ಹೊಸಪೇಟೆ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು ಬಂಧಿಸಿರುವ ಕ್ರಮ ಖಂಡಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ನೇತೃತ್ವದಲ್ಲಿ ಮಂಗಳವಾರ ರೈತರು ಪ್ರತಿಭಟನೆ ನಡೆಸಿದರು.
ಪ್ರತಿಭಟನಾ ಸಭೆ ಉದ್ದೇಶಿಸಿ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಟಿ. ನಾಗರಾಜ ಮಾತನಾಡಿ, ಮಹದಾಯಿ ಹೋರಾಟ ಭಾಗವಾಗಿ ಕಳೆದ 13 ವರ್ಷಗಳ ಹಿಂದೆ ಹುಬ್ಬಳ್ಳಿಯಲ್ಲಿ ನಡೆದ ರೈಲು ರೋಖೋ ಪ್ರಕರಣದಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು ಪೊಲೀಸರು ಬಂಧಿಸಿರುವುದು ತೀವ್ರ ಖಂಡನೀಯ. ಘಟನೆ ಖಂಡಿಸಿ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರಾಜ್ಯಾದ್ಯಂತ ರೈತ ಸಂಘ ಮೌನ ಪ್ರತಿಭಟನೆ ನಡೆಸಿದೆ. ಕೋಡಿಹಳ್ಳಿ ಚಂದ್ರಶೇಖರ ರೈತರ ಪರ ನಡೆಸಿದ ಹೋರಾಟದಲ್ಲಿ ಅವರನ್ನು ಬಂಧಿಸಿರುವುದು ಸರಿಯಾದ ಕ್ರಮವಲ್ಲ. ಈ ಹಿನ್ನೆಲೆ ಕೋಡಿಹಳ್ಳಿ ಚಂದ್ರಶೇಖರ ಅವರನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಹಾಗೂ ಅವರ ಮೇಲಿನ ಹಾಗೂ ರೈತರ ಮೇಲಿನ ಎಲ್ಲ ಪ್ರಕರಣ ಕೈಬಿಡಬೇಕು ಎಂದು ಒತ್ತಾಯಿಸಿದರು.
ನಂತರ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.ಪ್ರತಿಭಟನೆಯಲ್ಲಿ ರೈತ ಸಂಘದ ತಾಲೂಕಾಧ್ಯಕ್ಷ ಸಣ್ಣಕ್ಕಿ ರುದ್ರಪ್ಪ, ಜಿಲ್ಲಾ ಕಾರ್ಯಾಧ್ಯಕ್ಷ ಎಂ. ಜಡಿಯಪ್ಪ, ರೈತ ಸಂಘದ ಮುಖಂಡ ಜಿ.ಖಾಜಾ ಹುಸೇನ್ ನಿಯಾಜಿ, ದೊಡ್ಡ ಗಾಳೆಪ್ಪ, ಹುಲುಗಪ್ಪ, ಜಿ.ಹನುಮಂತಪ್ಪ, ಗೋವಿಂದಪ್ಪ, ಭರಮಪ್ಪ, ತಂಗಮಣಿ, ಜಾಕೀರ್, ರಾಜಶೇಖರ ಸೇರಿದಂತೆ ಇತರರು ಭಾಗವಹಿಸಿದ್ದರು.