ಮಾ. 8ರಂದು ಮಹಾ ಶಿವರಾತ್ರಿ, 9ರಂದು 2ನೇ ಶನಿವಾರ ಹಾಗೂ 10 ರಂದು ಭಾನುವಾರ ಹೀಗೆ ಸಾಲು ಸಾಲು ಸಾರ್ವಜನಿಕ ರಜೆಗಳು ಬಂದಿವೆ. ಪ್ರಯಾಣಿಕರ ಅನುಕೂಲಕ್ಕಾಗಿ ಮಾ. 7ರಿಂದ 11ರ ವರೆಗೆ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.
ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ
ಮಹಾ ಶಿವರಾತ್ರಿ ಹಬ್ಬ ಹಾಗೂ ಸಾಲು ಸಾಲು ಸಾರ್ವಜನಿಕ ರಜೆಗಳ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿ, ಈ ಬಾರಿ ಮಾ. 8ರಂದು ಮಹಾ ಶಿವರಾತ್ರಿ, 9ರಂದು 2ನೇ ಶನಿವಾರ ಹಾಗೂ 10 ರಂದು ಭಾನುವಾರ ಹೀಗೆ ಸಾಲು ಸಾಲು ಸಾರ್ವಜನಿಕ ರಜೆಗಳು ಬಂದಿವೆ. ಈ ಅವಧಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರ ಓಡಾಟ ನಿರೀಕ್ಷಿಸಲಾಗಿದೆ. ಅವರ ಅನುಕೂಲಕ್ಕಾಗಿ ಮಾ. 7ರಿಂದ 11ರ ವರೆಗೆ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.
ಸರ್ಕಾರಿ, ಖಾಸಗಿ ಉದ್ಯೋಗಿಗಳು, ಇತರೆ ಕಾರ್ಯ ನಿಮಿತ್ತ ಬೆಂಗಳೂರು, ಪುಣೆ, ಗೋವಾ ಮತ್ತಿತರ ಪರ ಊರುಗಳಲ್ಲಿ ನೆಲೆಸಿರುವ ಹಲವರು ಶಿವರಾತ್ರಿ ಹಬ್ಬದ ಆಚರಣೆಗಾಗಿ ಸ್ವಂತ ಊರುಗಳಿಗೆ ಆಗಮಿಸಲಿದ್ದಾರೆ. ಅವರ ಅನುಕೂಲಕ್ಕಾಗಿ ಫೆ. 7 ಗುರುವಾರ ಹಾಗೂ 8 ಶುಕ್ರವಾರ ಬೆಂಗಳೂರು, ಪುಣೆ, ಗೋವಾ ಮತ್ತಿತರ ಪ್ರಮುಖ ಸ್ಥಳಗಳಿಂದ ಹುಬ್ಬಳ್ಳಿಗೆ ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.
ಅದೇ ರೀತಿ ರಜೆ ಮುಗಿಸಿ ತಮ್ಮ ಕಾರ್ಯ ಕ್ಷೇತ್ರಗಳಿಗೆ ಹಿಂದಿರುಗುವವರ ಅನುಕೂಲಕ್ಕಾಗಿ ಮಾ. 10 ಭಾನುವಾರ ಹಾಗೂ 11ರಂದು ಸೋಮವಾರ ಹುಬ್ಬಳ್ಳಿಯಿಂದ ಬೆಂಗಳೂರು, ಪುಣೆ, ಗೋವಾ, ಮಂಗಳೂರು, ವಿಜಯಪುರ, ಬಾಗಲಕೋಟೆ ಮತ್ತಿತರ ಪ್ರಮುಖ ಸ್ಥಳಗಳಿಗೆ ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.
ಈ ಅವಧಿಯಲ್ಲಿ ಜಿಲ್ಲೆಯೊಳಗೆ ವಿವಿಧ ಸ್ಥಳಗಳು ಹಾಗೂ ಅಕ್ಕಪಕ್ಕದ ಜಿಲ್ಲೆಗಳ ನಡುವೆಯೂ ಪ್ರಯಾಣಿಕರ ಹೆಚ್ಚಳಕ್ಕೆ ತಕ್ಕಂತೆ ಹೆಚ್ಚುವರಿ ಬಸ್‌ಗಳನ್ನು ಬಿಡಲಾಗುತ್ತದೆ.
ಮುಂಗಡ ಬುಕಿಂಗ್‌ಗೆ ರಿಯಾಯಿತಿ:
ಹಬ್ಬದ ವಿಶೇಷ ಬಸ್ಸುಗಳಿಗೆ https://www.ksrtc.in ಅಥವಾ KSRTC Mobile App ಹಾಗೂ ಬಸ್ ನಿಲ್ದಾಣಗಳಲ್ಲಿ ಮುಂಗಡ ಬುಕ್ಕಿಂಗ್ ಮಾಡಲು ಅವಕಾಶ ಕಲ್ಪಿಸಲಾಗಿದೆ. ಒಂದೇ ಟಿಕೆಟ್ ನಲ್ಲಿ 4 ಅಥವಾ ಹೆಚ್ಚಿನ ಸೀಟುಗಳನ್ನು ಕಾಯ್ದಿರಿಸಿದರೆ ಪ್ರಯಾಣ ದರದಲ್ಲಿ ಶೇ. 5ರಷ್ಟು ರಿಯಾಯಿತಿ ನೀಡಲಾಗುತ್ತದೆ. ಹೋಗುವ ಮತ್ತು ಹಿಂದಿರುಗುವ ಪ್ರಯಾಣಕ್ಕೆ ಒಂದೇ ಟಿಕೆಟ್ ಪಡೆದರೆ ಹಿಂದಿರುಗುವ ಪ್ರಯಾಣದರದಲ್ಲಿ ಶೇ. 10ರಷ್ಟು ರಿಯಾಯಿತಿ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.