ಕನ್ನಡಪ್ರಭ ವಾರ್ತೆ ಬೆಂಗಳೂರು:
ಶುಕ್ರವಾರ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಕೆಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ರಾಜ್ಯ ಸರ್ಕಾರದ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ. ಈ ಬಗ್ಗೆ ಕೇಂದ್ರ ಚುನಾವಣಾ ಆಯುಕ್ತರಿಗೆ ಖುದ್ದು ನಾನೇ ದೂರು ನೀಡುತ್ತೇನೆ. ಈ ಎಸ್ಐಆರ್ ಅಕ್ರಮದ ಮೂಲ ಸೂತ್ರಧಾರಿ ಈ ರಾಜ್ಯದ ಮುಖ್ಯಮಂತ್ರಿಯೇ ಆಗಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ಆರೋಪಿಸಿದರು.
ಕೇಂದ್ರ ಚು.ಆಯೋಗ ಮಧ್ಯಪ್ರವೇಶಕ್ಕೆ ಆಗ್ರಹ:ರಾಜ್ಯ ಕಾಂಗ್ರೆಸ್ ಸರ್ಕಾರವು ಅಧಿಕಾರಿಗಳನ್ನು ಗುಲಾಮರಂತೆ ನಡೆಸಿಕೊಳ್ಳುತ್ತಿದೆ. ಅವರನ್ನು ಹೆದರಿಸಿ ಬೆದರಿಸಿ ತನಗೆ ಬೇಕಾದ ಹಾಗೆ ಎಸ್‌ಐಆರ್ ಮಾಡಿಸುತ್ತಿದೆ. ಹೀಗಾಗಿ ಕೇಂದ್ರ ಚುನಾವಣಾ ಆಯೋಗವು ತಕ್ಷಣ ಮಧ್ಯಪ್ರವೇಶಿಸಬೇಕು. ರಾಜ್ಯದಲ್ಲಿ ಈವರೆಗೆ ಆಗಿರುವ ಪರಿಷ್ಕರಣೆ ಕೈಬಿಟ್ಟು ಹೊಸದಾಗಿ ಎಸ್ಐಆರ್ ನಡೆಸಬೇಕು. ರಾಮನಗರ ಮತ್ತು ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ರಾಮನಗರ, ಬೆಂಗಳೂರು ನಗರ ಮಾತ್ರವಲ್ಲದೆ, ಕುಣಿಗಲ್, ಪಾವಗಡ, ಅರಕಲಗೂಡು, ಇಂಡಿ ಮುಂತಾದ ವಿಧಾನಸಭೆ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಎಸ್‌ಐಆರ್ ಆಕ್ರಮಗಳನ್ನು ನಡೆಸುತ್ತಿದೆ. ರಾಜ್ಯದಲ್ಲಿ ಎಸ್ಐಆರ್ ಹಳ್ಳ ಹಿಡಿಯಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮೂಲಸೂತ್ರಧಾರಿ. ಇವರಿಗೆ ಮಾನ-ಮರ್ಯಾದೆ ಇಲ್ಲ. ಇಷ್ಟೆಲ್ಲಾ ಅಕ್ರಮಗಳು ಕಣ್ಣಿಗೆ ಕಾಣುತ್ತಿದ್ದರೂ ಪ್ರಜಾಸೇವಾ ಇಲಾಖೆ ಮಾಡಿದ್ದಾರೆ. ಮತದಾರರ ಪಟ್ಟಿ ತಿರುಚುವುದೇ ಪ್ರಜಾ ಸೇವೆಯಾ ಎಂದು ಕುಮಾರಸ್ವಾಮಿ ತೀಕ್ಷ್ಮವಾಗಿ ಪ್ರಶ್ನಿಸಿದರು.
ರಾಜ್ಯದ ಮತದಾರರ ಪಟ್ಟಿ ಪರಿಷ್ಕರಣೆಯಿಂದ ಸ್ಥಳೀಯ ಅಧಿಕಾರಿಗಳನ್ನು ಹೊರಗಿಟ್ಟು ಹೊರಗಿನ ದಕ್ಷ ಅಧಿಕಾರಿಗಳನ್ನು ನಿಯೋಜಿಸಬೇಕು. ಇಲ್ಲವಾದರೆ, ಕಾಂಗ್ರೆಸ್ ಸರ್ಕಾರ ಮನಸೋ ಇಚ್ಛೆ ಈ ಎಸ್‌ಐಆರ್ ಪ್ರಕ್ರಿಯೆ ದುರ್ಬಳಕೆ ಮಾಡಿಕೊಳ್ಳಲಿದೆ.
