)
ಕನ್ನಡಪ್ರಭ ವಾರ್ತೆ ಬೆಂಗಳೂರು
ಈ ತಿಂಗಳ 29ರಂದು ಮಾದಾವರದ ಮೈದಾನದಲ್ಲಿ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದ ವೇಳೆ ಕಚ್ಚಾ ಬಾಂಬ್ (ಐಇಡಿ) ಸ್ಫೋಟಿಸುವುದಾಗಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರ ಅಧಿಕೃತ ಇ-ಮೇಲ್ ವಿಳಾಸಕ್ಕೆ ನ.9 ರ ಮಧ್ಯಾಹ್ನ 3 ಗಂಟೆಗೆ ಬೆದರಿಕೆಯ ಸಂದೇಶ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾರ್ಯಕ್ರಮ ನಡೆಯುವ ಸ್ಥಳ ಮತ್ತು ಮಾದಾವರ ಮೆಟ್ರೊ ನಿಲ್ದಾಣವನ್ನೂ ಸ್ಫೋಟಿಸುವುದಾಗಿ ಇ-ಮೇಲ್ ಸಂದೇಶದಲ್ಲಿ ಬೆದರಿಕೆ ಹಾಕಲಾಗಿದೆ. ಅಲ್ಲದೆ, ಕಾರ್ಯಕ್ರಮಕ್ಕೆ ಬರುವ ಜನರಿಗೆ ಕೆಲ ಎಚ್ಚರಿಕೆಗಳನ್ನು ನೀಡಲಾಗಿದೆ. ಕಾರ್ಯಕ್ರಮಕ್ಕೆ ಮಕ್ಕಳನ್ನು ಕರೆ ತರಬಾರದು, ಎಲ್ಲಿಯಾದರೂ ಅನಾಥವಾಗಿ ಬಿದ್ದಿರುವ ಐ-ಫೋನ್‌ಗಳನ್ನು ಮುಟ್ಟಬಾರದು ಹಾಗೂ ಮೆಟ್ರೊ ರೈಲಿನಲ್ಲಿ ಪ್ರಯಾಣಿಸಬಾರದು. ಖಲಿಸ್ತಾನ್ ಜಿಂದಾಬಾದ್ ಎಂಬುದಾಗಿ ಬೆದರಿಕೆ ಸಂದೇಶದಲ್ಲಿ ಉಲ್ಲೇಖಿಸಲಾಗಿದೆ.ಪ್ರಕರಣ ದಾಖಲಿಕೊಂಡಿರುವ ಪೊಲೀಸರು ಬೆಂಗಳೂರು ಅಂತರಾಷ್ಟ್ರೀಯ ಪ್ರದರ್ಶನ ಕೇಂದ್ರದ (ಬಿಐಇಸಿ) ವ್ಯವಸ್ಥಾಪಕರನ್ನು ಸಂಪರ್ಕಿಸಿ ಕಾರ್ಯಕ್ರಮದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಜತೆಗೆ ಕಾರ್ಯಕ್ರಮಕ್ಕೆ ಬಿಗಿ ಭದ್ರತೆ ವಹಿಸಲಾಗಿದೆ. ಬೆದರಿಕೆ ಸಂದೇಶ ಕಳುಹಿಸಿರುವ ಇ-ಮೇಲ್‌ನ ಮೂಲವನ್ನು ಪತ್ತೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.