ಬಿತ್ತನೆ ಬೀಜ-ಗೊಬ್ಬರದ ಸಮಸ್ಯೆ ಆಗದಿರಲಿ

KannadaprabhaNewsNetwork |  
Published : May 18, 2025, 01:03 AM IST
17ಕೆಪಿಎಲ್22 2025-26 ನೇ ಸಾಲಿನ ಮುಂಗಾರು ಹಂಗಾಮಿನ ಪೂರ್ವಸಿದ್ಧತೆ, ದ್ವೈಮಾಸಿಕ ಕಾರ್ಯಾಗಾರ ಹಾಗೂ ವಿಕಸಿತ ಕೃಷಿ ಸಂಕಲ್ಪ ಅಭಿಯಾನ | Kannada Prabha

ಸಾರಾಂಶ

ಮುಂಗಾರು ಹಂಗಾಮಿನ ಸಿದ್ಧತೆ ಪೂರ್ವದಲ್ಲಿ ಸರ್ಕಾರ ರೈತರಿಗೆ ಬೇಕಾಗಿರುವ ಬಿತ್ತನೆ ಬೀಜ, ರಸಗೊಬ್ಬರದ ವ್ಯವಸ್ಥೆ ಜತೆಗೆ ಅನೇಕ ಯೋಜನೆ ಮತ್ತು ಕಾರ್ಯಕ್ರಮ ಬಗ್ಗೆಯೂ ರೈತರಿಗೆ ತಿಳಿಸಲಾಗುತ್ತಿದೆ. ಈ ಬಾರಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮುಂಗಾರು ಬಿತ್ತನೆ ಪ್ರಾರಂಭವಾಗಲಿದೆ. ಬಿತ್ತನೆ ಬೀಜ ಮತ್ತು ಗೊಬ್ಬರಕ್ಕೆ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು.

ಕೊಪ್ಪಳ:

ಮುಂಗಾರು ಹಂಗಾಮಿಗೆ ಅವಶ್ಯವಿರುವ ಬಿತ್ತನೆ ಬೀಜ, ರಸಗೊಬ್ಬರದ ಜತೆಗೆ ರೈತರಿಗೆ ಕೃಷಿ ಇಲಾಖೆಯ ಕಾರ್ಯಕ್ರಮ ಸಮರ್ಪಕವಾಗಿ ತಲುಪಿಸಬೇಕೆಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.

ಜಿಲ್ಲಾ ಪಂಚಾಯಿತಿಯಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೃಷಿ ಇಲಾಖೆ, ಗಂಗಾವತಿಯ ಕೃಷಿ ವಿಜ್ಞಾನ ಕೇಂದ್ರ ಮತ್ತು ಕೊಪ್ಪಳದ ಕೃಷಿ ತಂತ್ರಜ್ಞರ ಸಂಸ್ಥೆ ವತಿಯಿಂದ ಹಮ್ಮಿಕೊಂಡಿದ್ದ 2025-26ನೇ ಸಾಲಿನ ಮುಂಗಾರು ಹಂಗಾಮಿನ ಪೂರ್ವಸಿದ್ಧತೆ, ದ್ವೈಮಾಸಿಕ ಕಾರ್ಯಾಗಾರ ಹಾಗೂ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಉದ್ಘಾಟಿಸಿ ಮಾತನಾಡಿದರು.

ಮುಂಗಾರು ಹಂಗಾಮಿನ ಸಿದ್ಧತೆ ಪೂರ್ವದಲ್ಲಿ ಸರ್ಕಾರ ರೈತರಿಗೆ ಬೇಕಾಗಿರುವ ಬಿತ್ತನೆ ಬೀಜ, ರಸಗೊಬ್ಬರದ ವ್ಯವಸ್ಥೆ ಜತೆಗೆ ಅನೇಕ ಯೋಜನೆ ಮತ್ತು ಕಾರ್ಯಕ್ರಮ ಬಗ್ಗೆಯೂ ರೈತರಿಗೆ ತಿಳಿಸಲಾಗುತ್ತಿದೆ. ಈ ಬಾರಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮುಂಗಾರು ಬಿತ್ತನೆ ಪ್ರಾರಂಭವಾಗಲಿದೆ. ಬಿತ್ತನೆ ಬೀಜ ಮತ್ತು ಗೊಬ್ಬರಕ್ಕೆ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕೆಂದು ಸೂಚಿಸಿದರು.