ಕರ್ನಾಟಕ ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಸಮಗ್ರತೆ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಬಗ್ಗೆ ವ್ಯಾಪಕ ಆತಂಕ ಹುಟ್ಟುಹಾಕಿದೆ. ತಕ್ಷಣ ಮಧ್ಯಪ್ರವೇಶಿಸಿ ತನಿಖೆ ನಡೆಸುವಂತೆ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದು ಆಗ್ರಹಿಸಿದ್ದಾರೆ.
ರಾಜ್ಯ ಆಡಳಿತ ಯಂತ್ರವು ಎಸ್‌ಐಆರ್ ನಡೆಸುತ್ತಿರುವ ಬಿಎಲ್‌ಒಗಳಿಗೆ ಕ್ಷೇತ್ರ ಪರಿಶೀಲನೆಗೆ ಅಧಿಕಾರ ನೀಡುವ ಬದಲು ಈ ಪ್ರಕ್ರಿಯೆಯನ್ನು ದುರ್ಬಲಗೊಳಿಸುವ ಕಾರ್ಯ ವಿಧಾನ ಅಳವಡಿಸಿಕೊಂಡಿದೆ. ಇದು ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ಸ್ವಾತಂತ್ರ್ಯ ಮತ್ತು ವಿಶ್ವಾಸಾರ್ಹತೆ ಹಾಳು ಮಾಡುತ್ತದೆ. ರಾಜ್ಯ ಸರ್ಕಾರವು ರಾಜಕೀಯ ಲಾಭಕ್ಕಾಗಿ ಎಸ್ಐಆರ್ ಕಾರ್ಯ ವಿಧಾನ ದುರ್ಬಲಗೊಳಿಸಿದೆ. ಮನೆ-ಮನೆ ಭೇಟಿ ಮಾಡಿದ್ದಲ್ಲಿ ಅಕ್ರಮ ವಲಸಿಗರು ಮತದಾರರ ಪಟ್ಟಿ ಸೇರ್ಪಡೆಯಾಗುವ ಅಪಾಯವಿದೆ. ಒಂದು ವೇಳೆ ಅನರ್ಹರು ಸೇರ್ಪಡೆಗೊಂಡರೆ ಮತದಾರರ ಪಟ್ಟಿ ಮತ್ತು ಚುನಾವಣಾ ಪ್ರಕ್ರಿಯೆಯಲ್ಲಿ ಸಾರ್ವಜನಿಕರ ವಿಶ್ವಾಸ ಕುಗ್ಗಿಸುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.ಹೀಗಾಗಿ ಕೇಂದ್ರ ಚುನಾವಣಾ ಆಯೋಗವು ಮತದಾರರ ಪಟ್ಟಿಯ ತಯಾರಿಕೆ ಮತ್ತು ಪರಿಷ್ಕರಣೆಯು ಮುಕ್ತ, ನ್ಯಾಯಯುತ, ಪಾರದರ್ಶಕತೆ ಖಚಿತಪಡಿಸಿಕೊಳ್ಳುವ ಜವಾಬ್ದಾರಿಯಿದೆ. ಈ ನಿಟ್ಟಿನಲ್ಲಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆಯ ಸಂಬಂಧ ಕೇಳಿ ಬಂದಿರುವ ಆರೋಪಗಳ ಬಗ್ಗೆ ತಕ್ಷಣವೇ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರವು ಅಕ್ರಮ ಮತದಾರರ ಪಟ್ಟಿ ತಯಾರಿಸಲು ಹೊರಟಿದೆ. ಮುಖ್ಯಮಂತ್ರಿಗಳ ಮೂಗಿನ ನೇರದಲ್ಲಿ ಅಧಿಕಾರಿಗಳು ಅಕ್ರಮ ಮತದಾರರನ್ನು ಸೇರಿಸುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.