ಹಾವೇರಿ: ಸಮಾಜ ಸೇವೆಯೇ ರೆಡ್‌ಕ್ರಾಸ್ ಸಂಸ್ಥೆಯ ಧ್ಯೇಯವಾಗಿದ್ದು, ಇದು ಅಂತಾರಾಷ್ಟ್ರೀಯ ಮಾನವೀಯ ಸೇವಾ ಸಂಸ್ಥೆಯಾಗಿದೆ ಎಂದು ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಚೇರಮನ್ ಸಂಜೀವಕುಮಾರ ನೀರಲಗಿ ತಿಳಿಸಿದರು.ಜಿಲ್ಲಾಡಳಿತದ ಸಭಾಭವನದಲ್ಲಿ ಗುರುವಾರ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಜಿಲ್ಲಾ ಶಾಖೆ, ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕ ಹಾಗೂ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಸಹಯೋಗದಲ್ಲಿ ವಿಶ್ವ ರೆಡ್‌ಕ್ರಾಸ್ ದಿನಾಚರಣೆ ಅಂಗವಾಗಿ ಪ್ರಥಮ ಚಿಕಿತ್ಸಾ ಪೆಟ್ಟಿಗೆ, ಗಾಲಿ ಕುರ್ಚಿ ಹಾಗೂ ಶ್ರವಣೋಪಕರಣಗಳ ವಿತರಣೆ ಹಾಗೂ ಸ್ವಯಂಪ್ರೇರಿತ ರಕ್ತದಾನ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಭಾರತ ಸೇರಿದಂತೆ ಪ್ರಪಂಚದ 110 ದೇಶಗಳಲ್ಲಿ ರೆಡ್‌ಕ್ರಾಸ್ ಸಂಸ್ಥೆ ಕಾರ್ಯನಿರ್ವಹಿಸುತ್ತಿದ್ದು, 1.80 ಕೋಟಿಗೂ ಅಧಿಕ ಸದಸ್ಯರು ನೋಂದಾಯಿಸಿಕೊಂಡಿದ್ದಾರೆ. ಭಾರತದಲ್ಲಿ 1920ರಲ್ಲಿ ಹಾಗೂ ಕರ್ನಾಟಕದಲ್ಲಿ 1921ರಿಂದ ಈ ಸಂಸ್ಥೆ ಅಸ್ತಿತ್ವದಲ್ಲಿ ಬಂದಿದೆ. ಇದು ಮಾನವೀಯ ನೆಲೆಗಟ್ಟಿನ ಸಂಸ್ಥೆಯಾಗಿದೆ. ಜಿಲ್ಲೆಯಲ್ಲಿ ರೆಡ್ ಕ್ರಾಸ್ ಸಂಸ್ಥೆ ಅತ್ಯಂತ ಕ್ರಿಯಾಶೀಲವಾಗಿ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡಿದೆ. ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಕಟ್ಟಡಕ್ಕೆ ಮಾಜಿ ಸಂಸದರು, ಹಾಲಿ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಈ ಮೊದಲಿನ ಜಿಲ್ಲಾಧಿಕಾರಿಗಳು ಸೇರಿದಂತೆ ಅನೇಕರು ಆರ್ಥಿಕ ಸಹಾಯ ಮಾಡಿದ್ದು, ಈಗಿನ ಜಿಲ್ಲಾಧಿಕಾರಿಗಳು ಸಹ ₹25 ಲಕ್ಷ ಅನುದಾನ ನೀಡಿದ್ದಾರೆ. ಬರುವ ದಿನಗಳಲ್ಲಿ ಮತ್ತೆ ₹25 ಲಕ್ಷ ಅನುದಾನ ನೀಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಹಾಗೂ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಅಧ್ಯಕ್ಷ ಡಾ. ವಿಜಯಮಹಾಂತೇಶ ದಾನಮ್ಮನವರ ಮಾತನಾಡಿ, ರೆಡ್‌ಕ್ರಾಸ್ ಸಂಸ್ಥೆಯು ಯುದ್ಧ ಸಮಯದಲ್ಲಿ ಗಾಯಗೊಂಡವರಿಗೆ, ನೈಸರ್ಗಿಕ ಪ್ರಕೃತಿ ವಿಕೋಪಗಳು ಸಂಭವಿಸಿದಾಗ ಪರಿಹಾರ ಕಾರ್ಯದಲ್ಲಿ ಹಾಗೂ ಸಾರ್ವಜನಿಕರಿಗೆ ಚಿಕಿತ್ಸೆ ಮಾಡುವ ಸೇವಾ ಸಂಸ್ಥೆಯಾಗಿದೆ. ಆರೋಗ್ಯದ ಬಗ್ಗೆ ಅರಿವು ಮತ್ತು ಶಿಕ್ಷಣ, ರಕ್ತನಿಧಿಗಳು, ಅಂಗವಿಕಲರಿಗೆ ಸಾಧನ- ಸಲಕರಣೆ ವಿತರಣೆ, ಯುದ್ಧ ಮತ್ತು ಪ್ರಕೃತಿ ವಿಕೋಪಗಳಿಂದಾಗಿ ಚದುರಿಹೋಗಿರುವ ಕುಟುಂಬಗಳ ಸದಸ್ಯರನ್ನು ಮತ್ತೆ ಒಂದುಗೂಡಿಸುವುದು ಸೇರಿದಂತೆ ಅನೇಕ ಸಾಮಾಜಿಕ ಕಳಕಳಿಯ ಕಾರ್ಯವನ್ನು ಮಾಡುತ್ತಿದೆ ಎಂದರು.ಇದೇ ಸಂದರ್ಭದಲ್ಲಿ ವಿವಿಧ ಶಾಲಾ- ಕಾಲೇಜುಗಳ ಮುಖ್ಯಸ್ಥರಿಗೆ ಪ್ರಥಮ ಚಿಕಿತ್ಸಾ ಪೆಟ್ಟಿಗೆ, ಅಂಗವಿಕಲರಿಗೆ ಗಾಲಿ ಕುರ್ಚಿ ಹಾಗೂ ಶ್ರವಣೋಪಕರಣಗಳ ವಿತರಣೆ ಮಾಡಲಾಯಿತು.
ರೆಡ್‌ಕ್ರಾಸ್ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರದಲ್ಲಿ ವಿವಿಧ- ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ನೌಕರರು ಸ್ವಯಂಪ್ರೇರಣೆಯಿಂದ ರಕ್ತದಾನ ಮಾಡಿದರು. ರಕ್ತದಾನಿಗಳಿಗೆ ಪ್ರಮಾಣಪತ್ರ ವಿತರಣೆ ಮಾಡಲಾಯಿತು. ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಪದಾಧಿಕಾರಿ ಹನುಮಂತಗೌಡ ಗೊಲ್ಲರ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಉಪಾಧ್ಯಕ್ಷ ರುಚಿ ಬಿಂದಲ್, ಜಿಲ್ಲಾ ವಿಕಲಚೇತನ ಕಲ್ಯಾಣಾಧಿಕಾರಿ ಆಶು ನದಾಫ್, ಜಿಲ್ಲಾ ಆಸ್ಪತ್ರೆ ಶಸ್ತ್ರಚಿಕಿತ್ಸ ಡಾ. ಪಿ.ಆರ್. ಹಾವನೂರ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಲ್ಲೇಶ ಕರಿಗಾರ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ರಾಜ್ಯ ಸಮಿತಿ ಸದಸ್ಯ ರವಿ ಮೆಣಸಿನಕಾಯಿ, ಸಂಸ್ಥೆ ಜಿಲ್ಲಾ ಶಾಖೆ ಗೌರವ ಕಾರ್ಯದರ್ಶಿ ಡಾ. ನಿಲೇಶ ಎಂ.ಎನ್., ಖಜಾಂಚಿ ಪ್ರಭು ಹಿಟ್ನಳ್ಳಿ, ಸದಸ್ಯರಾದ ಉಡಚಪ್ಪ ಮಾಳಗಿ, ರವಿ ಹಿಂಚಿಗೇರಿ ಹಾಗೂ ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ. ಬಸವರಾಜ ತಳವಾರ, ಡಾ. ಅಂಕಿತ ಆನಂದ ಹಾಗೂ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಪದಾಧಿಕಾರಿಗಳು ಇದ್ದರು.ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಗೌರವ ಸಹ ಕಾರ್ಯದರ್ಶಿ ನಿಂಗಪ್ಪ ಆರೇರ ಸ್ವಾಗತಿಸಿದರು. ಸುಧಾಕರ ದೈವಜ್ಞ ನಿರೂಪಿಸಿ, ವಂದಿಸಿದರು.