ಕನ್ನಡಪ್ರಭ ವಾರ್ತೆ ಹರಿಹರ
ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಬೇಸಿಗೆ ಆರಂಭವಾಗಿರುವ ಹಿನ್ನೆಲೆಯಲ್ಲಿ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಳ್ಳದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಭದ್ರಾ ಜಲಾಶಯ ವ್ಯಾಪ್ತಿಯ ಕೊನೆಯ ಭಾಗವಾಗಿರುವ ಹರಿಹರ ಕ್ಷೇತ್ರದಲ್ಲಿ ರೈತರ ಭೂಮಿಗೆ ಸಮರ್ಪಕವಾಗಿ ನೀರು ಹರಿಸುವ ವ್ಯವಸ್ಥೆ ಅಗತ್ಯವಿದೆ. ಜೊತೆಗೆ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಹೆಸರಿನಲ್ಲಿ ನಿರ್ಮಿಸಲಾದ ಸಮುದಾಯ ಭವನಗಳ ಸದ್ಬಳಕೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕೆಂದು ತಿಳಿಸಿದರು.ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಮೂಲಕ ಜಾರಿಯಾಗಿರುವ ಯೋಜನೆಗಳ ಲಾಭ ಜನರಿಗೆ ತಲುಪಿಸುವ ಜವಾಬ್ದಾರಿ ಅಧಿಕಾರಿಗಳದ್ದೇ ಆಗಿದ್ದು, ಕಚೇರಿಗಳಲ್ಲೇ ಕುಳಿತು ಕಾಲಹರಣ ಮಾಡುವ ಬದಲು ತಮ್ಮ ತಮ್ಮ ಕಾರ್ಯಕ್ಷೇತ್ರಗಳಿಗೆ ಭೇಟಿ ನೀಡಿ ಪ್ರಗತಿ ಸಾಧಿಸಬೇಕೆಂದು ಎಚ್ಚರಿಸಿದರು.
ಸಭೆಯಲ್ಲಿ ಕೆಡಿಪಿ ಸದಸ್ಯ ಕಮಲಾಪುರ ಮಲ್ಲೇಶಪ್ಪ ಮಾತನಾಡಿ, ಜಲಜೀವನ್ ಮಿಷನ್ ಯೋಜನೆಯಡಿ ಗ್ರಾಮಾಂತರ ಪ್ರದೇಶಗಳಲ್ಲಿ ಮನೆ–ಮನೆಗೆ ಕುಡಿಯುವ ನೀರು ಪೂರೈಕೆ ಸಮರ್ಪಕವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಎಳೆಹೊಳೆ, ಎಕ್ಕಿಗೊ೦ದಿ, ನಾಗೇನಹಳ್ಳಿ, ಬೆಳ್ಳೂಡಿ ಗ್ರಾಮಗಳಲ್ಲಿ ಯೋಜನೆ ಸಮರ್ಪಕವಾಗಿ ಜಾರಿಯಾಗದಿರುವುದನ್ನು ಉಲ್ಲೇಖಿಸಿ, ಸಂಬಂಧಿಸಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಮಾತನಾಡಿ, ಕೆಲ ಗ್ರಾಮಗಳಲ್ಲಿ ಸಾರ್ವಜನಿಕರು ನೀರು ಯೋಜನೆಗೆ ಅಗತ್ಯವಾದ ವಂತಿಗೆ ಪಾವತಿಸದಿರುವುದರಿಂದ ಯೋಜನೆ ಜಾರಿಗೆ ಅಡಚಣೆ ಉಂಟಾಗಿದೆ ಎಂದು ವಿವರಿಸಿದರು. ಈಗಾಗಲೇ ಗುತ್ತಿಗೆದಾರರಿಗೆ ಶೇ. 90ರಷ್ಟು ಹಣ ಬಿಡುಗಡೆ ಮಾಡಲಾಗಿದೆ ಎಂದರು.
ಶೈಕ್ಷಣಿಕ ವಿಷಯವಾಗಿ ಮಾತನಾಡಿದ ಶಾಸಕ ಬಿ.ಪಿ.ಹರೀಶ್, ಈ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಸಾಧಿಸಲು ಶಿಕ್ಷಕರು ಹಾಗೂ ಪಾಲಕರು ಮಕ್ಕಳಿಗೆ ಸಹಕಾರ ನೀಡಬೇಕು. ಹರಿಹರದ ಡಿಆರ್‌ಎಂ ಶಾಲೆ ಹಾಗೂ ಗುತುರು ಸರ್ಕಾರಿ ಶಾಲೆಯನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಮೇಲ್ದರ್ಜೆಗೇರಿಸಲು ಸರ್ಕಾರ ಅನುಮೋದನೆ ನೀಡಿದೆ ಎಂದರು.ತಾಲೂಕು ಪಂಚಾಯತ್ ಅಧಿಕಾರಿಗಳು, ವಿವಿಧ ಇಲಾಖೆಗಳ ಮುಖ್ಯಸ್ಥರು, ಕೆಡಿಪಿ ಸದಸ್ಯರು ಹಾಜರಿದ್ದರು.