ಕನ್ನಡಪ್ರಭ ವಾರ್ತೆ ಮಂಡ್ಯ
ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಮಂಡ್ಯ ತಾಲೂಕು ದುದ್ದ-1 ಹೋಬಳಿಯ ಜಿ.ಮಲ್ಲಿಗೆರೆ ಗ್ರಾಪಂ ವ್ಯಾಪ್ತಿಯ ಚಿಕ್ಕಗಂಗವಾಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಪ್ರಜಾಸೇವಾ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿ ತಹಸೀಲ್ದಾರ್ ವಿಶ್ವನಾಥ್ ಮಾತನಾಡಿದರು.
ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಮೊದಲೆಲ್ಲಾ ಪೌತಿ ಖಾತೆ ಮಾಡಿಸುವುದು ಕಷ್ಟಸಾಧ್ಯವಾಗಿತ್ತು. ಈಗ ಅದನ್ನು ಆಂದೋಲನ ರೂಪದಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಕಂದಾಯ ಅಧಿಕಾರಿ ಮತ್ತು ಗ್ರಾಮ ಆಡಳಿತಾಧಿಕಾರಿಗೆ ಪೌತಿ ಖಾತೆ ಮಾಡಲು ಗುರಿ ನಿಗದಿಪಡಿಸಿರುವುದಾಗಿ ತಿಳಿಸಿದರು.ಜಾತಿ, ಆದಾಯ, ಮರಣ ಪ್ರಮಾಣಪತ್ರ ಸೇರಿದಂತೆ ವಿವಿಧ ಪ್ರಮಾಣಪತ್ರ ಪಡೆಯಲು ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡುವ ಅಗತ್ಯವಿಲ್ಲ. ಅಗತ್ಯ ದಾಖಲೆಗಳೊಂದಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ಕಂದಾಯ ನಿರೀಕ್ಷಕರು ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ದಾಖಲಿಸಿ ಮುಂದಿನ ಪ್ರಕ್ರಿಯೆ ಕೈಗೊಳ್ಳಲಿದ್ದಾರೆ ಎಂದರು.
ಈ ಹಿಂದೆ ಸರ್ವೇ ಕಾರ್ಯದಲ್ಲಿ ಹಲವು ತಾಂತ್ರಿಕ ಸಮಸ್ಯೆಗಳು ಎದುರಾಗುತ್ತಿದ್ದವು. ಇದೀಗ ಮಂಡ್ಯ ತಾಲೂಕಿಗೆ ಹೊಸ ಎಡಿಎಲ್ಆರ್ ಅಧಿಕಾರಿಗಳು ನೇಮಕಗೊಂಡಿದ್ದು, ಬಾಕಿ ಇರುವ ಸರ್ವೇ ಕಾರ್ಯಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ. ಅಧಿಕಾರಿಗಳು ಕೂಡ ಇದಕ್ಕೆ ಒಪ್ಪಿಗೆ ನೀಡಿದ್ದಾರೆ. ಸಾರ್ವಜನಿಕರು ಈ ಪ್ರಕ್ರಿಯೆಗೆ ಅಗತ್ಯ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಮುಕ್ತವಾಗಿ ಅಧಿಕಾರಿಗಳ ಗಮನಕ್ಕೆ ತರಬೇಕು. ಸಮಸ್ಯೆಗಳನ್ನು ಪರಿಹರಿಸಲು ಕಂದಾಯ ಇಲಾಖೆ ಬದ್ಧವಾಗಿದ್ದು, ಪ್ರಜಾಸೇವಾ ಆಂದೋಲನದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಜಿ.ಮಲ್ಲೀಗೆರೆಯಲ್ಲಿ ನಡೆದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಸಿಟ್ಟಿಗೆದ್ದ ಘಟನೆ ಶನಿವಾರ ನಡೆಯಿತು.
