ಕೆರೆ ಸಂರಕ್ಷಣೆಗಾಗಿ ತೆಪ್ಪದಲ್ಲಿ ಕುಳಿತು ದಿನಪೂರ್ತಿ ಉಪವಾಸ

KannadaprabhaNewsNetwork | Published : Oct 3, 2024 1:35 AM

ಸಾರಾಂಶ

ದೊಡ್ಡಬಳ್ಳಾಪುರ: ಇಲ್ಲಿನ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ, ದೊಡ್ಡತುಮಕೂರು ಮತ್ತು ಮಜರಾ ಹೊಸಹಳ್ಳಿ ಗ್ರಾಮ ಪಂಚಾಯ್ತಿ ಕೆರೆ ಹೋರಾಟ ಸಮಿತಿ ನೇತೃತ್ವದಲ್ಲಿ ಗಾಂಧಿ ಜಯಂತಿ ಅಂಗವಾಗಿ ಕೆರೆ ನೀರು ಸಂರಕ್ಷಣೆಗಾಗಿ ಒತ್ತಾಯಿಸಿ ತೆಪ್ಪದಲ್ಲಿ ಕುಳಿತು ದಿನಪೂರ್ತಿ ಉಪವಾಸ ಸತ್ಯಾಗ್ರಹ ನಡೆಸುವ ಮೂಲಕ ವಿನೂತನ ಪ್ರತಿಭಟನೆ ಬುಧವಾರ ನಡೆಯಿತು.

ಹತ್ತಾರು ಪ್ರತಿಭಟನಾಕಾರರು 2 ತೆಪ್ಪಗಳಲ್ಲಿ ಕೆರೆಯಲ್ಲಿ ತೇಲುವ ಮೂಲಕ ಪ್ರತಿಭಟಿಸಿ ಗಮನ ಸೆಳೆದರು.

ಕಳೆದ ಮೂರು ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಹೋರಾಟದ ಹೊರತಾಗಿಯೂ ಸಂವಿಧಾನ ವಿರುದ್ಧವಾಗಿ ಕೆರೆಗಳಿಗೆ ಹರಿಯುತ್ತಿರುವ ಕೊಳಚೆ ನೀರು ನಿಂತಿಲ್ಲ. ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ದೊಡ್ಡಬಳ್ಳಾಪುರ ತಾಲೂಕಿನ ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ದೊಡ್ಡಬಳ್ಳಾಪುರಕ್ಕೆ ವರ್ಗಾಯಿಸುವಂತೆ ಅನೇಕ ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನೆಕಾರರು ತಿಳಿಸಿದರು.

ದೊಡ್ಡತುಮಕೂರು ಮತ್ತು ಮಜರಾಹೊಸಹಳ್ಳಿ ಕೆರೆಗಳ ನೀರು ಸಂಪೂರ್ಣ ಕಲುಷಿತಗೊಂಡಿದ್ದು. ಇದಕ್ಕೆ ಪರಿಹಾರವಾಗಿ ದೊಡ್ಡಬಳ್ಳಾಪುರ ನಗರಸಭೆ ಮತ್ತು ಬಾಶೆಟ್ಟಿಹಳ್ಳಿ ಪಪಂ ಕೊಳಚೆ ನೀರನ್ನು ಮೂರನೇ ಹಂತದ ಶುದ್ದೀಕರಣ ಮಾಡಬೇಕು. ದೊಡ್ಡ ತುಮಕೂರು ಮತ್ತು ಮಜರಾಹೊಸಹಳ್ಳಿ ಗ್ರಾಪಂ ಎಲ್ಲ ಮನೆಗಳಿಗೂ ಸರ್ಕಾರವು ಮಳೆ ನೀರು ಸಂಗ್ರಹಣ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಕಾರ್ಖಾನೆಗಳು ಶುದ್ಧಿಕರಿಸದೆ ರಾಸಾಯನಿಕ ನೀರನ್ನು ರಾಜಕಾಲುವೆಗಳಿಗೆ ಬಿಟ್ಟಿರುವ ಬಗ್ಗೆ ಅನೇಕ ಬಾರಿ ದೂರು ನೀಡಿದರೂ ಏನು ಪ್ರಯೋಜನವಾಗಿಲ್ಲ. ಆದ್ದರಿಂದ, ಈ ಕಾರ್ಖಾನೆಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಸಮಿತಿಯು ಆಗ್ರಹಿಸುತ್ತಿದೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ, ದೊಡ್ಡತುಮಕೂರು ಮತ್ತು ಮಜರಾ ಹೊಸಹಳ್ಳಿ ಗ್ರಾಮ ಪಂಚಾಯ್ತಿ ಕೆರೆ ಹೋರಾಟ ಸಮಿತಿ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

Share this article