ಜಿಲ್ಲೆಯ ಮಹಾನಗರ ಪಾಲಿಕೆ ಹಾಗೂ ವಿವಿಧ ಪುರಸಭೆ ವ್ಯಾಪ್ತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರು ಮತ್ತು ಒಳಚರಂಡಿ ಕಾರ್ಮಿಕರ ಜ್ವಲಂತ ಸಮಸ್ಯೆಗಳನ್ನು ಸರ್ಕಾರದ ನಿಯಮಾವಳಿಗಳ ಚೌಕಟ್ಟಿನಲ್ಲಿ ಶೀಘ್ರವಾಗಿ ಬಗೆಹರಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ತಿಳಿಸಿದ್ದಾರೆ.
- ಜಿಲ್ಲಾಧಿಕಾರಿ ಭರವಸೆ । ಮ್ಯಾನ್ಯುಯಲ್ ಸ್ಕ್ಯಾವೆಂಜರ್ ನೇಮಕಾತಿ ನಿಷೇಧ- ಪುನರ್ ವಸತಿ ಕಾಯ್ದೆ ಅನುಷ್ಠಾನ ಸಮಿತಿ ಸಭೆ
- - -
ಕನ್ನಡಪ್ರಭ ವಾರ್ತೆ ದಾವಣಗೆರೆ ಜಿಲ್ಲೆಯ ಮಹಾನಗರ ಪಾಲಿಕೆ ಹಾಗೂ ವಿವಿಧ ಪುರಸಭೆ ವ್ಯಾಪ್ತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರು ಮತ್ತು ಒಳಚರಂಡಿ ಕಾರ್ಮಿಕರ ಜ್ವಲಂತ ಸಮಸ್ಯೆಗಳನ್ನು ಸರ್ಕಾರದ ನಿಯಮಾವಳಿಗಳ ಚೌಕಟ್ಟಿನಲ್ಲಿ ಶೀಘ್ರವಾಗಿ ಬಗೆಹರಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ತಿಳಿಸಿದರು.
ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ನೇಮಕಾತಿ ನಿಷೇಧ ಮತ್ತು ಪುನರ್ ವಸತಿ ಕಾಯ್ದೆ ಅನುಷ್ಠಾನ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮೀಸಲಾತಿ ರೋಸ್ಟರ್ ಬಿಂದು ಪಾಲನೆ:
ಸದ್ಯ ಜಾರಿಯಲ್ಲಿರುವ ಟೆಂಡರ್/ಗುತ್ತಿಗೆ ಪದ್ಧತಿಯನ್ನು ಸ್ಥಗಿತಗೊಳಿಸಿ, ಕಾರ್ಮಿಕರಿಗೆ ಕಾಯಂ ಉದ್ಯೋಗಾವಕಾಶ ಕಲ್ಪಿಸಬೇಕೆಂಬ ಕಾರ್ಮಿಕರ ಬೇಡಿಕೆಯನ್ನು ಕಾನೂನಾತ್ಮಕವಾಗಿ ಪರಿಶೀಲಿಸಲಾಗುವುದು. ಎಪಿಎಂಸಿ ಆವರಣದಲ್ಲಿ ದೀರ್ಘ ಕಾಲದಿಂದ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಕಾರ್ಮಿಕರನ್ನೂ ಈ ಪ್ರಕ್ರಿಯೆಯಲ್ಲಿ ಪರಿಗಣಿಸಲು ಸರ್ಕಾರದ ಆದೇಶ ಹಾಗೂ ನಿಯಮಾವಳಿಗಳ ನೇರ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳಲಾಗುವುದು. ಈ ಪ್ರಕ್ರಿಯೆಯಲ್ಲಿ ಮೀಸಲಾತಿ ರೋಸ್ಟರ್ ಬಿಂದುಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು ಹಾಗೂ ಈ ಹಿಂದೆ ಹೊರಡಿಸಲಾಗಿದ್ದ ಅಧಿಸೂಚನೆಗಳನ್ನು ಪರಿಷ್ಕರಿಸಿ, ಹೊಸದಾಗಿ ಪ್ರಕ್ರಿಯೆ ಆರಂಭಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
₹10 ಲಕ್ಷ ಬಜೆಟ್ ಸಾಲಲ್ಲ:
ಪೌರಕಾರ್ಮಿಕರ ಮತ್ತು ಸ್ವಚ್ಛತಾ ಕಾರ್ಮಿಕರ ಮಕ್ಕಳಿಗೆ ಸಿಗಬೇಕಾದ ಶೈಕ್ಷಣಿಕ ವಿದ್ಯಾರ್ಥಿವೇತನ ಮತ್ತು ಇತರ ಸೌಲಭ್ಯಗಳು ವಿಳಂಬವಿಲ್ಲದೇ ತಲುಪುವಂತೆ ನೋಡಿಕೊಳ್ಳಲಾಗುವುದು. ಡಿಪ್ಲೊಮಾ, ಮೆಡಿಕಲ್ ಮತ್ತು ಎಂಜಿನಿಯರಿಂಗ್ ಓದುತ್ತಿರುವ ಪೌರಕಾರ್ಮಿಕರ ಮಕ್ಕಳಿಗೆ ಲ್ಯಾಪ್‌ಟಾಪ್ ವಿತರಿಸುವ ಯೋಜನೆಯಡಿ ಪ್ರಸ್ತುತ ಇರುವ ₹10 ಲಕ್ಷಗಳ ಬಜೆಟ್ ಸಾಲುವುದಿಲ್ಲ. ಫಲಾನುಭವಿಗಳ ಸಂಖ್ಯೆ ಹೆಚ್ಚಿರುವುದರಿಂದ ಬಜೆಟ್ ಮೊತ್ತವನ್ನು ಇನ್ನಷ್ಟು ಹೆಚ್ಚಿಸಬೇಕು ಎಂದು ಸದಸ್ಯರು ಕೋರಿದರು.
ಮಹಾನಗರ ಪಾಲಿಕೆ ಆಯುಕ್ತರು ಅನುದಾನ ಲಭ್ಯತೆಯನ್ನು ಪರಿಶೀಲಿಸಿಕೊಂಡು ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವ ಬಗ್ಗೆ ಕ್ರಮವಹಿಸುವಂತೆ ಸೂಚನೆ ನೀಡಿದರು. ಕಳೆದ 3 ವರ್ಷಗಳಿಂದ (2023 ರಿಂದ 2025ರವರೆಗೆ) ಸಫಾಯಿ ಕರ್ಮಚಾರಿಗಳು, ಮ್ಯಾನುಯಲ್ ಸ್ಕ್ಯಾವೆಂಜರ್ಸ್ ಹಾಗೂ ಎಸ್.ಸಿ/ ಎಸ್.ಟಿ ಸಮುದಾಯದ ಅಭಿವೃದ್ಧಿಗಾಗಿ ಮಂಜೂರಾದ ಸಾಲಗಳನ್ನು ನೀಡಲು ನಿರಾಕರಿಸುತ್ತಿರುವ ಕೆಲವು ಬ್ಯಾಂಕ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಮಿತಿ ಸದಸ್ಯರು ಸಭೆಯ ಗಮನಕ್ಕೆ ತಂದರು. ಬ್ಯಾಂಕ್‌ಗಳು ಅನಗತ್ಯವಾಗಿ ಸಾಲ ನಿರಾಕರಿಸಿದರೆ ಡಿ.ಎಲ್.ಬಿ.ಸಿ ಸಭೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಮ್ಯಾನ್ಯುಯಲ್ ಸ್ಕ್ಯಾವೆಂಜರ್ ನೇಮಕಾತಿ ನಿಷೇಧ ಮತ್ತು ಪುನರ್ ವಸತಿ ಕಾಯ್ದೆ ಅನುಷ್ಠಾನ ಸಮಿತಿ ಸದಸ್ಯರು, ಜಿಪಂ ಸಿಇಒ ಗಿತ್ತೆ ಮಾಧವ ವಿಠ್ಠಲರಾವ್, ಎಎಸ್ಪಿ ಪರಮೇಶ್ವರ್ ಹೆಗಡೆ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಸಿದ್ದಲಿಂಗೇಶ, ಮಹಾನಗರ ಪಾಲಿಕೆ ಆಯುಕ್ತ ಡಾ.ಮಹಾಂತೇಶ, ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
- - -
-10ಕೆಡಿವಿಜಿ46:
ದಾವಣಗೆರೆಯಲ್ಲಿ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಅಧ್ಯಕ್ಷತೆಯಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ನೇಮಕಾತಿ ನಿಷೇಧ ಮತ್ತು ಪುನರ್ ವಸತಿ ಕಾಯ್ದೆ ಅನುಷ್ಠಾನ ಸಮಿತಿ ಸಭೆ ನಡೆಯಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.