ಕನ್ನಡಪ್ರಭ ವಾರ್ತೆ ದಾವಣಗೆರೆ
ನಗರದ ಜಿಲ್ಲಾ ಆಡಳಿತ ಭವನದಲ್ಲಿ ಸಂಘಟನೆ ಜಿಲ್ಲಾ ಪದಾಧಿಕಾರಿಗಳು, ಮುಖಂಡರ ನೇತೃತ್ವದಲ್ಲಿ ಅಪರ ಜಿಲ್ಲಾಧಿಕಾರಿ ಶೀಲವಂತರ ಶಿವಕುಮಾರ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಅರ್ಪಿಸಿದ ಆಶಾ ಕಾರ್ಯಕರ್ತೆಯರು ಎಸ್ಐಆರ್ ಪ್ರಕ್ರಿಯೆಯಲ್ಲಿ ಬಿಎಲ್‌ಒಗಳ ಸಹಾಯಕರಾಗಿ ಹೆಚ್ಚುವರಿ ಕಾರ್ಯ ನಿರ್ವಹಿಸುತ್ತಿರುವ ತಮಗೆ ಗೌರವಧನ ನೀಡುವುದೂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಮನವಿ ಮಾಡಿದರು.
ಇದೇ ವೇಳೆ ಮಾತನಾಡಿದ ಸಂಘಟನೆ ಮುಖಂಡರಾ, ಎಸ್ಐಆರ್ ಪ್ರಕ್ರಿಯೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಿಎಲ್ಓಗಳಿಗೆ ಸಹಾಯಕರಾಗಿ ಹೆಚ್ಚುವರಿ ಸಿಬ್ಬಂದಿಯಾಗಿ ಆಶಾ ಕಾರ್ಯಕರ್ತೆಯರನ್ನು ನಿಯೋಜಿಸಿ, ಜಿಲ್ಲೆಯ ಆರೋಗ್ಯಾಧಿಕಾರಿಗಳು, ಹೊನ್ನಾಳಿ ತಾಲೂಕು ಹಾಗೂ ಚನ್ನಗಿರಿ ತಹಸೀಲ್ದಾರರು ಆದೇಶ ಹೊರಡಿಸಿದ್ದಾರೆ. ಈ ಆದೇಶಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವಂತೆ ಹಕ್ಕೊತ್ತಾಯಿಸುತ್ತಿದೆ ಎಂದರು.ಅಧಿಕೃತ ಜ್ಞಾಪನಾ ಪತ್ರದಲ್ಲಿ ಹೆಚ್ಚುವರಿ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುವ ಆಶಾ ಕಾರ್ಯಕರ್ತೆಯರಿಗೆ ನೀಡಲಾಗುವ ಗೌರವಧನದ ಬಗ್ಗೆ ಯಾವುದೇ ಸ್ಪಷ್ಟ ವಿವರಣೆ ಅಥವಾ ಉಲ್ಲೇಖವಾಗಲಿ ಇರುವುದಿಲ್ಲ. ಈಗಾಗಲೇ ಅಲ್ಪ ಗೌರವಧನಕ್ಕೆ ದುಡಿಯುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಈ ಕೆಲಸಕ್ಕೆ 5 ಸಾವಿರ ರು.ಗಳ ಗೌರವಧನ ನೀಡಬೇಕು. ಆಶಾ ಕಾರ್ಯಕರ್ತೆಯರ ಈ ಬೇಡಿಕೆ ಬಗ್ಗೆ ಜಿಲ್ಲಾಡಳಿತ, ರಾಜ್ಯ ಸರ್ಕಾರ ಲಿಖಿತ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.
ಸಂಘಟನೆ ಜಿಲ್ಲಾ ಅಧ್ಯಕ್ಷೆ ಲಲಿತಮ್ಮ, ಕಾರ್ಯದರ್ಶಿ ತಿಪ್ಪೇಸ್ವಾಮಿ ಅಣಬೇರು, ಮುಖಂಡರಾದ ರೀತಾ, ಇಂದಿರಾ, ಲೀಲಾವತಿ, ನೇತ್ರಾವತಿ, ಕೌಸಲ್ಯಾ, ರಾಧಾ, ಗೀತಾ, ಜ್ಯೋತಿ ಇತರರು ಇದ್ದರು.