ಕನ್ನಡಪ್ರಭ ವಾರ್ತೆ ಮಳವಳ್ಳಿ
ತಾಲೂಕಿನ ವಿವಿಧೆಡೆಯಿಂದ ಆಗಮಿಸಿದ ಭಕ್ತರು ದೇವರ ದರ್ಶನ ಪಡೆದುಕೊಂಡರು. ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಶುಕ್ರವಾರ ಬೆಳಗ್ಗಿನ ಜಾವದಿಂದಲೇ ದೇವರ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಿ, ವೈಕುಂಠ ದ್ವಾರವನ್ನು ಸಾಂಪ್ರದಾಯಿಕವಾಗಿ ನಿರ್ಮಿಸಿ ದೇವರಿಗೆ ವಿಶೇಷ ಅಭಿಷೇಕ, ಪೂಜೆ ನೆರವೇರಿಸಲಾಯಿತು. ಸ್ವಾಮಿಗೆ ವಿವಿಧ ಬಗೆಯ ಹೂವುಗಳಿಂದ ಅಲಂಕಾರ ಮಾಡಲಾಗಿತ್ತು.
ನೂರಾರು ಸಂಖ್ಯೆಯಲ್ಲಿ ಭೇಟಿ ನೀಡಿದ ಭಕ್ತರಿಗೆ ದೇವಸ್ಥಾನದ ವತಿಯಿಂದ ಪ್ರಸಾದ ನೀಡಲಾಯಿತು. ಗಂಗಾಧರೇಶ್ವರಸ್ವಾಮಿ ದೇವಸ್ಥಾನದಲ್ಲಿಯೂ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಪಟ್ಟಣದ ಕೋಟೆ ಸಾರಂಗಪಾಣಿ ದೇವಸ್ಥಾನದಲ್ಲೂ ಸಹ ವೈಕುಂಠ ಏಕಾದಶಿ ಪ್ರಯುಕ್ತ ಉತ್ಸವಮೂರ್ತಿಗೆ ಮಾಡಲಾಗಿದ್ದ ಅಲಂಕಾರ ಭಕ್ತರ ಗಮನ ಸೆಳೆಯಿತು. ಬಳಿಕ ಭಕ್ತರಿಗೆ ಪ್ರಸಾದ ವಿನಿಯೋಗ ಸಹ ಮಾಡಲಾಯಿತು. ಶಾಸಕ ಪಿ.ಎಂ.ನರೇಂದ್ರಸ್ವಾಮಿ ಕುಟುಂಬದ ಸದಸ್ಯರೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡರು.ತಾಲೂಕಿನ ಸುಣ್ಣದದೊಡ್ಡಿ ಗ್ರಾಮದ ಲಕ್ಷ್ಮೀನಾರಾಯಣಸ್ವಾಮಿ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ವೈಕುಂಠ ಏಕಾದಶಿ ಆಚರಿಸಲಾಯಿತು. ಬೆಳಗ್ಗೆಯೇ ದೇವರಿಗೆ ಅಭಿಷೇಕ ಸೇರಿದಂತೆ ನಾನಾ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಭಕ್ತರು ಸರದಿ ಸಾಲಿನಲ್ಲಿ ತೆರಳಿ ದೇವರ ದರ್ಶನ ಪಡೆದರು. ಭಕ್ತರಿಗೆ ಪ್ರಸಾದ ವಿತರಿಸಲಾಯಿತು.