ಕನ್ನಡಪ್ರಭ ವಾರ್ತೆ ಮಡಿಕೇರಿ
ಜಿಲ್ಲೆಯಲ್ಲಿ ಇದೇ ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭವಾಗುವ ನಿರೀಕ್ಷೆ ಇದ್ದು, ಪೂರ್ವ ಮುಂಗಾರು ಕೃಷಿಕರಲ್ಲಿ ಸಂತಸ ತಂದಿದೆ.ಕೊಡಗು ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಭತ್ತ ಮತ್ತು ಮುಸುಕಿನ ಜೋಳ ಪ್ರಮುಖ ಬೆಳೆಯಾಗಿದ್ದು, ಕೃಷಿ ಚಟುವಟಿಕೆಗೆ ಭೂಮಿ ಹದ ಮಾಡುವ ಕಾರ್ಯ ನಡೆದಿದೆ. ಜೂ.15 ರ ನಂತರ ಭತ್ತ ಸಸಿಮಡಿ ಕಾರ್ಯ ಆರಂಭವಾಗಲಿದೆ. ಹಾಗೆಯೇ ಮುಂಗಾರು ಆರಂಭದಲ್ಲಿ ಮುಸುಕಿನ ಜೋಳ ಬಿತ್ತನೆ ಕಾರ್ಯ ಆರಂಭವಾಗಲಿದೆ.
ಜಿಲ್ಲೆಯಲ್ಲಿ ಜನವರಿಯಿಂದ ಮೇ ತಿಂಗಳ ಅಂತ್ಯಕ್ಕೆ ವಾಡಿಕೆ ಮಳೆ 252 ಮಿ.ಮೀ. ಆಗಿದ್ದು, ಈಗಾಗಲೇ ಈ ಬಾರಿ ಸರಾಸರಿ 248 ಮಿ.ಮೀ. ಮಳೆಯಾಗಿರುವುದು ವಿಶೇಷವಾಗಿದೆ. ಅದರಲ್ಲೂ ಮೇ ತಿಂಗಳಲ್ಲಿ ಹೆಚ್ಚಿನ ಮಳೆಯಾಗಿದೆ.ಜಿಲ್ಲೆಯಲ್ಲಿ 32,500 ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಚಟುವಟಿಕೆ ಕೈಗೊಳ್ಳುವ ಗುರಿ ಇದ್ದು, ಇದರಲ್ಲಿ 29 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯುವ ಗುರಿ ಹೊಂದಲಾಗಿದೆ. 3,500 ಹೆಕ್ಟೇರ್ ಪ್ರದೇಶದಲ್ಲಿ ಮುಸುಕಿನ ಜೋಳ ಬೆಳೆಯುವ ಗುರಿ ಹೊಂದಲಾಗಿದೆ. 70 ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಬೆಳೆಯುವ ಗುರಿ ಹೊಂದಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸೋಮಸುಂದರ ತಿಳಿಸಿದ್ದಾರೆ.
ಬಿತ್ತನೆ ಬೀಜ ದಾಸ್ತಾನು:ಈಗಾಗಲೇ ಮುಂಗಾರಿಗೆ ಅವಶ್ಯವಿರುವ ಸುಮಾರು 1871 ಕ್ವಿಂಟಾಲ್‌ನಷ್ಟು ಭತ್ತ ಬಿತ್ತನೆ ಬೀಜ ದಾಸ್ತಾನು ಮಾಡಿಕೊಳ್ಳಲಾಗಿದೆ. ಹಾಗೆಯೇ 41 ಕ್ವಿಂಟಾಲ್ ಮುಸುಕಿನ ಜೋಳ ಬಿತ್ತನೆ ಬೀಜ ದಾಸ್ತಾನು ಮಾಡಿಕೊಳ್ಳಲಾಗಿದೆ.
ಜಿಲ್ಲೆಯಲ್ಲಿ ಮುಂಗಾರಿಗೆ ಬೇಕಿರುವ ಸುಮಾರು 80,946 ಮೆಟ್ರಿಕ್ ಟನ್ ರಸಗೊಬ್ಬರ ಬೇಡಿಕೆ ಇದ್ದು, ಈಗಾಗಲೇ 35,774 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಇದೆ. ಕೃಷಿಕರ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಸಲಾಗುತ್ತದೆ ಎಂದು ಸೋಮಸುಂದರ ಮಾಹಿತಿ ನೀಡಿದ್ದಾರೆ.