3.5 ಕೋಟಿ ರು. ವೆಚ್ಚದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಬಾಸ್ಕೆಟ್ ಬಾಲ್ ಕ್ರೀಡಾಂಗಣ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಲಾಗಿದೆ. ಮುಂದಿನ ತಿಂಗಳು ಸಂಬಂಧಪಟ್ಟ ಸಚಿವರ ದಿನಾಂಕ ನಿಗದಿಯಾದ ನಂತರ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗುವುದು.
ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ವಿವಿಧ ವಾರ್ಡ್‌ಗಳಲ್ಲಿ ರಸ್ತೆ ಅಭಿವೃದ್ಧಿ, ಚರಂಡಿ ನಿರ್ಮಾಣ, ಉದ್ಯಾನವನಗಳ ಅಭಿವೃದ್ಧಿ ಹಾಗೂ ಫುಟ್‌ಪಾತ್ ವ್ಯಾಪಾರಿಗಳಿಗೆ ಶಾಶ್ವತ ಮಳಿಗೆಗಳ ನಿರ್ಮಾಣ ಸೇರಿದಂತೆ 4.5 ಕೋಟಿ ರು. ವೆಚ್ಚದ ಕಾಮಗಾರಿಗಳಿಗೆ ಶಾಸಕ ಪಿ.ರವಿಕುಮಾರ್ ಚಾಲನೆ ನೀಡಿದರು.
ನಂತರ ಮಾತನಾಡಿದ ಶಾಸಕರು, 60 ಲಕ್ಷ ರು. ವೆಚ್ಚದಲ್ಲಿ ಸುಸಜ್ಜಿತ ವಾಲಿಬಾಲ್ ಕ್ರೀಡಾಂಗಣ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಗಿದೆ. ಗುತ್ತಿಗೆದಾರರು ಕಾಮಗಾರಿಯನ್ನು ಉತ್ತಮ ಗುಣಮಟ್ಟದಲ್ಲಿ ಮೂರು ತಿಂಗಳೊಳಗೆ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ಕ್ರೀಡಾಂಗಣ ಪೂರ್ಣಗೊಂಡ ಬಳಿಕ ಕ್ರೀಡಾ ವಿದ್ಯಾರ್ಥಿಗಳು ಹಾಗೂ ಸ್ಥಳೀಯ ಕ್ರೀಡಾಪಟುಗಳಿಗೆ ತರಬೇತಿ ಪಡೆಯಲು ಅನುಕೂಲವಾಗುವಂತೆ ವಾಲಿಬಾಲ್ ಪಂದ್ಯಾವಳಿ ಆಯೋಜಿಸಿ ಕ್ರೀಡಾಂಗಣವನ್ನು ಲೋಕಾರ್ಪಣೆ ಮಾಡಲು ಉದ್ದೇಶಿಸಲಾಗಿದೆ ಎಂದರು.
3.5 ಕೋಟಿ ರು. ವೆಚ್ಚದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಬಾಸ್ಕೆಟ್ ಬಾಲ್ ಕ್ರೀಡಾಂಗಣ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಲಾಗಿದೆ. ಮುಂದಿನ ತಿಂಗಳು ಸಂಬಂಧಪಟ್ಟ ಸಚಿವರ ದಿನಾಂಕ ನಿಗದಿಯಾದ ನಂತರ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗುವುದು ಎಂದರು.
ನಗರದ ಕ್ರೀಡಾಪಟುಗಳಿಗೆ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಸ್ಪರ್ಧೆಗಳಿಗೆ ಸಿದ್ಧತೆ ನಡೆಸಲು ಅಗತ್ಯ ಮೂಲಸೌಕರ್ಯ ದೊರೆಯಲಿದೆ. ವಿಶ್ವೇಶ್ವರಯ್ಯ ಕ್ರೀಡಾಂಗಣಕ್ಕೆ ಫ್ಲಡ್‌ಲೈಟ್ ಅಳವಡಿಸಲು 3 ಕೋಟಿ ರು. ಅನುದಾನ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸಂಬಂಧಪಟ್ಟ ಇಲಾಖೆ ಸಚಿವರೊಂದಿಗೆ ಚರ್ಚಿಸಿ ಅಗತ್ಯ ಅನುದಾನ ಬಿಡುಗಡೆ ಮಾಡಿಸಿ ಕಾಮಗಾರಿ ಕೈಗೊಳ್ಳಲು ಕ್ರಮವಹಿಸಲಾಗುವುದು. ಇದರಿಂದ ಹಗಲು ಸಮಯಕ್ಕೆ ಮಾತ್ರ ಸೀಮಿತವಾಗಿದ್ದ ಕ್ರೀಡಾ ಚಟುವಟಿಕೆಗಳು ಸಂಜೆ ಹಾಗೂ ರಾತ್ರಿ ವೇಳೆ ನಡೆಸಲು ಸಾಧ್ಯವಾಗಲಿದೆ ಎಂದರು.
ಮಂಡ್ಯ ವಿವಿ ಕ್ಯಾಂಪಸ್‌ನಲ್ಲಿ 2 ಕೋಟಿ ರು. ವೆಚ್ಚದಲ್ಲಿ ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಲಾಗಿದೆ. ಕಾಮಗಾರಿ ಈಗಾಗಲೇ ಆರಂಭಗೊಂದ್ದು, ಮುಂದಿನ ನಾಲ್ಕು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸಿ ಕ್ರೀಡಾಪಟುಗಳ ಬಳಕೆಗೆ ನೀಡಲಾಗುವುದು ಎಂದರು.
