ಕನ್ನಡಪ್ರಭ ವಾರ್ತೆ, ಚಾಮರಾಜನಗರ
ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬರುವ ಗ್ರಾಮಗಳಲ್ಲಿ ಸಂಬಂಧಪಟ್ಟ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿ ಆದ್ಯತೆ ಮೇರೆಗೆ ಕುಡಿವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿಗಳು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆಯ ಆಯುಕ್ತ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ವಿ. ವೆಂಕಟೇಶ್ ಸೂಚಿಸಿದರು.ನಗರದ ಜಿಲ್ಲಾ ಪಂಚಾಯಿತಿ ಕೆಡಿಪಿ ಸಭಾಂಗಣದಲ್ಲಿ ಸಮಾವೇಶಗೊಂಡಿದ್ದ ಅಧಿಕಾರಿಗಳೊಂದಿಗೆ ವೀಡಿಯೋ ಸಂವಾದದಲ್ಲಿ ಪ್ರಕೃತಿ ವಿಕೋಪ, ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಹಾಗೂ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಕುಡಿಯುವ ನೀರಿನ ತೊಂದರೆ ಕಂಡುಬರುವ ಗ್ರಾಮಗಳಿಗೆ ಸಂಬಂಧಿಸಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿ ಆದ್ಯತೆ ಮೇರೆಗೆ ಕುಡಿವ ನೀರಿನ ವ್ಯವಸ್ಥೆ ಕಲ್ಪಿಸಲು ಎಲ್ಲ ಕ್ರಮ ತೆಗೆದುಕೊಳ್ಳಬೇಕು. ಕುಡಿವ ನೀರಿನ ಅಭಾವ ಉಂಟಾಗದಂತೆ ಮುಂಜಾಗ್ರತಾ ವಹಿಸಬೇಕೆಂದು ನಿರ್ದೇಶನ ನೀಡಿದರು.ರಸಗೊಬ್ಬರ, ಬಿತ್ತನೆ ಬೀಜ, ಬೆಳೆ ಹಾನಿ ಪರಿಹಾರ, ಇಲಾಖೆಗಳಲ್ಲಿರುವ ಯೋಜನೆಗಳ ಬಗ್ಗೆ ಹೆಚ್ಚಿನ ಗಮನ ನೀಡಬೇಕು. ಎಲ್ಲಾ ಇಲಾಖಾಧಿಕಾರಿಗಳು ಅಗಿಂದಾಗ್ಗೆ ಕ್ಷೇತ್ರ ಭೇಟಿ ನೀಡಬೇಕು. ಇಲಾಖೆಗಳಿಗೆ ಸಂಬಂಧಿಸಿದ ಕಾಮಗಾರಿಗಳು ಗುಣಮಟ್ಟದ ಬಗ್ಗೆ ಪರಿಶೀಲಿಸಬೇಕು. ನಿಗದಿತ ಅವಧಿಯೊಳಗೆ ಎಲ್ಲ ಕಾರ್ಯಗಳನ್ನು ಪೂರ್ಣಗೊಳಿಸಿ ಸರ್ಕಾರದ ಅನುದಾನ ವ್ಯರ್ಥವಾಗದಂತೆ ಕ್ರಮವಹಿಸಬೇಕು ಎಂದು ಸೂಚಿಸಿದರು.
ವಿದ್ಯಾರ್ಥಿನಿಲಯಗಳಿಗೆ ಸಂಬಂಧಪಟ್ಟ ಇಲಾಖಾಧಿಕಾರಿಗಳು ಆಗಿಂದಾಗ್ಗೆ ಭೇಟಿ ನೀಡಿ ಮಕ್ಕಳಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟ ಹಾಗೂ ಮೂಲಭೂತ ಸೌಕರ್ಯದ ಬಗ್ಗೆ ಪರಿಶೀಲಿಸಬೇಕು ಎಂದು ಸೂಚಿಸಿದರು.ವಿಪತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಮಾತನಾಡಿ, ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಮಳೆಯ ಕೊರತೆ ಕಂಡು ಬಂದಿದೆ. ಜಿಲ್ಲೆ ವಾಡಿಕೆ ಮಳೆ ೩೨೦ ಮೀ.ಮೀ ಇದ್ದು, ಪ್ರಸ್ತುತ ಕೇವಲ ೨೧೧ ಮೀ.ಮೀ ಮಳೆಯಾಗಿದೆ. ಶೇ. ೩೪ರಷ್ಟು ಕೊರತೆ ಇದೆ. ಹಾಗಾಗಿ ಅಂತರ್ಜಲಮಟ್ಟ ಕುಸಿದು ಕೊಳವೆ ಬಾವಿಗಳಲ್ಲಿ ನೀರಿನ ಇಳುವರಿ ಕಡಿಮೆಯಾಗಿದೆ ಎಂದು ವಿವರಿಸಿದರು.
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದಿಂದಾಗಿ ಯಾವುದೇ ಮಾನವ ಜೀವ ಹಾನಿ ಸಂಭವಿಸಿಲ್ಲ. ಪೂರ್ವ ಮುಂಗಾರಿನಲ್ಲಿ ಒಂದು ಜಾನುವಾರು ಹಾಗೂ ಮುಂಗಾರು ಹಂಗಾಮಿನಲ್ಲಿ ಒಂದು ಜಾನುವಾರು ಸಿಡಿಲಿಗೆ ಬಲಿಯಾಗಿವೆ. ಮಾಲೀಕರಿಗೆ ಎನ್.ಡಿ.ಆರ್.ಎಫ್ ಮಾರ್ಗಸೂಚಿಯಂತೆ ಪರಿಹಾರ ನೀಡಲಾಗಿದೆ. ಮುಂಗಾರಿನಲ್ಲಿ ಹಾನಿಯಾದ ಮನೆಗಳಿಗೂ ಪರಿಹಾರ ನೀಡಲಾಗಿದೆ. ಹಿಂಗಾರು ಹಂಗಾಮಿನಲ್ಲಿ ೧೬ ಮನೆ ಭಾಗಶಃ ಹಾಗೂ ೨ ಮನೆ ಸಂಪೂರ್ಣ ಹಾನಿಯಾಗಿದ್ದು ಪರಿಹಾರ ನೀಡಲು ಕ್ರಮವಹಿಸಲಾಗುತ್ತಿದೆ ಎಂದರು.ಪೂರ್ವ ಮುಂಗಾರಿನಲ್ಲಿ ೨೪೧.೦೩ ಹೆಕ್ಟೆರ್ ನಷ್ಟು ಬೆಳೆ ಹಾನಿಯಾಗಿದ್ದು, ಈಗಾಗಲೇ ಡಿ.ಬಿ.ಟಿ ಮೂಲಕ ಜಿಲ್ಲಾ ವಿಪತ್ತು ನಿರ್ವಹಣಾ ಖಾತೆಯಿಂದ ಪರಿಹಾರ ನೀಡಲಾಗಿದೆ. ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ೮.೭೭ಹೆಕ್ಟೇರ್ ಬೆಳೆ ಹಾನಿಯಾಗಿದ್ದು, ಭೂಮಿ ಪರಿಹಾರ ತಂತ್ರಾಂಶದಲ್ಲಿ ಮಾಹಿತಿ ಇಂಡೀಕರಿಸಿ ಪರಿಹಾರ ವಿತರಿಸಲು ಕ್ರಮವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದರು.
ಸಿಇಒ ಮೋನಾ ರೋತ್, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಜಿಪಂ ಉಪಕಾರ್ಯದರ್ಶಿ ಶೃತಿ, ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.