ಹಾವೇರಿ: ಜಿಲ್ಲೆಯ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯವನ್ನು ನಿಗದಿತ ಅವಧಿಯೊಳಗೆ ಸಮರ್ಪಕವಾಗಿ ಪೂರ್ಣಗೊಳಿಸಿ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮತದಾರರ ಪಟ್ಟಿಯು ಚುನಾವಣಾ ಪ್ರಕ್ರಿಯೆಯ ಮೂಲಾಧಾರವಾಗಿದ್ದು, ಪ್ರತಿಯೊಬ್ಬ ಅರ್ಹ ಮತದಾರರ ಹೆಸರು ಪಟ್ಟಿಯಲ್ಲಿ ಸೇರ್ಪಡೆಯಾಗುವಂತೆ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು, ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಹಾಗೂ ಅನರ್ಹ ಹೆಸರುಗಳು ಉಳಿಯದಂತೆ ಸೂಕ್ತ ಪರಿಶೀಲನೆ ನಡೆಸುವಂತೆ ಸೂಚಿಸಿದರು.
ಬಳಿಕ ಬ್ಯಾಡಗಿ ಮತ್ತು ರಾಣಿಬೆನ್ನೂರು ವಿಧಾನಸಭಾ ಕ್ಷೇತ್ರಗಳ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಮನೆ ಮನೆಗೆ ತೆರಳಿ ಮತದಾರರನ್ನು ಭೇಟಿ ಮಾಡಿದರು. ಈ ವೇಳೆ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿ, ಎನುಮರೇಷನ್ ನಮೂನೆ ಸರಿಯಾಗಿ ಭರ್ತಿ ಮಾಡುವ ವಿಧಾನ, ಅಗತ್ಯ ದಾಖಲೆಗಳು ಹಾಗೂ ಅರ್ಜಿಯನ್ನು ಸಮಯಕ್ಕೆ ಸರಿಯಾಗಿ ಸಲ್ಲಿಸುವ ಮಹತ್ವವನ್ನು ವಿವರಿಸಿದರು.ಮನೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಅವರು, ಮನೆ ಮನೆಗಳಿಗೆ ಬರುವ ಬಿಎಲ್‌ಒಗಳಿಗೆ ಅಗತ್ಯ ಮಾಹಿತಿ ನೀಡಿ ಸಹಕರಿಸಬೇಕು. ಮತದಾರರ ಸಹಕಾರದಿಂದ ಮಾತ್ರ ನಿಖರ ಹಾಗೂ ಸಮಗ್ರ ಮತದಾರರ ಪಟ್ಟಿಯನ್ನು ಸಿದ್ಧಪಡಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮತದಾರರ ನೋಂದಣಾಧಿಕಾರಿ ಚಂದ್ರಪ್ಪ ಸಿ., ಬ್ಯಾಡಗಿ ತಹಸೀಲ್ದಾರ್ ಚಂದ್ರಶೇಖರ ನಾಯ್ಕ, ಮತದಾರರ ನೋಂದಣಾಧಿಕಾರಿ ಪ್ರಶಾಂತ ವರಗಪ್ಪನವರ, ರಾಣಿಬೆನ್ನೂರು ತಹಸೀಲ್ದಾರ್ ಆರ್.ಎಚ್. ಭಗವಾನ್, ಕ್ಷೇತ್ರ ಶಿಕ್ಷಣಾಧಿಕಾರಿ ಶ್ಯಾಮಸುಂದರ ಅಡಿಗ ಇದ್ದರು.