ಇತ್ತೀಚೆಗೆ ಆಲಿಕಲ್ಲು ಮಳೆಯಿಂದ ಭತ್ತದ ಬೆಳೆ ನಷ್ಟವಾಗಿದ್ದು, ಪರಿಹಾರ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮುಖ್ಯಮಂತ್ರಿಗೆ ತಿಳಿಸಿದ್ದೇವೆ. ರೈತರು ಉತ್ತಮ ಬೆಳೆ ಬೆಳೆದಾಗ ಬೆಲೆ ಸಿಗುವುದಿಲ್ಲ. ಬೆಲೆ ಇದ್ದಾಗ ಬೆಳೆ ಇರುವುದಿಲ್ಲ. ಈ ಕಾರಣದಿಂದ ಸಾಲದಿಂದ ಮುಕ್ತಿಹೊಂದಲು ರೈತರಿಗೆ ಕಷ್ಟವಾಗುತ್ತದೆ ಎಂದ ಅವರು, ಕೃಷಿ ಹೊಂಡ ನಿರ್ಮಾಣ ಯೋಜನೆಯಿಂದ ರೈತರಿಗೆ ಅನುಕೂಲವಾಗಿದೆ. ವಿಕಸಿತ ಕೃಷಿ ಸಂಕಲ್ಪ ಅಭಿಯಾನದಡಿ ಮಣ್ಣು ಪರೀಕ್ಷಾ ವಾಹನ ಉದ್ಘಾಟಿಸಿದ್ದು ರೈತರು ಹೆಲ್ಪ್‌ಲೈನ್‌ಗೆ ಕರೆ ಮಾಡಿದಾಗ ತ್ವರಿತಗತಿಯಲ್ಲಿ ಸ್ಪಂದಿಸಬೇಕು. ಜತೆಗೆ ಸ್ಥಳಕ್ಕೆ ಭೇಟಿ ನೀಡಿ, ಮಣ್ಣು ಪರೀಕ್ಷಿಸಿ, ಅಲ್ಲಿ ಯಾವ ಬೆಳೆ ಬೆಳೆಯಲು ಸೂಕ್ತವೆಂದು ರೈತರಿಗೆ ಮಾಹಿತಿ ನೀಡಬೇಕು. ಈ ಬಗ್ಗೆ ಅಧಿಕಾರಿಗಳು ಚುರುಕಾಗಿ ಕೆಲಸ ಮಾಡಬೇಕೆಂದು ಹೇಳಿದರು.

ಜಿಲ್ಲಾಧಿಕಾರಿ ನಲಿನ್ ಅತುಲ್ ಮಾತನಾಡಿ , ಮುಂಗಾರು ಹಂಗಾಮಿಗೆ ಅಗತ್ಯ ಸಿದ್ಧತೆ ಕೈಗೊಳ್ಳಲಾಗುತ್ತಿದ್ದು, ಜಿಲ್ಲೆಯಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರಕ್ಕೆ ಯಾವುದೇ ಕೊರತೆಯಿಲ್ಲ. ಬೇಡಿಕೆಗಿಂತಲು ಶೇ. 20ರಷ್ಟು ಹೆಚ್ಚಿನ ಪ್ರಮಾಣದ ಬೀಜ-ಗೊಬ್ಬರ ದಾಸ್ತಾನಿದೆ. ಬಿತ್ತನೆ ಬೀಜ ಮತ್ತು ರಸಗೊಬ್ಬರ ಮಾರಾಟಗಾರರು ಎಂಆರ್‌ಪಿಗಿಂತ ಹೆಚ್ಚಿನ ದರಕ್ಕೆ ಬಿತ್ತನೆ ಬೀಜ ಮತ್ತು ರಸಗೊಬ್ಬರ ಮಾರಾಟ ಮಾಡಿರುವ ಬಗ್ಗೆ ಯಾವುದೇ ದೂರು ಬಂದಲ್ಲಿ ಅಂತಹವರ ವಿರುದ್ಧ ಕಾನೂನು ಮೂಲಕ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಜಿಲ್ಲಾಧಿಕಾರಿಗೆ ಸನ್ಮಾನ:

2023-24ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಜಿಲ್ಲೆಗೆ ರಾಷ್ಟ್ರಮಟ್ಟದ ಪ್ರಶಸ್ತಿ ಲಭಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರನ್ನು ಬೆಂಗಳೂರಿನ ಐಎಟಿ ಸಂಸ್ಥೆ, ಜಿಲ್ಲಾ ಕೃಷಿಕ ಸಮಾಜ ಹಾಗೂ ಕೃಷಿ ಇಲಾಖೆಯಿಂದ ಸನ್ಮಾನಿಸಲಾಯಿತು.

