ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ವಿವಿಧ ಭವನಗಳ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದರು.
ಮಂಗಳೂರು: ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ವಿವಿಧ ಭಾಷೆ ಮತ್ತು ಸಾಹಿತ್ಯ ಭವನಗಳ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಕೈಗೊಂಡು ಪೂರ್ಣಗೊಳಿಸುವಂತೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಸೂಚಿಸಿದ್ದಾರೆ.
ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಭವನಗಳ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ತುಳು ಭವನದ ಹಲವು ಕಾಮಗಾರಿ ಬಾಕಿ ಇದೆ. ಕೊಂಕಣಿ ಭವನದ ಕಾಮಗಾರಿ ಅರ್ಧದಲ್ಲಿ ನಿಂತಿದೆ. ಬ್ಯಾರಿ ಭವನಕ್ಕೆ ನಿವೇಶನ ಗುರುತಿಸಿದ್ದು, ಕಾಮಗಾರಿ ಇನ್ನೂ ಆರಂಭಗೊಂಡಿಲ್ಲ. ಈ ಎಲ್ಲ ಭವನಗಳಿಗೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅನುದಾನ ನೀಡಿದ್ದು, ಈ ನಿಟ್ಟಿನಲ್ಲಿ ಎಲ್ಲ ತಾಂತ್ರಿಕ ಸಮಸ್ಯೆಗಳನ್ನು ಇತ್ಯರ್ಥಪಡಿಸಿ ಶೀಘ್ರ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಿದರು.ಜಿಲ್ಲಾ ರಂಗಮಂದಿರ ನಗರದ ಬೊಂದೆಲ್‍ನಲ್ಲಿ ನಿರ್ಮಾಣಗೊಳ್ಳಲಿದ್ದು, ಈಗಾಗಲೇ ಮಹಾನಗರ ಪಾಲಿಕೆ ಕಾಮಗಾರಿ ಟೆಂಡರ್ ಕರೆದಿದೆ. ಕಾಸರಗೋಡು ಬದಿಯಡ್ಕದಲ್ಲಿ ಡಾ. ಕೈಯಾರ ಕಿಞ್ಞಣ್ಣ ರೈ ಸಭಾಭವನ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಶೀಘ್ರದಲ್ಲಿ ಕರ್ನಾಟಕ ಮತ್ತು ಕೇರಳ ಮುಖ್ಯಮಂತ್ರಿಗಳಿಂದ ಉದ್ಘಾಟಿಸಲಾಗುವುದು ಎಂದು ಅವರು ತಿಳಿಸಿದರು.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಾಕಿ ಇರುವ ವಿವಿಧ ಭವನಗಳ ಕಾಮಗಾರಿಗೆ ಹೆಚ್ಚುವರಿ ಅನುದಾನ ಕೋರಿ ಏಕ ಕಡತದಲ್ಲಿ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವಂತೆ ಸ್ಪೀಕರ್ ಯು.ಟಿ ಖಾದರ್ ಸೂಚಿಸಿದರು.ಸಭೆಯಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನಮರದ, ಕಾರ್ಯದರ್ಶಿ ಪ್ರಕಾಶ್, ಸದಸ್ಯ ಎ.ಆರ್. ಸುಬ್ಬಯ್ಯನಕಟ್ಟೆ, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಅಪರ ಜಿಲ್ಲಾಧಿಕಾರಿ ರಾಜು ಕೆ. ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.