ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಹೇಳಿಕೆ
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಹಯೋಗದೊಂದಿಗೆ ರಾಜ್ಯಾದ್ಯಂತ 90 ದಿನಗಳ ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ ಎಂಬ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ನಗರದ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶೆ ಮತ್ತು ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ತೇಜಸ್ವಿನಿ ಸೊಗಲದ ತಿಳಿಸಿದ್ದಾರೆ.
ಮಂಗಳವಾರ ಮಾಹಿತಿ ನೀಡಿದ ಅವರು, 2026ರ ಜನವರಿ 2ರಿಂದ ಆಯೋಜಿಸಿರುವ 90 ದಿನಗಳ ಅಭಿಯಾನದಲ್ಲಿ ತಾಲೂಕಿನ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣವನ್ನು ಮಧ್ಯಸ್ಥಿಕೆಯ ಮೂಲಕ ಇತ್ಯರ್ಥ ಪಡಿಸಿಕೊಳ್ಳಬಹುದಾಗಿದೆ. ಸಾರ್ವಜನಿಕರು ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ತಕ್ಷಣ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ.ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಮೋಟಾರ್ ಅಪಘಾತ ಪರಿಹಾರ ನ್ಯಾಯಾಧಿಕಾರಣದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಕಾರ್ಮಿಕ ವಿವಾದಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೈಮುಗಳು, ಭೂ ಸ್ವಾಧೀನ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ರಾಜಿಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳು, ವೈವಾಹಿಕ, ಕುಟುಂಬ ನ್ಯಾಯಾಲಯದ ಪ್ರಕರಣಗಳು (ವಿಚ್ಚೇದನೆ ಹೊರತುಪಡಿಸಿ), ನ್ಯಾಯಾಲಯಗಳಲ್ಲಿ ಉಭಯ ಪಕ್ಷಗಾರರು ರಾಜಿ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು.
ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯ ಉಳಿದು ವಿವಾದವೂ ಬಗೆಹರಿಯುತ್ತದೆ. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜಿ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ. ಹೆಚ್ಚಿನ ಮಾಹಿತಿಗಾಗಿ ದಾಂಡೇಲಿ ತಾಲೂಕು ಕಾನೂನು ಸೇವಾ ಸಮಿತಿಯನ್ನು ನೇರವಾಗಿ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.