ಬಾಲಕಾರ್ಮಿಕರ ಪತ್ತೆ ಕಾರ್ಯಕ್ಕೆ ವೇಗ ನೀಡಿ : ಡಾ.ಆರ್.ಸೆಲ್ವಮಣಿ

KannadaprabhaNewsNetwork | Published : Oct 27, 2023 12:30 AM

ಸಾರಾಂಶ

ಜಿಲ್ಲೆಯಲ್ಲಿ ಕಳೆದ ಕೆಲವು ವರ್ಷಗಳಲ್ಲಿ ಬಾಲಕಾರ್ಮಿಕರ ಪತ್ತೆ ಕಾರ್ಯ ನಿಧಾನಗತಿಯಲ್ಲಿ ಸಾಗುತ್ತಿದೆ. ಈ ಕಾರ್ಯಕ್ಕೆ ವೇಗ ನೀಡಿ ಇನ್ನಷ್ಟು ಬಾಲಕಾರ್ಮಿಕರನ್ನು ಗುರುತಿಸಿ, ಅವರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವ ತುರ್ತು ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್‌.ಸೆಲ್ವಮಣಿ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲೆಯಲ್ಲಿ ಬಾಲಕಾರ್ಮಿಕರ ನಿಯಂತ್ರಣಕ್ಕೆ ಕ್ರಮ ಅಗತ್ಯ । ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಕಾರ್ಯಪಡೆ ಸಮಿತಿ ಸಭೆ ಕನ್ನಡಪ್ರಭ ವಾರ್ತೆ ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಕೆಲವು ವರ್ಷಗಳಲ್ಲಿ ಬಾಲಕಾರ್ಮಿಕರ ಪತ್ತೆ ಕಾರ್ಯ ನಿಧಾನಗತಿಯಲ್ಲಿ ಸಾಗುತ್ತಿದೆ. ಈ ಕಾರ್ಯಕ್ಕೆ ವೇಗ ನೀಡಿ ಇನ್ನಷ್ಟು ಬಾಲಕಾರ್ಮಿಕರನ್ನು ಗುರುತಿಸಿ, ಅವರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವ ತುರ್ತು ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್‌.ಸೆಲ್ವಮಣಿ ಅಧಿಕಾರಿಗಳಿಗೆ ತಿಳಿಸಿದರು. ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಜಿಲ್ಲಾ ಮಟ್ಟದ ಕಾರ್ಯಪಡೆ ಸಮಿತಿ ಸಭೆಯಲ್ಲಿ ಅವರು ಮಾತನಾಡಿ, ಶಿಕ್ಷಣ ವಂಚಿತ ಮಕ್ಕಳು ಕಾರ್ಖಾನೆ, ಗ್ಯಾರೇಜು, ಹೋಟೆಲ್ ಮತ್ತಿತರ ಕೆಲಸ-ಕಾರ್ಯಗಳಲ್ಲಿ ಇನ್ನೂ ಬಾಲ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಈ ಮಕ್ಕಳನ್ನು ಬಾಲಕಾರ್ಮಿಕ ಪದ್ದತಿಯಿಂದ ಮುಕ್ತಗೊಳಿಸಿ, ಶಿಕ್ಷಣದ ಮುಖ್ಯವಾಹಿನಿಗೆ ಕರೆತರುವಲ್ಲಿ ಯತ್ನಿಸದಿದ್ದರೆ ಈ ಮಕ್ಕಳು ಭವಿಷ್ಯದಲ್ಲಿ ಸಮಾಜಘಾತಕ ಚಟುವಟಿಕೆಗಳಲ್ಲಿ ಭಾಗಿಯಾಗುವ ಆತಂಕವಿದೆ ಎಂದು ಎಚ್ಚರಿಕೆ ನೀಡಿದರು. ಜಿಲ್ಲೆಯಲ್ಲಿ ಕಳೆದ ಕೆಲವು ವರ್ಷಗಳಲ್ಲಿ ದಾಖಲಾಗಿರುವ ಬಾಲಕಾರ್ಮಿಕರ ಸಂಖ್ಯೆ ಕಡಿಮೆ ಇದೆ. ಜಿಲ್ಲಾಪಂಚಾಯಿತಿಯ ಸಹಕಾರ ಪಡೆದು, ಪಂಚಾಯಿತಿ ಮಟ್ಟದಲ್ಲಿಯೂ ಬಾಲಕಾರ್ಮಿಕರನ್ನು ಗುರುತಿಸಿ, ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳುವವರ ವಿರುದ್ಧ ಮೊಕದ್ದಮೆ ದಾಖಲಿಸುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿಗೆ ಸೂಚಿಸಿದರು. ಹೊಸನಗರ ಮತ್ತು ತೀರ್ಥಹಳ್ಳಿ ತಾಲೂಕುಗಳ ಗ್ರಾಮಾಂತರ ಪ್ರದೇಶಗಳಲ್ಲಿ ಹೊರರಾಜ್ಯಗಳಿಂದ ವಲಸೆ ಬಂದಿರುವ ಕಾರ್ಮಿಕರ ಮಕ್ಕಳನ್ನು ಕೃಷಿ ಚಟುವಟಿಕೆಗಳಿಗೆ ಬಳಸಿಕೊಳ್ಳುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ದೂರುಗಳು ಕೇಳಿ ಬರುತ್ತಿವೆ. ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಸಕಾಲದಲ್ಲಿ ತಪಾಸಣೆ ನಡೆಸಿ, ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಶಿಕ್ಷಣ ಇಲಾಖೆಯ ಅಧಿಕಾರಿಗಳೂ ಕೂಡ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ, ಅವರು ಅನ್ಯ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಹಾಗೂ ಅವರ ಪೋಷಕರ ಮನವೊಲಿಸಿ, ಶಾಲೆಗೆ ಕರೆತರುವಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಿದ ಅವರು, ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ ನಡೆಸಿ, ಅವರ ಚಟುವಟಿಕೆಗಳ ಬಗ್ಗೆ ಗಮನಹರಿಸುವಂತೆ ಸೂಚಿಸಿದರು. ಬಾಲ್ಯವಿವಾಹ, ಸಾಗಾಣಿಕೆ, ಬಾಲಕಾರ್ಮಿಕರ ಬಗ್ಗೆಯೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆಯುವ ಮಕ್ಕಳ ಸಭೆಗಳಲ್ಲಿ ಸಮಾಲೋಚನೆ ನಡೆಸುವಂತೆ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಗೋಡೆ ಬರಹಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಬೇಕು. ಬಾಲಕಾರ್ಮಿಕರನ್ನು ಗುರುತಿಸಲು ಹಾಗೂ ಬಾಲಕರನ್ನು ಬಳಸಿಕೊಳ್ಳುತ್ತಿರುವವರ ವಿರುದ್ಧ ಕ್ರಮ ವಹಿಸಲು ಸಂಬಂಧಿತ ಇಲಾಖೆಗಳ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡಲು ಕೂಡಲೇ ತರಬೇತಿ ಕಾರ್ಯಾಗಾರವನ್ನು ಆಯೋಜಿಸುವಂತೆ ಸಲಹೆ ನೀಡಿದರು. ಇತ್ತೀಚೆಗೆ ಭದ್ರಾವತಿ ತಾಲೂಕಿನಲ್ಲಿ ಗುರುತಿಸಲಾದ 2 ಪ್ರಕರಣಗಳಿಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಮೊಕದ್ದಮೆ ದಾಖಲಿಸುವಂತೆ ಹಾಗೂ ಈ ಹಿಂದೆ ತನಿಖಾ ಹಂತದಲ್ಲಿರುವ 9 ಮೊಕದ್ದಮೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಸೂಚನೆ ನೀಡಿದ ಅವರು, ಬಾಲ ಕಾರ್ಮಿಕ ಪ್ರಕರಣಗಳು ಕಂಡುಬಂದಲ್ಲಿ ಸಾರ್ವಜನಿಕರು ಉಚಿತ ಸಹಾಯವಾಣಿ 1098ಗೆ ಕರೆ ಮಾಡಿ ದೂರು ದಾಖಲಿಸಬಹುದು ಎಂದು ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಸುಮಾ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸುಜಾತಾ, ಜಿಲ್ಲಾ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಗಣೇಶ್, ಬಾಲಕಾರ್ಮಿಕ ಯೋಜನಾಧಿಕಾರಿ ರಾಘವೇಂದ್ರ ಸೇರಿದಂತೆ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Share this article