ಕನ್ನಡಪ್ರಭ ವಾರ್ತೆ ಸಕಲೇಶಪುರ
ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿವಿಧ ಸಂಘ- ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಎಸ್. ಜಾನಕಿ ಅವರ ನುಡಿ ನಮನ ಹಾಗೂ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ನಡೆಯುತ್ತಿರುವ ನುಡಿ ನಮನ ಹಾಗೂ ಸ್ಮರಣೋತ್ಸವ ಕಾರ್ಯಕ್ರಮಗಳ ಸರಣಿಯಲ್ಲಿ ಇದು 12ನೇ ಕಾರ್ಯಕ್ರಮವಾಗಿದೆ. ಜಾನಕಿ ಅವರ ಸುದೀರ್ಘ ಕಲಾ ಜೀವನ ಹಾಗೂ ಕನ್ನಡ ಭಾಷೆ ಮತ್ತು ಸಂಗೀತ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆಯನ್ನು ಸ್ಮರಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು. ಜಾನಕಿ ಅವರು ಕನ್ನಡ ನಾಡಿನಲ್ಲಿ ಜನಿಸದಿದ್ದರೂ ಕನ್ನಡ ಭಾಷೆಯ ಮೇಲೆ ಅಪಾರ ಪ್ರೀತಿ ಹಾಗೂ ಅಭಿಮಾನ ಹೊಂದಿದ್ದರು. ಹಲವು ಭಾಷೆಗಳಲ್ಲಿ ಪರಿಣತಿ ಹೊಂದಿದ್ದ ಅವರು ಸಾವಿರಾರು ಹಾಡುಗಳ ಮೂಲಕ ಸಂಗೀತ ಕ್ಷೇತ್ರದಲ್ಲಿ ಅಚ್ಚಳಿಯದ ಹೆಜ್ಜೆ ಗುರುತು ಮೂಡಿಸಿದ್ದಾರೆ. ಆಯಾ ಭಾಷೆಯನ್ನು ಅರಿತು, ಅದರ ಭಾವವನ್ನು ಅರ್ಥೈಸಿಕೊಂಡು ಹಾಡುವುದೇ ಅವರ ವಿಶೇಷತೆ ಎಂದು ಹೇಳಿದರು.
ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಉದಯ ರವಿ ಮಾತನಾಡಿ, ಇಂದಿನ ವಿದ್ಯಾರ್ಥಿಗಳಲ್ಲಿ ಪತ್ರಿಕೆ ಓದುವ ಹಾಗೂ ಸುದ್ದಿವಾಹಿನಿಗಳನ್ನು ವೀಕ್ಷಿಸುವ ಅಭ್ಯಾಸ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಎಸ್. ಜಾನಕಿ, ಎಸ್.ಪಿ. ಬಾಲಸುಬ್ರಹ್ಮಣ್ಯಂ, ಡಾ. ರಾಜಕುಮಾರ್, ಕುವೆಂಪು ಸೇರಿದಂತೆ ಹಲವು ಮಹನೀಯರ ಸಾಧನೆ ಹಾಗೂ ಕೊಡುಗೆಗಳನ್ನು ಯುವಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ ಎಂದು ಹೇಳಿದರು.ಸಾಮಾಜಿಕ ಜಾಲತಾಣಗಳಾದ ವಾಟ್ಸ್‌ಆ್ಯಪ್, ಫೇಸ್‌ಬುಕ್ ಹಾಗೂ ಇನ್‌ಸ್ಟಾಗ್ರಾಂ ಮೂಲಕ ವಿದ್ಯಾರ್ಥಿಗಳು ಹಲವು ವಿಷಯಗಳನ್ನು ತಿಳಿದುಕೊಳ್ಳುತ್ತಿದ್ದರೂ, ಮಹನೀಯರ ಜೀವನಾದರ್ಶಗಳನ್ನು ಅರಿಯಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ. ಪ್ರತಿಯೊಂದು ತಾಲೂಕು ಕೇಂದ್ರದಲ್ಲೂ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮುಂದಿನ ಪೀಳಿಗೆಗೆ ನಾಡು, ನುಡಿ ಹಾಗೂ ಸಂಸ್ಕೃತಿಯ ಮಹತ್ವವನ್ನು ಪರಿಚಯಿಸಬೇಕು ಎಂದರು.
ರೋಟರಿ ಸಂಸ್ಥೆಯ ಅಧ್ಯಕ್ಷ ರವಿ ಮಾತನಾಡಿ, ಮಹನೀಯರು ನಮ್ಮ ನಡುವೆ ಇಲ್ಲದಿದ್ದರೂ ಅವರು ಬಿಟ್ಟುಹೋದ ಆದರ್ಶಗಳು ಹಾಗೂ ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ಸದಾ ಸ್ಮರಿಸಬೇಕು. ಅವರ ಜೀವನಾದರ್ಶಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ನಾಡು-ನುಡಿಗೆ ಸೇವೆ ಸಲ್ಲಿಸಬೇಕು ಎಂದರು.