ನಾವು ಜಮೀನು ದುರಸ್ತುಗೆ ಅರ್ಜಿ ಹಾಕಿ ಎರಡು ವರ್ಷಗಳಾಗಿದೆ. ಈವರೆಗೆ ಒಬ್ಬನೇ ಒಬ್ಬ ಅಧಿಕಾರಿಯೂ ಅದಕ್ಕೆ ಸ್ಪಂದಿಸಿಲ್ಲ. ನೂರಾರು ಅರ್ಜಿಗಳು ಬಾಕಿ ಉಳಿದಿವೆ. ಸರ್ವೇ ಕಾರ್ಯವೂ ಸಮರ್ಪಕವಾಗಿ ನಡೆಯುತ್ತಿಲ್ಲ. ಲಂಚ ಕೊಟ್ಟರಷ್ಟೇ ಕೆಲಸ ಮಾಡಿಕೊಡುವರು. ಇಲ್ಲದಿದ್ದರೆ ಕಡತಗಳನ್ನು ಮುಟ್ಟಿಯೂ ನೋಡುವುದಿಲ್ಲ. ಇದರ ನಡುವೆ ನೀಡು ಉಚಿತವಾಗಿ ಜಮೀನು ದುರಸ್ತು ಮಾಡಿಕೊಡುವುದಾಗಿ ಸುಳ್ಳು ಹೇಳುವುದೇಕೆ ಎಂದು ತಹಸೀಲ್ದಾರ್ ಅವರನ್ನು ಪ್ರಶ್ನಿಸಿದರು.
ಮಲ್ಲೀಗೆರೆಯಲ್ಲಿ ಶನಿವಾರ ನಡೆದ ಪ್ರಜಾಸೇವಾ ಆಂದೋಲನ ಕೇವಲ ಮೂರು ಗಂಟೆಯಲ್ಲಿ ಮುಕ್ತಾಯಗೊಂಡಿತು. ಬೆಳಗ್ಗೆ10.30ಕ್ಕೆ ಆಂದೋಲನ ಆರಂಭಗೊಳ್ಳಬೇಕಿತ್ತಾದರೂ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರಿಗಾಗಿ ಮಧ್ಯಾಹ್ನ 12 ಗಂಟೆಯವರೆಗೂ ಮುಂದೂಡಲಾಯಿತು. ಆದರೂ ಶಾಸಕರು ಬರಲೇ ಇಲ್ಲ. ಶಾಸಕರಿಗೆ ಫೋನ್ ಕರೆ ಮಾಡಿದಾಗ ಅಧಿಕಾರಿಗಳಿಗೆ ಪ್ರಜಾಸೇವೆ ಆಂದೋಲನ ಆರಂಭಿಸುವಂತೆ ಸೂಚಿಸಿದರು. ಅದರಂತೆ ಅಧಿಕಾರಿಗಳು ಚಾಲನೆ ನೀಡಿದರು. ತಹಸೀಲ್ದಾರ್ ಎಚ್.ವಿಶ್ವನಾಥ್ ಮಾತನಾಡುವಾಗಲೇ ಜನರು ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸದಿರುವ ಬಗ್ಗೆ ಧ್ವನಿ ಎತ್ತಿದ್ದರು. ಇದರ ನಡುವೆಯೇ ವಿಶ್ವನಾಥ್ ಭಾಷಣ ಮುಗಿಸಿ ಇಒ ಲೋಕೇಶ್ ಮಾತನಾಡುವುದಕ್ಕೆ ಅವಕಾಶ ಮಾಡಿಕೊಟ್ಟರು. ಜನರ ಗದ್ದಲ ಹೆಚ್ಚಾದಾಗ ಲೋಕೇಶ್ ಮಾತನಾಡುವುದಕ್ಕೆ ಸಾಧ್ಯವಾಗಲೇ ಇಲ್ಲ. ಕೊನೆಗೆ ಜನರಿಂದ ಅರ್ಜಿ ಸ್ವೀಕರಿಸುವುದಕ್ಕೆ ಅಧಿಕಾರಿಗಳು ಮುಂದಾದರು. ಮೂರು ಗಂಟೆಯ ವೇಳೆಗೆ ಅಧಿಕಾರಿಗಳು ಒಬ್ಬೊಬ್ಬರಾಗಿ ಜಾಗ ಖಾಲಿ ಮಾಡಲು ಆರಂಭಿಸಿದರು.