ಶುಕ್ರವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಹಲವು ವರ್ಷಗಳಿಂದ ಅಲ್ಪಸಂಖ್ಯಾತ ನಾಯಕರು ಅಕ್ರಮವಾಗಿ ಬಾಂಗ್ಲಾದೇಶಿಯರನ್ನು ರಾಜ್ಯಕ್ಕೆ ಕರೆತಂದಿದ್ದಾರೆ. ಅವರನ್ನು ಕರ್ನಾಟಕದ ವಾಸಿಗಳಾಗಿ ಮಾಡಲು ಮತ್ತು ಮತದಾರರನ್ನಾಗಿಸಲು ಷಡ್ಯಂತ್ರ ಮಾಡಿದ್ದಾರೆ. ಬಿಹಾರ, ಪಶ್ಚಿಮ ಬಂಗಾಳ ಚುನಾವಣೆ ಬಳಿಕ ರಾಜ್ಯಕ್ಕೆ ಬಂದು ವಿವಿಧ ಭಾಗದಲ್ಲಿ ನೆಲೆಸಿರುವ ಅಕ್ರಮ ಬಾಂಗ್ಲಾ ವಲಸಿಗರನ್ನು ಮತಪಟ್ಟಿಗೆ ಸೇರಿಸಿ ಸಕ್ರಮ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಈ ಕುರಿತು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಸಚಿವರು, ರಾಜ್ಯದಲ್ಲಿ ನಡೆಯುತ್ತಿರುವ ಈ ರೀತಿಯ ಎಸ್‌ಐಆರ್ ಪ್ರಕ್ರಿಯೆ ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾಗಿದೆ. ನಿಯಮಗಳನ್ನೆಲ್ಲ ಗಾಳಿಗೆ ತೂರಿ ಮನೆ, ಮಸೀದಿಯಲ್ಲಿ ಕುಳಿತು ಎನ್ಯೂಮರೇಷನ್ ಫಾರ್ಮ್ ಭರ್ತಿ ಮಾಡುತ್ತಿರುವ ಬಗ್ಗೆ, ಅದನ್ನು ವಾಟ್ಸ್‌ಆ್ಯಪ್‌ನಲ್ಲಿ ಹಂಚಿಕೊಳ್ಳುತ್ತಿರುವ ಅಕ್ರಮಗಳ ಬಗ್ಗೆ ರಾಜ್ಯದ ಅನೇಕ ಕಡೆಗಳಿಂದ ಫೋನ್ ಕರೆಗಳೂ ಬರುತ್ತಿವೆ ಎಂದಿದ್ದಾರೆ.
ಕರ್ನಾಟಕದಲ್ಲಿ ಎಸ್‌ಐಆರ್ ಹೆಸರಲ್ಲಿ ಬೃಹತ್ ಹಗರಣವೇ ನಡೆಯುತ್ತಿದೆ. ರಾಜಕೀಯ ಲಾಭಕ್ಕಾಗಿ ಮತದಾರರ ಪಟ್ಟಿಯನ್ನು ತಮಗೆ ಬೇಕಾದಂತೆ ಸಿದ್ಧಪಡಿಸಿಕೊಳ್ಳಲು ರಾಜ್ಯ ಸರ್ಕಾರ ವ್ಯವಸ್ಥಿತ ಸಂಚು ರೂಪಿಸಿದಂತಿದೆ. ಈ ಹಗರಣದ ಹಿಂದೆ ಯಾರ ಹಿತಾಸಕ್ತಿ ಅಡಗಿದೆ ಎಂಬುದನ್ನು ಬಯಲಿಗೆಳೆಯಲು ನಿಷ್ಪಕ್ಷಪಾತ ಮತ್ತು ಸಮಗ್ರ ತನಿಖೆಯಾಗಬೇಕು. ತಪ್ಪಿತಸ್ಥ ಅಧಿಕಾರಿಗಳು ಮತ್ತು ಇದರ ಹಿಂದಿರುವ ರಾಜಕೀಯ ಕೈಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಜೋಶಿ ಒತ್ತಾಯಿಸಿದ್ದಾರೆ.