜು, ಕರಿಯಪ್ಪ, ಚಿಕ್ಕಲಿಂಗಯ್ಯ ಮತ್ತಿತರರು ಉಪಸ್ಥಿತರಿದ್ದರು.

ಶಿಬಿರದಲ್ಲಿ ನೂರಾರು ರೈತರು ಆರೋಗ್ಯ ತಪಾಸಣೆಗೆ ಒಳಗಾಗಿ ವೈದ್ಯರಿಂದ ಸಲಹೆ ಮತ್ತು ಅಗತ್ಯ ಚಿಕಿತ್ಸೆ ಪಡೆದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯ ಹೆದ್ದಾರಿ ದುರಸ್ತಿಗಾಗಿ ರಸ್ತೆತಡೆ
ಅನುದಾನಿತ ಶಾಲಾ ನೌಕರರಿಗೂ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಲು ಆಗ್ರಹ