ಕೊಪ್ಪಳ: ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗೆ ಕಡಿವಾಣ ಹಾಕಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಾಹಿಲ್ ಬಾಗ್ಲಾ ಕಾರ್ಯಾಚರಣೆ ನಡೆಸಿ, ಹಲವು ಕಡೆ ಪರಿಶೀಲಿಸಿ ಬಿಸಿ ಮುಟ್ಟಿಸಿದ್ದಾರೆ.
ಕಳೆದ ತಿಂಗಳು ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದ್ದ ಸಾಹಿಲ್ ಬಾಗ್ಲಾ ಅವರಿಗೆ ಆರಂಭದ ದಿನಗಳಲ್ಲಿ ರಾಜ್ಯಮಟ್ಟದ ಬಿಜೆಪಿ ಪಾದಯಾತ್ರೆ, ಗಣೇಶ ಚತುರ್ಥಿ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಬಂದೋಬಸ್ತ್ ಜವಾಬ್ದಾರಿ ಇತ್ತು. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಅಕ್ರಮ ಚಟುವಟಿಕೆ ಮೇಲೆ ನಿರಂತರ ನಿಗಾ ಇರಿಸುವುದು ಸವಾಲಾಗಿತ್ತು. ಈ ನಡುವೆ ಕೆಲವು ಕಡೆ ಅಕ್ರಮ ಚಟುವಟಿಕೆ ನಡೆಯುತ್ತಿರುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿದ್ದು, ಇದೀಗ ಎಸ್ಪಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ.
ಹೋಟೆಲ್, ಬಾರ್‌ಗಳ ಮೇಲೆ ನಿಗಾ: ಶನಿವಾರ ರಾತ್ರಿ ಕೊಪ್ಪಳ ನಗರದ ಪ್ರಮುಖ ಹೋಟೆಲ್ ಮತ್ತು ಬಾರ್‌ಗಳಿಗೆ ಖುದ್ದು ಭೇಟಿ ನೀಡಿದ ಎಸ್ಪಿ ಸಾಹಿಲ್ ಬಾಗ್ಲಾ, ನಿಗದಿತ ಸಮಯ ಪಾಲನೆಯಾಗುತ್ತಿದೆಯೇ, ಅಗತ್ಯ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆಯೇ, ಧೂಮಪಾನ ನಿಷೇಧಿತ ವಲಯದ ನಿಯಮಗಳನ್ನು ಅನುಸರಿಸಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಿದರು.ಇದೇ ವೇಳೆ ಜಿಲ್ಲೆಯ ಏಳು ತಾಲೂಕುಗಳ 18 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದರು. ಒಟ್ಟು 77 ಕಡೆಗಳ ಬಾರ್ ಮತ್ತು ರೆಸ್ಟೋರೆಂಟ್‌ಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಿ, ನಿಯಮ ಉಲ್ಲಂಘನೆ ಕಂಡುಬಂದ ಕಡೆಗಳಲ್ಲಿ ಮಾಲೀಕರಿಗೆ ಎಚ್ಚರಿಕೆ ನೀಡಿದರು. ಕಾನೂನುಬದ್ಧ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಿದರು.
ಅಧಿಕಾರಿಗಳಿಗೆ ಖಡಕ್ ಸೂಚನೆ: ಜಿಲ್ಲೆಯಲ್ಲಿ ಎಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿವೆ ಎಂಬ ಮಾಹಿತಿ ತಮ್ಮ ಗಮನಕ್ಕೆ ಬಂದಿದ್ದು, ಸಂಬಂಧಿಸಿದ ಸ್ಥಳಗಳಿಗೆ ಕೂಡಲೇ ಭೇಟಿ ನೀಡಿ ಕ್ರಮ ಕೈಗೊಳ್ಳಬೇಕು. ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧವೂ ಕ್ರಮ ಜರುಗಿಸಲಾಗುವುದು ಎಂದು ಎಸ್ಪಿ ಸಾಹಿಲ್ ಬಾಗ್ಲಾ ಅವರು ಭಾನುವಾರ ಬೆಳಗ್ಗೆ ಪೊಲೀಸ್ ಠಾಣೆಗಳ ಅಧಿಕಾರಿಗಳೊಂದಿಗೆ ನಡೆದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕಳೆದ ಎರಡು ದಿನಗಳಿಂದ ಜಿಲ್ಲಾ ಪೊಲೀಸ್ ಇಲಾಖೆ ಅಲರ್ಟ್ ಆಗಿದ್ದು, ಅಕ್ರಮ ಚಟುವಟಿಕೆ ಮೇಲೆ ನಿಗಾ ಬಿಗಿಗೊಳಿಸಿದೆ. ಮುಂದಿನ ದಿನಗಳಲ್ಲಿ ಈ ಕಾರ್ಯಾಚರಣೆ ನಿರಂತರವಾಗಿ ಮುಂದುವರಿಯಲಿದೆಯೇ ಎಂಬುದರ ಮೇಲೆ ಸಾರ್ವಜನಿಕರ ಗಮನ ನೆಟ್ಟಿದೆ.ಕಟ್ಟುನಿಟ್ಟಿನ ನಿಗಾ ವಹಿಸಿ: ಜಿಲ್ಲೆಯಲ್ಲಿ ಅಕ್ರಮವಾಗಿ ಮರಳು ಸಾಗಣೆ ನಡೆಯದಂತೆ ಕಟ್ಟುನಿಟ್ಟಿನ ನಿಗಾ ವಹಿಸಬೇಕು ಎಂದು ಎಸ್ಪಿ ಸಾಹಿಲ್ ಬಾಗ್ಲಾ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕಾನೂನು ಪಾಲನೆ ಎಲ್ಲರ ಜವಾಬ್ದಾರಿಯಾಗಿದ್ದು, ಅಕ್ರಮ ಮರಳು ಸಾಗಣೆ ಕಂಡುಬಂದಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕು. ಅಕ್ರಮ ಚಟುವಟಿಕೆ ಕುರಿತು ಲಭ್ಯವಾಗುವ ಮಾಹಿತಿಯನ್ನು ಗಂಭೀರವಾಗಿ ಪರಿಗಣಿಸಿ, ಸ್ಥಳಕ್ಕೆ ಭೇಟಿ ನೀಡಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧವೂ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.