ಹುಬ್ಬಳ್ಳಿ:
ಹು-ಧಾ ಸೆಂಟ್ರಲ್ ವಿಧಾನಸಭಾ ವ್ಯಾಪ್ತಿಯಲ್ಲಿನ ಪುಟ್‌ಪಾತ್ ಅತಿಕ್ರಮಣ ಹಾಗೂ ಗೂಡಂಗಡಿಗಳ ತೆರವು ಕಾರ್ಯಾಚರಣೆಗೆ ಅಧಿವೇಶನದ ಬಳಿಕ ವಿಶೇಷ ಡ್ರೈವ್ ನಡೆಸಲಾಗುವುದು ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.ಇಲ್ಲಿನ ಪಾಲಿಕೆ ಆಯುಕ್ತರ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದರು. ಹು-ಧಾ ಮಹಾನಗರ ಪಾಲಿಕೆಯಲ್ಲಿ ಪುಟ್‌ಪಾತ್ ಅತಿಕ್ರಮಣ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಸೆಂಟ್ರಲ್ ಕ್ಷೇತ್ರವ್ಯಾಪ್ತಿಯಲ್ಲಿ 25 ವಾರ್ಡ್‌ಗಳ ಸದಸ್ಯರ ಸಭೆ ಕರೆದು ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಪ್ರಮುಖ ರಸ್ತೆಗಳನ್ನು ಗುರುತಿಸಿ ಎಲ್ಲೆಲ್ಲಿ ಈ ಸಮಸ್ಯೆಯಾಗಿದೆ ಎಂಬ ಮಾಹಿತಿ ಪಡೆಯಲಾಗಿದೆ. ಬೆಳಗಾವಿ ಚಳಿಗಾಲದ ಅಧಿವೇಶನದ ಬಳಿಕ ಮತ್ತೊಮ್ಮೆ ಪಾಲಿಕೆ ಸದಸ್ಯರೊಂದಿಗೆ ಸಭೆ ನಡೆಸಿ ವಿಶೇಷ ಡ್ರೈವ್‌ನ ದಿನಾಂಕ ನಿಗದಿಗೊಳಿಸುವುದಾಗಿ ತಿಳಿಸಿದರು.
₹100 ಕೋಟಿ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ:ಹು-ಧಾ ಸೆಂಟ್ರಲ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 25 ವಾರ್ಡ್‌ಗಳಲ್ಲಿ ಅಂದಾಜು ₹100 ಕೋಟಿ ವೆಚ್ಚದಲ್ಲಿ ನೂತನ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಯು ಶೀಘ್ರದಲ್ಲೇ ಆರಂಭವಾಗಲಿದೆ. ಈ ಸಂಬಂಧ ವಾರ್ಡ್ ಸದಸ್ಯರ, ಅಧಿಕಾರಿಗಳ ಹಾಗೂ ಗುತ್ತಿಗೆದಾರರ ಸಭೆ ಮಾಡಿ ಚರ್ಚಿಸಲಾಗಿದೆ. ರಸ್ತೆ ನಿರ್ಮಾಣಕ್ಕೂ ಮುನ್ನ ಆಗಬೇಕಿರುವ 24/7 ಕುಡಿಯುವ ನೀರಿನ ಪೈಪ್‌ಲೈನ್ ಕಾಮಗಾರಿ, ಒಳಚರಂಡಿ ಕಾಮಗಾರಿ ಹಾಗೂ ಗ್ಯಾಸ್ ಪೈಪ್‌ಲೈನ್ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ತ್ವರಿತವಾಗಿ ಮುಗಿಸುವಂತೆ ಸೂಚಿಸಲಾಗಿದೆ. ಒಮ್ಮೆ ರಸ್ತೆ ನಿರ್ಮಾಣವಾದ ಬಳಿಕ ಮತ್ತೆ ಹಡ್ಡುವ ಪ್ರಮೇಯ ಬಾರದಂತೆ ನೋಡಿಕೊಳ್ಳಬೇಕು ಎಂದು ಎಲ್ ಆ್ಯಂಡ್ ಟಿ ಹಾಗೂ ಪಾಲಿಕೆಯ ಅಧಿಕಾರಿಗಳಿಗೆ ತಾಕೀತು ಮಾಡಲಾಗಿದೆ ಎಂದರು.
ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ₹100 ಕೋಟಿ ಅನುದಾನದ ಸಂಬಂಧ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ನೇತೃತ್ವದಲ್ಲಿ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ವಿಷಯ ಪ್ರಸ್ತಾಪಿಸಿದ್ದೇವೆ. ಅದಕ್ಕೆ ಅವರು ಸಹಮತ ವ್ಯಕ್ತಪಡಿಸಿದ್ದಾರೆ. ಇನ್ನೂ ಆರು ತಿಂಗಳ ನಂತರ ನೂತನ ರಸ್ತೆ ನಿರ್ಮಾಣ ಕಾಮಗಾರಿ ಆರಂಭವಾಗಲಿದೆ ಎಂದು ಮಾಹಿತಿ ನೀಡಿದರು.ಅಧಿವೇಶನದಲ್ಲಿ ಚರ್ಚೆ:
ಹು-ಧಾ ಮಹಾನಗರ ಪಾಲಿಕೆಯ ವ್ಯಾಪ್ತಿ ಹೆಚ್ಚಾಗಿದೆ. ದಿನದಿಂದ ದಿನಕ್ಕೆ ಇಲ್ಲಿನ ಜನಸಂಖ್ಯೆಯೂ ಬೆಳೆಯುತ್ತಿದೆ. ಆದರೆ, ಜನಸಂಖ್ಯೆಗೆ ಅನುಗುಣವಾಗಿ ಪಾಲಿಕೆಯಲ್ಲಿ ಅಧಿಕಾರಿಗಳ, ನೌಕರರ ಸಂಖ್ಯೆ ತೀರ ಕಡಿಮೆ ಇದೆ. ಹೀಗಾಗಿ ನಿರೀಕ್ಷಿತ ಮಟ್ಟದಲ್ಲಿ ನಗರ ಸೌಂದರೀಕರಣ ಸಾಧ್ಯವಾಗುತ್ತಿಲ್ಲ. ಪಾಲಿಕೆಯಲ್ಲಿನ 2347 ಹುದ್ದೆಗಳ ಪೈಕಿ 913 ಹುದ್ದೆ ಮಾತ್ರ ಭರ್ತಿಯಾಗಿದ್ದು, ಇನ್ನುಳಿದ 1435 ಹುದ್ದೆ ಖಾಲಿ ಇವೆ. ಈ ಸಂಬಂಧ ಚಳಿಗಾಲದ ಅಧಿವೇಶನದಲ್ಲಿ ಧ್ವನಿ ಎತ್ತಲಾಗುವುದು ಎಂದರು.ನಗರ ಸ್ವಚ್ಛತೆಯ ಸಂಬಂಧ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಒಂದೊಂದು ಬಡಾವಣೆ ಆಯ್ಕೆ ಮಾಡಿಕೊಂಡು ಸ್ವತಃ ತಾವೇ ನಿಂತು ಸ್ವಚ್ಛತೆ ಮಾಡಬೇಕು ಎಂದು ಯೋಜನೆ ಹಾಕಿಕೊಳ್ಳಲಾಗಿದೆ. ಅಧಿವೇಶನ ಮುಗಿದ ಬಳಿಕ ಯಾವ ದಿನವನ್ನು ಸ್ವಚ್ಛತೆಗೆ ಮೀಸಲಿಡಬೇಕು ಎಂಬುದನ್ನು ತೀರ್ಮಾನಿಸಲಾಗುವುದು ಎಂದರು.
ಈ ವೇಳೆ ಮೇಯರ್ ಜ್ಯೋತಿ ಪಾಟೀಲ, ಉಪ ಮೇಯರ್ ಸಂತೋಷ ಚವ್ಹಾಣ, ಪಾಲಿಕೆಯ ಆಯುಕ್ತ ಡಾ. ರುದ್ರೇಶ ಘಾಳಿ, ಉಪಆಯುಕ್ತ ವಿಜಯಕುಮಾರ, ಪಾಲಿಕೆಯ ಸದಸ್ಯರಾದ ರೂಪಾ ಶೆಟ್ಟಿ, ಎಂ.ಐ. ನರಗುಂದ, ಮೀನಾಕ್ಷಿ ಒಂಟಮೂರಿ, ಸುವರ್ಣಾ ಕಲಕುಂಟ್ಲ ಸೇರಿದಂತೆ ಹಲವರಿದ್ದರು.ಎಲ್ ಆ್ಯಂಡ್ ಟಿ ವಿರುದ್ಧ ಕ್ರಿಮಿನಲ್ ಕೇಸ್?ಹು-ಧಾ ಅವಳಿ ನಗರಕ್ಕೆ ಕುಡಿಯುವ ನೀರು ಪೂರೈಕೆಯ ಜವಾಬ್ದಾರಿ ಹೊತ್ತಿರುವ ಎಲ್ ಆ್ಯಂಡ್ ಟಿ ಸಂಸ್ಥೆ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸುತ್ತಿಲ್ಲ. ಅಲ್ಲದೆ, 24/7 ಪೈಪ್ ಲೈನ್ ಅಳವಡಿಕೆಯ ಕಾಮಗಾರಿಯನ್ನು ಪೂರ್ತಿಗೊಳಿಸಲು ಮತ್ತೆ 2026ರ ಡಿಸೆಂಬರ್ ವರೆಗೆ ಕಾಲಮಿತಿ ಕೇಳಿದ್ದಾರೆ. ಅಷ್ಟರಲ್ಲಿ ಕಾಮಗಾರಿ ಮುಗಿಸಬೇಕು. ಇಲ್ಲದಿದ್ದರೆ ಅವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಸಚಿವ ಸಂತೋಷ ಲಾಡ್ ಪಾಲಿಕೆಯ ಆಯುಕ್ತರಿಗೆ ಸೂಚಿಸಿದ್ದಾರೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ತಿಳಿಸಿದರು.