ಸೆ. 22 ರಿಂದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ

KannadaprabhaNewsNetwork |  
Published : Aug 30, 2025, 01:00 AM IST
ಸಿಕೆಬಿ-3 ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ನಡೆದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಯುವ  ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಕುರಿತ ಸಮೀಕ್ಷಾ ಕಾರ್ಯ ಸಂಬಂಧ ಮಾಸ್ಟರ್ ಟ್ರೈನರ್ಸ್, ಮೇಲ್ವಿಚಾರಕರು ಹಾಗೂ ಗಣತಿದಾರರನ್ನು ನೇಮಿಸಲು ಹಾಗೂ ಇನ್ನಿತರೆ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವ ಪೂರ್ವ ಸಿದ್ದತಾ ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಮಾತನಾಡಿದರು | Kannada Prabha

ಸಾರಾಂಶ

ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಯುವ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಕುರಿತ ಸಮೀಕ್ಷಾ ಕಾರ್ಯವನ್ನು ಕೈಗೊಳ್ಳುತ್ತಿರುವ ಸಂಬಂಧ ಮಾಸ್ಟರ್ ಟ್ರೈನರ್ಸ್, ಮೇಲ್ವಿಚಾರಕರು ಹಾಗೂ ಗಣತಿದಾರರನ್ನು ನೇಮಿಸಲು ಹಾಗೂ ಇನ್ನಿತರೆ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವ ಪೂರ್ವ ಸಿದ್ದತಾ ಸಭೆ ನಡೆಯಿತು.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಸೆಪ್ಟೆಂಬರ್ 22 ರಿಂದ ಜಿಲ್ಲೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಿದ್ಧತೆಗಳ ಬಗ್ಗೆ ಸಮೀಕ್ಷಾ ಕಾರ್ಯವನ್ನು ಸರ್ಕಾರದ ನಿರ್ದೇಶನದಂತೆ ಕೈಗೊಳ್ಳಲು ಅಗತ್ಯ ಪೂರ್ವ ಸಿದ್ಧತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಸೂಚಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಯುವ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಕುರಿತ ಸಮೀಕ್ಷಾ ಕಾರ್ಯವನ್ನು ಕೈಗೊಳ್ಳುತ್ತಿರುವ ಸಂಬಂಧ ಮಾಸ್ಟರ್ ಟ್ರೈನರ್ಸ್, ಮೇಲ್ವಿಚಾರಕರು ಹಾಗೂ ಗಣತಿದಾರರನ್ನು ನೇಮಿಸಲು ಹಾಗೂ ಇನ್ನಿತರೆ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಜ್ಯಾದ್ಯಂತ ಸಮೀಕ್ಷೆ

ಸಮೀಕ್ಷಾ ಕಾರ್ಯವು ರಾಜ್ಯಾದ್ಯಂತ ಏಕಕಾಲಕ್ಕೆ ನಡೆಯಲಿದೆ. ಅದರಂತೆ ಜಿಲ್ಲೆಯಲ್ಲಿಯೂ ಸಹ ನಡೆಯಬೇಕು. ಪ್ರತಿ 150 ಮನೆಗಳಿಗೆ ಒಬ್ಬ ಗಣಿತಿದಾರರನ್ನು ಹಾಗೂ ಪ್ರತಿ 20 ಗಣತಿದಾರರಿಗೆ ಒಬ್ಬರು ಮೇಲ್ವಿಚಾರಕರನ್ನು ನೇಮಿಸಬೇಕಾಗಿದ್ದು, ಈ ಕಾರ್ಯಕ್ಕೆ ಶಿಕ್ಷಕರು ಹಾಗೂ ಇತರೆ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಪಟ್ಟಿಯನ್ನು ಸಿದ್ಧಪಡಿಸಬೇಕು ಎಂದರು.

ಈ ಗಣತಿದಾರರಿಗೆ ಹಾಗೂ ಮೇಲ್ವಿಚಾರಕರಿಗೆ ತರಬೇತಿಯನ್ನು ನೀಡಲು ಸಕಲ ಸಿದ್ಧತೆ ಮಾಡಿಕೊಳ್ಳಬೇಕು. ತರಬೇತಿ ನೀಡುವ ಮಾಸ್ಟರ್ ಟ್ರೈನರ್ ಗಳನ್ನು ಸರ್ಕಾರ ನಿರ್ದೇಶನದಂತೆ ಆಯ್ಕೆ ಮಾಡಿಕೊಳ್ಳಬೇಕು. ಬೆಸ್ಕಾಂ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಜಿಲ್ಲೆಯ ಎಲ್ಲ ಕುಟುಂಬಗಳ ಮನೆಗಳಿಗೆ ಶೈಕ್ಷಣಿಕ ಸಮೀಕ್ಷಾ ಸ್ಟಿಕ್ಕರ್‌ ಅಂಟಿಸುತ್ತಿರುವ ಕಾರ್ಯದ ಬಗ್ಗೆ ಕಾಲೋಚಿತವಾಗಿ ಖಾತರಿಪಡಿಸಿಕೊಳ್ಳಬೇಕು. ಜಿಲ್ಲೆಯ ಸುಮಾರು 3,70,000 ಕುಟುಂಬಗಳ ಮನೆಗಳಿಗೆ ಸ್ಟಿಕ್ಕರ್ ಅಂಟಿಸುವ ಕಾರ್ಯವನ್ನು ಸೆಪ್ಟೆಂಬರ್ 5 ರೊಳಗೆ ಬೆಸ್ಕಾಂ ನವರು ಮುಗಿಸಬೇಕು ಎಂದರು.

ಸ್ಟಿಕ್ಕರ್ ನಾಶಪಡಿಸಬೇಡಿ

ಈ ಸ್ಟಿಕ್ಕರ್ ಗಳನ್ನು ಯಾವುದೇ ಸಾರ್ವಜನಿಕರು ತೆಗೆದು ಹಾಕುವುದು, ಮುಚ್ಚುವುದು ಅಥವಾ ನಾಶಪಡಿಸುವುದು ಮಾಡಬಾರದು. ಗಣತಿದಾರರು ಕೇಳುವ ಮಾಹಿತಿಯನ್ನು ನೀಡುವ ಮೂಲಕ ಜಿಲ್ಲಾಡಳಿತದ ಈ ಕಾರ್ಯ ಕ್ಕೆ ಕೈಜೋಡಿಸಬೇಕು. ತಾಲೂಕು ಮಟ್ಟದಲ್ಲಿ ನಗರ ವ್ಯಾಪ್ತಿಗೆ ತಹಸೀಲ್ದಾರರು ಹಾಗೂ ಗ್ರಾಮೀಣ ಭಾಗದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಬೇಕು. ಒಟ್ಟಾರೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಿಂದ ಯಾವುದೇ ಕುಟುಂಬ, ಯಾವುದೇ ವ್ಯಕ್ತಿ ಜಿಲ್ಲೆಯಲ್ಲಿ ಕೈಬಿಟ್ಟು ಹೋಗದಂತೆ ನಿಗಾವಹಿಸಬೇಕು. ಆ ನಿಟ್ಟಿನಲ್ಲಿ ಸಕಲ ಪೂರ್ವ ಸಿದ್ಧತೆಗಳನ್ನು ಈಗಿನಿಂದಲೆ ಕೈಗೊಳ್ಳಲು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ಜಿಲ್ಲಾಧಿಕಾರಿಗಳು ನೀಡಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಅತಿಕ್ ಪಾಷಾ, ಹಿಂದುಳಿದ ವರ್ಗಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮುನಿರತ್ನಮ್ಮ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ್ , ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