ಬಿತ್ತನೆ ಬೀಜ ವಿತರಣೆ:

ಕೃಷಿ ಇಲಾಖೆಯಿಂದ ಹೊರತಂದಿರುವ ಡಿಎಪಿ ಬದಲಾಗಿ ಇತರೆ ರಸಗೊಬ್ಬರ ಬಳಕೆಯ ಮಾಹಿತಿ ಮತ್ತು ದೇಶಿ ತಳಿಯ ಸಂರಕ್ಷಣೆ ಕುರಿತಾದ ಮಾಹಿತಿಯ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಲಾಯಿತು. ಇದೇ ವೇಳೆ ಮುಂಗಾರು ಹಂಗಾಮಿನ ಬಿತ್ತನೆ ಬೀಜಗಳನ್ನು ರೈತರಿಗೆ ಸಾಂಕೇತಿಕವಾಗಿ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೇಯ, ಜಂಟಿ ಕೃಷಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ, ಕೃಷಿಕ ಸಮಾಜದ ಜಿಲ್ಲಾಧ್ಯಕ್ಷ ಶೇಖರಗೌಡ ಮಾಲಿ ಪಾಟೀಲ್, ಕೃಷಿಕ ಸಮಾಜದ ರಾಜ್ಯ ಪ್ರತಿನಿಧಿ ಶಿವಣ್ಣ ಮೂಲಿಮನಿ, ಬೆಂಗಳೂರಿನ ಐಎಟಿ ಕಾರ್ಯದರ್ಶಿ ವೀರಣ್ಣ ಕಂತಾರ, ಗಂಗಾವತಿಯ ಕೃಷಿ ವಿಜ್ಞಾನ ಕೇಂದ್ರ ಮುಖ್ಯಸ್ಥ ರಾಘವೇಂದ್ರ ಯಲಿಗಾರ ಹಾಗೂ ವಿಜ್ಞಾನಿಗಳು, ಕೃಷಿಕ ಸಮಾಜದ ಸದಸ್ಯರು, ಮುನಿರಾಬಾದ್ ತೋಟಗಾರಿಕೆ ಮಹಾವಿದ್ಯಾಲಯದ ಅಧಿಕಾರಿಗಳು, ಕೃಷಿ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.ವಿಕಸಿತ ಕೃಷಿ ಸಂಕಲ್ಪ ಅಭಿಯಾನಕ್ಕೆ ಚಾಲನೆ

ಕಾರ್ಯಕ್ರಮಕ್ಕೂ ಪೂರ್ವದಲ್ಲಿ ಜಿಲ್ಲಾಡಳಿತ ಭವನದ ಆವರಣದಲ್ಲಿ ಕೃಷಿ ಇಲಾಖೆಯಿಂದ ಆಯೋಜಿಸಿರುವ ವಿಕಸಿತ ಕೃಷಿ ಸಂಕಲ್ಪ ಅಭಿಯಾನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಶಾಸಕರು ಹಾಗೂ ಜಿಲ್ಲಾಧಿಕಾರಿ ಚಾಲನೆ ನೀಡಿದರು. ಈ ವೇಳೆ ಜಿಪಂ ಸಿಇಒ, ಜಿಲ್ಲಾ ಕೃಷಿಕ ಸಮಾಜ, ಕೃಷಿ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಸೇರಿ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎರಡು ಪೋಲಿಯೊ ಹನಿ ಮಕ್ಕಳಿಗೆ ಜೀವಾಮೃತ: ಶಾಸಕ ಪ್ರಸಾದ್ ಅಬ್ಬಯ್ಯ
₹22267 ಕೋಟಿ ವೆಚ್ಚದಲ್ಲಿ 16.75 ಕಿ.ಮೀ ಸುರಂಗ ರಸ್ತೆ ನಿರ್ಮಿಸಲು ಅದಾನಿ ಗ್ರೂಪ್ ಬಿಡ್‌ ಸಲ್ಲಿಕೆ