ನಗರದಲ್ಲಿ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗಾಗಿ ಇದುವರೆಗೆ ಸುಮಾರು 10 ಕೋಟಿ ರು. ಅನುದಾನ ವಿನಿಯೋಗಿಸಲಾಗಿದೆ. ಈ ಅನುದಾನದ ಮೂಲಕ ವಿವಿಧ ಕ್ರೀಡೆಗಳಿಗೆ ಸುಸಜ್ಜಿತ ಮೈದಾನ, ತರಬೇತಿ ಮತ್ತು ಮೂಲ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಕ್ರೀಡಾ ವಿದ್ಯಾರ್ಥಿಗಳು ಉತ್ತಮ ತರಬೇತಿ ಪಡೆದು ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಬೇಕು ಎಂದರು.
ನಗರದಲ್ಲಿ ರಸ್ತೆ, ಚರಂಡಿ, ಉದ್ಯಾನವನ ಹಾಗೂ ಬೀದಿ ವ್ಯಾಪಾರಿಗಳಿಗೆ ಶಾಶ್ವತ ವ್ಯವಸ್ಥೆ ಕಲ್ಪಿಸುವ ಮೂಲಕ ನಗರ ಮೂಲ ಸೌಕರ್ಯಕ್ಕೆ ಒತ್ತು ನೀಡಲಾಗುತ್ತಿದೆ. ಕ್ರೀಡಾ ಕ್ಷೇತ್ರಕ್ಕೆ ಸಾಕಷ್ಟು ಅನುದಾನ ಒದಗಿಸಿ ಕ್ರೀಡಾಪಟುಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಉತ್ತಮ ಕ್ರೀಡಾ ಮೂಲಸೌಕರ್ಯ ಹೊಂದಿದ ನಗರವಾಗಿ ರೂಪುಗೊಳ್ಳುವ ನಿರೀಕ್ಷೆ ಇದೆ ಎಂದರು.
ಈ ವೇಳೆ ಮುಡಾ ಅಧ್ಯಕ್ಷ ಬಿ.ಪಿ.ಪ್ರಕಾಶ್, ಕೆರಗೋಡು ಸೋಮಶೇಖರ್, ಹೊಸಹಳ್ಳಿ ರಮೇಶ್, ಎಂ.ಕೃಷ್ಣ, ರವಿ, ಮಹೇಶ್ ಕೃಷ್ಣ ಸೇರಿದಂತೆ ಹಲವರು ಇದ್ದರು. ಖೇಲೋ ಇಂಡಿಯಾ ಕ್ರೀಡಾಂಗಣ ನಾನೇ ಕಾಮಗಾರಿ ಆರಂಭಿಸುವೆ
ಖೇಲೋ ಇಂಡಿಯಾ ಕ್ರೀಡಾಂಗಣ ನಿರ್ಮಾಣಕ್ಕಾಗಿ ನಗರದ ಕಲ್ಲಹಳ್ಳಿಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಜಾಗ ಪಡೆದುಕೊಂಡು ಒಂದು ವರ್ಷ ಕಳೆದಿದ್ದರೂ ಕಾಮಗಾರಿ ಆರಂಭವಾಗಿಲ್ಲ. ಇನ್ನೂ ಎರಡು ತಿಂಗಳೊಳಗೆ ಕೇಂದ್ರ ಸಚಿವರು ಕ್ರೀಡಾಂಗಣದ ಕಾಮಗಾರಿ ಆರಂಭಿಸದಿದ್ದರೆ ನಾನೇ ಅಗತ್ಯ ಅನುದಾನವನ್ನು ರಾಜ್ಯ ಸರ್ಕಾರದಿಂದಲೇ ಬಿಡುಗಡೆಗೊಳಿಸಿ ಕಾಮಗಾರಿ ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುವುದಾಗಿ ಶಾಸಕರು ತಿಳಿಸಿದರು.
ಕ್ರೀಡಾಂಗಣ ನಿರ್ಮಾಣಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡುವ ವಿಚಾರದಲ್ಲಿ ಯಾವುದೇ ಕೊರತೆಯಿಲ್ಲ. ಕೇಂದ್ರ ಸರ್ಕಾರಕ್ಕೆ ಅಗತ್ಯ ಸಹಕಾರ ನೀಡಲು ರಾಜ್ಯ ಸರ್ಕಾರ ಸಿದ್ಧವಿದೆ. ಆದರೆ, ಜಾಗವನ್ನು ನೀಡಿದ ನಂತರವೂ ಕಾಮಗಾರಿ ಆರಂಭವಾಗದಿರುವುದರಿಂದ ಸ್ಥಳೀಯ ಜನರಲ್ಲಿ ತಪ್ಪು ಸಂದೇಶ ಹೋಗಬಾರದು ಎಂಬ ಕಾರಣಕ್ಕೆ ಈವರೆಗೆ ತಾಳ್ಮೆಯಿಂದ ಇದ್ದೇನೆ ಎಂದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.