ಮಳವಳ್ಳಿ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಪುಟ್ಟಸ್ವಾಮಿ

KannadaprabhaNewsNetwork | Published : Sep 10, 2024 1:39 AM

ಸಾರಾಂಶ

ಬಿಜೆಪಿ ಪಕ್ಷದಿಂದ ಅಧ್ಯಕ್ಷರಾಗಿ ಹಾಗೂ ಜೆಡಿಎಸ್‌ನಿಂದ ಉಪಾಧ್ಯಕ್ಷರಾಗಿ ಆಯ್ಕೆಯಾದ ನಂತರ ಇಂದು ಕಚೇರಿಯಲ್ಲಿ ಪೂಜೆ ಸಲ್ಲಿಸಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಲಾಗಿದೆ. ಸಾರ್ವಜನಿಕರು ನೇರವಾಗಿ ಬಂದು ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಪುರಸಭೆ ವ್ಯಾಪ್ತಿ ಜನರಿಗೆ ಮೂಲ ಸೌಲಭ್ಯ ಕಲ್ಪಿಸುವ ಜೊತೆಗೆ ಪಟ್ಟಣವನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ಪುರಸಭೆ ಅಧ್ಯಕ್ಷ ಪುಟ್ಟಸ್ವಾಮಿ ತಿಳಿಸಿದರು.

ಪಟ್ಟಣದ ಪುರಸಭೆ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಕಚೇರಿಯಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿ ಪಕ್ಷದಿಂದ ಅಧ್ಯಕ್ಷರಾಗಿ ಹಾಗೂ ಜೆಡಿಎಸ್‌ನಿಂದ ಉಪಾಧ್ಯಕ್ಷರಾಗಿ ಆಯ್ಕೆಯಾದ ನಂತರ ಇಂದು ಕಚೇರಿಯಲ್ಲಿ ಪೂಜೆ ಸಲ್ಲಿಸಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಲಾಗಿದೆ. ಸಾರ್ವಜನಿಕರು ನೇರವಾಗಿ ಬಂದು ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕೆಂದು ಮನವಿ ಮಾಡಿದರು.

ಶಾಸಕರು ಹಾಗೂ ಕೇಂದ್ರ ಸಚಿವರ ಸಹಕಾರ ಪಡೆದು ಪಟ್ಟಣದ ಸಮಗ್ರ ಅಭಿವೃದ್ಧಿಗೆ ಹೊಸ ಯೋಜನೆ ತರಲಾಗುವುದು.

ಜೆಡಿಎಸ್ ಮತ್ತು ಬಿಜೆಪಿಯ ಸಹಕಾರದೊಂದಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಎಲ್ಲ ಸದಸ್ಯರ ಸಲಹೆ ಪಡೆದು ಪಟ್ಟಣದ ಅಭಿವೃದ್ಧಿಗೆ ಮುಂದಾಗುತ್ತೇವೆ ಎಂದರು.

ಪ್ರಮುಖವಾಗಿ ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ ಜನರಿಗೆ ನೀರು ಒದಗಿಸಲಾಗುವುದು. ಸ್ಥಳೀಯ ಶಾಸಕರ ಬಳಿ ಚರ್ಚಿಸಿ ಸರ್ಕಾರದಿಂದ ಹೆಚ್ಚಿನ ಅನುದಾನ ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದರು.

ಉಪಾಧ್ಯಕ್ಷ ಎನ್.ಬಸವರಾಜು (ಜಯಸಿಂಹ) ಮಾತನಾಡಿ, ಅಭಿವೃದ್ಧಿಯಲ್ಲಿ ರಾಜಕೀಯ ಮಾಡುವುದಿಲ್ಲ. ಎಲ್ಲಾ ಸದಸ್ಯರ ಸಹಕಾರದೊಂದಿಗೆ ಪಟ್ಟಣವನ್ನು ಅಭಿವೃದ್ಧಿಗೊಳಿಸಲಾಗುವುದು. ಶಾಸಕರ ವಿಶ್ವಾಸ ತೆಗೆದುಕೊಂಡು ಸರ್ಕಾರದಿಂದ ಹೆಚ್ಚಿನ ಅನುದಾನ ಬಿಡುಗಡೆಗೊಳಿಸಿಕೊಂಡು ಅಭಿವೃದ್ಧಿಗೆ ಮುಂದಾಗುತ್ತೇವೆ. ತಮ್ಮ ಅಧಿಕಾರಾವಧಿಯಲ್ಲಿ ಶಾಶ್ವತವಾಗಿ ಜನರ ಮನಸ್ಸಿನಲ್ಲಿ ಉಳಿಯುವ ಕೆಲಸ ಮಾಡಲಾಗುವುದು ಎಂದರು.

ಇದಕ್ಕೂ ಮುನ್ನ ಅಧ್ಯಕ್ಷ, ಉಪಾಧ್ಯಕ್ಷರು ಪಟ್ಟಣದ ಪ್ರವಾಸಿ ಮಂದಿರ ಬಳಿಯ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಜೆಡಿಎಸ್ ಎಸ್ಸಿ ವಿಭಾಗದ ರಾಜ್ಯ ಘಟಕದ ಅಧ್ಯಕ್ಷ, ಮಾಜಿ ಶಾಸಕ ಡಾ.ಕೆ.ಅನ್ನದಾನಿ, ಬಿಜೆಪಿ ಮುಖಂಡ ಜಿ.ಮುನಿರಾಜು, ಸದಸ್ಯರಾದ ನೂರುಲ್ಲಾ, ಟಿ.ನಂದಕುಮಾರ್, ನಾಗೇಶ್, ರವಿ, ಮುಖಂಡರಾದ ನಾಗರಾಜು, ಕೃಷ್ಣ, ರಾಮಣ್ಣ, ಕೃಷ್ಣ, ಅಂಕರಾಜು ಇದ್ದರು.

Share this article