ಕನ್ನಡಪ್ರಭ ವಾರ್ತೆ ಬೆಂಗಳೂರು
ರಾಜ್ಯಸಭೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಬಿಜೆಪಿಯ ಮಾಜಿ ಸಚಿವ ವಿ.ಸೋಮಣ್ಣ ಅವರು ಮಿತ್ರ ಪಕ್ಷವಾದ ಜೆಡಿಎಸ್‌ನ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಈ ಮಾತುಕತೆ ಬಳಿಕ ಸೋಮಣ್ಣ ಅವರು ಬರುವ ಎರಡು ಅಥವಾ ಮೂರು ದಿನಗಳಲ್ಲಿ ದೆಹಲಿಗೆ ತೆರಳಿ ಪಕ್ಷದ ವರಿಷ್ಠರೊಂದಿಗೆ ಸಮಾಲೋಚನೆ ನಡೆಸಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬುಧವಾರ ಬಿಡದಿಯ ಕುಮಾರಸ್ವಾಮಿ ಅವರ ತೋಟದ ಮನೆಗೆ ತೆರಳಿ ಸೋಮಣ್ಣ ಅವರು ಸುಮಾರು ಒಂದು ಗಂಟೆ ಕಾಲ ಸುದೀರ್ಘ ಚರ್ಚೆ ನಡೆಸಿದರು.
ಮಾತುಕತೆ ವೇಳೆ ತುಮಕೂರು ಲೋಕಸಭಾ ಕ್ಷೇತ್ರದ ಬಗ್ಗೆಯೂ ಪ್ರಸ್ತಾಪವಾಗಿದೆ. ಪಕ್ಷದ ವರಿಷ್ಠರು ಸೂಚಿಸಿದರೆ ತಾವು ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧ ಎಂಬ ಮಾತನ್ನು ಇತ್ತೀಚೆಗೆ ಸೋಮಣ್ಣ ಅವರು ಬಹಿರಂಗವಾಗಿಯೇ ಹೇಳಿದ್ದರು.
ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರ ಬಳಿ ಈ ಕ್ಷೇತ್ರದ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ ಎಂದು ಜೆಡಿಎಸ್ ಮೂಲಗಳು ಮಾಹಿತಿ ನೀಡಿವೆ.